Advertisement

ಉಭಯ ಸದನದಲ್ಲಿ ಸರ್ಕಾರದ ವಿರುದ್ಧ ಹೋರಾಟ ನಡೆಸಲು ಕಾಂಗ್ರೆಸ್ ತೀರ್ಮಾನ

10:43 PM Dec 19, 2022 | Team Udayavani |

ಬೆಳಗಾವಿ: ರಾಜ್ಯದಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಅಸ್ತ್ರವಾಗಿರಿಸಿಕೊಂಡು ವಿಧಾನ ಮಂಡಲದ ಉಭಯ ಸದನಗಳಲ್ಲಿ ಸರ್ಕಾರದ ವಿರುದ್ಧ ಹೋರಾಟ ನಡೆಸಲು ಕಾಂಗ್ರೆಸ್ ಶಾಸಕಾಂಗ ಪಕ್ಷ ತೀರ್ಮಾನಿಸಿದೆ.

Advertisement

ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ನಲವತ್ತು ಪರ್ಸೆಂಟ್ ಭ್ರಷ್ಟಾಚಾರ, ಬೆಳಗಾವಿ ಗಡಿ ವಿವಾದ, ವೋಟರ್ ಐಡಿ ಹಗರಣ, ಅಂತಾರಾಜ್ಯ ಗಡಿ ವಿವಾದ ಮತ್ತಿತರ ವಿಚಾರಗಳನ್ನು ಪ್ರಮುಖವಾಗಿ ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ.

ಕಬ್ಬು, ಅಡಿಕೆ, ತೊಗರಿ ಮತ್ತಿತರ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳು, ಜಾನುವಾರುಗಳಿಗೆ ಅಂಟಿರುವ ಕಾಯಿಲೆ ಬಗ್ಗೆ ಸದನದಲ್ಲಿ ಪ್ರಸ್ತಾಪಿಸಲಾಗುವುದು.‌ ಸದಸ್ಯರೆಲ್ಲರೂ ಸದನದಲ್ಲಿ ಕಡ್ಡಾಯವಾಗಿ ಹಾಜರಿದ್ದು ಕಲಾಪದಲ್ಲಿ ಭಾಗವಹಿಸಬೇಕೆಂದು ಸಿದ್ದರಾಮಯ್ಯ ಅವರು ಸಭೆಯಲ್ಲಿ ಹೇಳಿದರು.

ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಅನುದಾನ ಬಿಡುಗಡೆಯಾಗದ ಬಗ್ಗೆ, ಸರ್ಕಾರ ಬಡವರ ಮನೆಗಳ ನಿರ್ಮಾಣಕ್ಕೆ ಮುಂದಾಗದಿರುವ ಕುರಿತು ಸದಸ್ಯರು ಸಭೆಯ ಗಮನ ಸೆಳೆದರು. ಈ ಬಗ್ಗೆಯೂ ಸದನದಲ್ಲಿ ಚರ್ಚೆ ಕೈಗೆತ್ತಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.

Advertisement

ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೈಗೊಳ್ಳಲಿರುವ ಯಾತ್ರೆ ಕುರಿತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ವಿವರ ನೀಡಿದರು.

ಬೂತ್ ಮಟ್ಟದಲ್ಲಿ ಹಮ್ಮಿಕೊಳ್ಳಬೇಕಾದ ಕಾರ್ಯಕ್ರಮಗಳ ಬಗ್ಗೆ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಸಲಹೆ ಸೂಚನೆ ನೀಡಿದರು.

ಜನವರಿ 11ರಿಂದ 26 ರವರೆಗೆ ಎಲ್ಲ ನಾಯಕರನ್ನು ಒಳಗೊಂಡ ಬಸ್ ಯಾತ್ರೆ ನಡೆಯಲಿದೆ. ಜನವರಿ 30ರಿಂದ ಸಿಎಲ್ ಪಿ ನಾಯಕರು ಉತ್ತರ ಕರ್ನಾಟಕದಲ್ಲಿ, ಪಿಸಿಸಿ ಅಧ್ಯಕ್ಷರು ದಕ್ಷಿಣ ಕರ್ನಾಟಕದಲ್ಲಿ ಪ್ರತ್ಯೇಕವಾಗಿ ಪ್ರಚಾರ ಕೈಗೊಳ್ಳಲಿದ್ದಾರೆ‌ ಎಂದು ಸರ್ಜೇವಾಲಾ ಹೇಳಿದರು.

ಇದನ್ನೂ ಓದಿ: ಕೇರಳ: ಆರ್ಜೆಂಟೀನಾ ಗೆದ್ದ ಸಂಭ್ರಮದಲ್ಲಿ 1500 ಪ್ಲೇಟ್ ಉಚಿತ ಬಿರಿಯಾನಿ ವಿತರಣೆ

Advertisement

Udayavani is now on Telegram. Click here to join our channel and stay updated with the latest news.

Next