ಬೆಂಗಳೂರು: ಮೀಸಲಾತಿ ಗೊಂದಲ, ಶಾಲಾ ಮಕ್ಕಳು, ಮಹಿಳೆಯರ ಮೇಲೆ ದೇಶದ್ರೋಹ ಪ್ರಕರಣ ದಾಖಲು ಸೇರಿ ಸರ್ಕಾರದ ವೈಫಲ್ಯಗಳ ವಿರುದ್ಧ ಫೆ.15 ಮತ್ತು 17ರಂದು ಪ್ರತಿಭಟನೆ ನಡೆಸಲು ರಾಜ್ಯ ಕಾಂಗ್ರೆಸ್ ನಿರ್ಧರಿಸಿದೆ. ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಫೆ.15ರಂದು ಎಸ್ಸಿ, ಎಸ್ಟಿ ಮೀಸಲಾತಿಗೆ ಸಂಬಂಧಿಸಿದಂತೆ ಇತ್ತೀಚೆಗೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ ಬೆಂಗಳೂರಿನ ಮೌರ್ಯ ಸರ್ಕಲ್ ಬಳಿಯ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿ ನಂತರ ಮುಖ್ಯಮಂತ್ರಿಯವರ ಮನೆಗೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ.
ಫೆ.17ರಂದು ವಿಧಾನಮಂಡಲದ ಜಂಟಿ ಅಧಿವೇಶನವನ್ನುದ್ದೇಶಿಸಿ ರಾಜ್ಯಪಾಲರ ಭಾಷಣ ಮಾಡಿದ ಬಳಿಕ ಟೌನ್ ಹಾಲ್ ಬಳಿ ಬೀದರ್‌ನ ಶಾಹಿನ್ ಶಿಕ್ಷಣ ಸಂಸ್ಥೆ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿ ಮಕ್ಕಳಿಗೆ ಕಿರುಕುಳ ನೀಡುತ್ತಿರುವುದು, ಪ್ರಕರಣದಲ್ಲಿ ಮಹಿಳಾ ಶಿಕ್ಷಕಿ ಹಾಗೂ ವಿದ್ಯಾರ್ಥಿನಿಯ ತಾಯಿಯನ್ನು ಬಂಧಿಸಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಲು ಕಾಂಗ್ರೆಸ್ ತೀರ್ಮಾನಿಸಿದೆ.
ಸಭೆ ಬಳಿಕ ಈ ಕುರಿತು ಹೇಳಿಕೆ ನೀಡಿದ ದಿನೇಶ್ ಗುಂಡೂರಾವ್, ಶಾಲಾ ಮಕ್ಕಳು, ಮಹಿಳೆಯರಿಗೆ ತೊಂದರೆ ಕೊಡಲಾಗುತ್ತಿದೆ. ಯಾವ ಪ್ರಕರಣಕ್ಕೆ ಯಾವ ಕೇಸ್ ಹಾಕಬೇಕು ಎಂದು ಯೋಚಿಸುತ್ತಿಲ್ಲ. ಕಲ್ಲಡ್ಕ ಪ್ರಭಾಕರ ಭಟ್ ಶಾಲೆ ಮೇಲೆ ದೇಶದ್ರೋಹದ ಕೇಸ್ ಹಾಕಲ್ಲ. ಆದರೆ, ಬೀದರ್‌ನ ಶಾಹಿನ್ ಶಿಕ್ಷಣ ಸಂಸ್ಥೆ ಮೇಲೆ ದೇಶದ್ರೋಹದ ಕೇಸ್ ಹಾಕ್ತಾರೆ. ವಿರೋಧ ವ್ಯಕ್ತಪಡಿಸುವವರ ಬಾಯಿ ಮುಚ್ಚಿಸುವ ಕೆಲಸ ಮಾಡಲಾಗುತ್ತಿದೆ.
ಇದಲ್ಲದೇ ಎಸ್ಸಿ, ಎಸ್ಟಿ ಮೀಸಲಾತಿ ವಿಚಾರದಲ್ಲಿ ಸಂವಿಧಾನಕ್ಕೆ ವಿರುದ್ಧವಾಗಿ ತೀರ್ಪು ಬಂದಿದೆ ಎಂದರು. ಸಭೆಯಲ್ಲಿ ಮಾಜಿ ಸಚಿವರಾದ ಯು..ಟಿ. ಖಾದರ್, ಜಮೀರ್ ಅಹ್ಮದ್ ಖಾನ್, ಶಾಸಕರಾದ ಎನ್.ಎ ಹ್ಯಾರಿಸ್, ಎಚ್.ಎಂ. ರೇವಣ್ಣ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಂಚೂಣಿ ಘಟಕಗಳ ಪದಾಧಿಕಾರಿಗಳು, ಮುಖಂಡರು ಭಾಗವಹಿಸಿದ್ದರು.
16ರಂದು ಶಾಸಕಾಂಗ ಸಭೆ: ವಿಧಾನಮಂಡಲ ಜಂಟಿ ಅಧಿವೇಶನ ಹಾಗೂ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಸದನದಲ್ಲಿ ಚರ್ಚಿಸಬಹುದಾದ ವಿಷಯಗಳ ಬಗ್ಗೆ ಪರಾಮರ್ಶಿಸಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಫೆ.15ರಂದು ಸಂಜೆ 5 ಗಂಟೆಗೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಕರೆಯಲಾಗಿದೆ. ಈ ಸಭೆಯಲ್ಲಿ ದಿನೇಶ್ ಗುಂಡೂರಾವ್, ಈಶ್ವರ್ ಖಂಡ್ರೆ ಉಪಸ್ಥಿತರಿರುತ್ತಾರೆ. ಶಾಸಕರು ತಪ್ಪದೆ ಸಭೆಗೆ ಹಾಜರಾಗಬೇಕು ಎಂದು ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಕಟಣೆ ಹೊರಡಿಸಿದ್ದಾರೆ.