ಬೆಂಗಳೂರು: ಅದಾನಿ ಮುಂದ್ರಾ ಬಂದರಲ್ಲಿ ಡ್ರಗ್ಸ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಬಿಜೆಪಿ ಸರ್ಕಾರ ಮೌನ ವಹಿಸಿರುವುದೇಕೆ ಎಂದು ಎಐಸಿಸಿ ವಕ್ತಾರೆ ಸುಪ್ರಿಯಾ ಶ್ರೀನೆಟ್ ಪ್ರೆಶ್ನೆ ಮಾಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ದೇಶದ ಭದ್ರತೆಗೆ ಅಪಾಯ ತರುವ ವಿಚಾರವಾಗಿದ್ದು, ಇದರ ಹಿಂದೆ ಯಾರಿದ್ದಾರೆ ಎಂದು ಪತ್ತೆ ಹಚ್ಚಲು ಹಾಲಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ:ಐಸ್ ಕ್ರೀಮ್ ಮಾದರಿಯ ಇಡ್ಲಿ!: ಇದ್ಯಾವುದು ಹೊಸ ಖಾದ್ಯ
ಕೆಲವು ದಿನಗಳ ಹಿಂದೆ ಗುಜರಾತಿನ ಅದಾನಿ ಮುಂದ್ರಾ ಬಂದರಿನಲ್ಲಿ 3000 ಕೆ.ಜಿ 21 ಸಾವಿರ ಕೋಟಿ ಮೌಲ್ಯದ ಡ್ರಗ್ಸ್ ಪತ್ತೆಯಾಗಿತ್ತು. ಕಳೆದ ಜೂನ್ ತಿಂಗಳಲ್ಲಿ 25,000 ಕೆ.ಜಿಯಷ್ಟು ಡ್ರಗ್ಸ್ ಬಂದಿದ್ದು, ಅದು ಈಗಾಗಲೇ ಮಾರುಕಟ್ಟೆಯಲ್ಲಿ ಸರಬರಾಜಾಗುತ್ತಿವೆ. ಇದನ್ನು ಸೆಮಿ ಕಟ್ ಟಾಲ್ಕಮ್ ಪೌಡರ್ ಎಂದು ಹೆಸರಿಸಲಾಗಿದ್ದು, ಈ ಡ್ರಗ್ಸ್ ಗಳು ತಾಲಿಬಾನ್ ಹಿಡಿತದಲ್ಲಿರುವ ಅಫ್ಘಾನಿಸ್ತಾನದಿಂದ ಆಶಿ ಟ್ರೇಡಿಂಗ್ ಕಂಪನಿ ಆಮದು ಮಾಡಿಕೊಂಡಿದೆ. ಇದು ದೇಶದ ಯುವಕರ ಭವಿಷ್ಯದ ವಿಷಯವಾಗಿದೆ. ಆದರೂ ಈ ವಿಚಾರವಾಗಿ ನರೇಂದ್ರ ಮೋದಿ ಅವರ ಸರ್ಕಾರವಾಗಲಿ, ದೇಶದ ಪ್ರಮುಖ ಮಾಧ್ಯಮಗಳಾಗಲಿ ಮಾತನಾಡುತ್ತಿಲ್ಲ ಎಂದು ದೂರಿದರು.
ದೇಶದ ಲಕ್ಷಾಂತರ ಯುವಕರು ಮಾದಕ ವ್ಯಸನಿಗಳಾಗುವ ಸ್ಥಿತಿ ನಿರ್ಮಾಣವಾಗಿದೆ. ಆ ಮೂಲಕ ಇದು ದೇಶದ ಭದ್ರತೆಗೆ ಮಾರಕವಾಗಲಿದೆ ಎಂದರು