ನಗರದ ಎಂಜಿನಿಯರುಗಳ ಸಂಸ್ಥೆ ಎದುರಿನ ಫುಟ್‌ಪಾತ್‌ನಲ್ಲಿ ಕಾಂಗ್ರೆಸ್ ಮುಖಂಡರು ಸುಮಾರು 2 ಸಾವಿರಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಪ್ರತಿಭಟನೆ ನಡೆಸಿ, ಬಿಜೆಪಿ ವಿರುದ್ಧ ಆಕ್ರೊಶ ವ್ಯಕ್ತಪಡಿಸಿದರು. ಈ ನಡುವೆ ಬಿಜೆಪಿಯ ಪ್ರತಿಭಟನೆ ನಡೆಸುವ ಸ್ಥಳಕ್ಕೆ ತೆರಳಿ ಅವರನ್ನು ಮುತ್ತಿಗೆ ಹಾಕಲು ಕಾಂಗ್ರೆಸ್ ಪ್ರತಿಭಟನಾಕಾರರು ಯತ್ನಿಸಿದರು. ಇದಕ್ಕೆ ಪೊಲೀಸರು ಅವಕಾಶ ನೀಡಲಿಲ್ಲ.
Advertisement
ಮುತ್ತಿಗೆ ನಿರ್ಣಯಧರಣಿಯಲ್ಲಿ ಸಿದ್ದರಾಮಯ್ಯ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಿರುವ ಬಿಜೆಪಿ ನಾಯಕರನ್ನು ಮುತ್ತಿಗೆ ಹಾಕುವ ನಿರ್ಣಯವನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ| ಬಿ.ಜೆ.ವಿಜಯ್ ಕುಮಾರ್ ಮಂಡಿಸಿದರು. ಆ ಬಳಿಕ ಕಾಂಗ್ರೆಸ್ ಮುಖಂಡರ ನೇತೃತ್ವದಲ್ಲಿ ಸಾವಿರಾರು ಕಾರ್ಯಕರ್ತರು ಮುಡಾ ಮುಂಭಾಗದ ಮೂಲಕ ಬಿಜೆಪಿ ನಡೆಸುತ್ತಿದ್ದ ಪ್ರತಿಭಟನ ಸ್ಥಳದತ್ತ ತೆರಳಲು ಮುನ್ನುಗ್ಗಿದರು. ಮುಡಾ ಆವರಣದಲ್ಲಿ ಬ್ಯಾರಿಕೇಡ್ ತಡೆಗೋಡೆ ನಿರ್ಮಿಸಿದ ಪೊಲೀಸರು ಕಾರ್ಯಕರ್ತರನ್ನು ತಡೆದರು. ಪ್ರತಿಭಟನೆಯಲ್ಲಿ ಸಚಿವ ಕೆ.ವೆಂಕಟೇಶ್, ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಸೇರಿ ಹಲವರು ಪಾಲ್ಗೊಂಡಿದ್ದರು.
ಮುಡಾ ಪಕ್ಕದಲ್ಲಿರುವ ಎಂಜಿನಿಯರುಗಳ ಸಂಸ್ಥೆ ಎದುರು ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಮುಖಂಡರು ನಮ್ಮನ್ನೂ ಬಂಧಿಸಿ ಎಂದು ಪೊಲೀಸರ ವಿರುದ್ಧ ವಾಗ್ವಾದಕ್ಕಿಳಿದ ಘಟನೆ ನಡೆಯಿತು. ಬಿಜೆಪಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ ನಮ್ಮನ್ನು ವಶಕ್ಕೆ ಪಡೆಯದೇ ಅಪಮಾನ ಮಾಡುತ್ತಿದ್ದೀರಿ ಎಂದು ಪೊಲೀಸರ ವಿರುದ್ಧ ಹರಿಹಾಯ್ದರು. ಈ ವೇಳೆ ಪೊಲೀಸರು ಮತ್ತು ಕಾಂಗ್ರೆಸ್ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು.