ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಎರಡೂ ಹಂತದ ಬಹಿರಂಗ ಪ್ರಚಾರ ಅಂತ್ಯಗೊಂಡಿದ್ದು, ಕಾಂಗ್ರೆಸ್ “ಸ್ಟಾರ್’ ಪ್ರಚಾರಕರ ಪಟ್ಟಿಯಲ್ಲಿದ್ದ ಕೇಂದ್ರದ ಘಟಾನುಘಟಿ ನಾಯಕರು ರಾಜ್ಯದ ಕಡೆ ತಿರುಗಿ ನೋಡಲಿಲ್ಲ. ಕಳೆದ ಇಪ್ಪತ್ತು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಸೋನಿಯಾ ಗಾಂಧಿ ರಾಜ್ಯಕ್ಕೆ ಆಗಮಿಸಿದೆ ದೂರ ಉಳಿದರು.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಹೊರತು ಪಡಿಸಿದರೆ, ಕೇಂದ್ರದ ಕಾಂಗ್ರೆಸ್‌ನ ಯಾವ ನಾಯಕರೂ ರಾಜ್ಯದ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಆಗಮಿಸಲಿಲ್ಲ. ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿದ್ದ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ, ರಾಜಸ್ಥಾನ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ರಾಜ್ಯಕ್ಕೆ ಆಗಮಿಸದೆ ದೂರ ಉಳಿದರು.
ವಿಶೇಷವಾಗಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾರನ್ನು ಒಂದು ದಿನವಾದರೂ ರಾಜ್ಯದಲ್ಲಿ ಮೈತ್ರಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಆಗಮಿಸುವಂತೆ ರಾಜ್ಯ ನಾಯಕರು ಕೊನೆವರೆಗೆ ಪ್ರಯತ್ನ ನಡೆಸಿದರು. ಆದರೆ, ಯತ್ನ ಫಲಿಸಲಿಲ್ಲ. ಏಪ್ರಿಲ್ 20ರಂದು ಪ್ರಿಯಾಂಕಾ ಅವರು, ರಾಹುಲ್ ಗಾಂಧಿ ಸ್ಪರ್ಧಿಸಿರುವ ಕೇರಳದ ವಯನಾಡು ಕ್ಷೇತ್ರದಲ್ಲಿ ಪ್ರಚಾರ ನಡೆಸಲು ಆಗಮಿಸಿದ್ದರು. ಅದೇ ದಿನ ಕಲಬುರಗಿಗೆ ಬಂದು ಪ್ರಚಾರದಲ್ಲಿ ಪಾಲ್ಗೊಳ್ಳುವಂತೆ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮಾಡಿದ ಮನವಿಗೂ ಸ್ಪಂದನೆ ಸಿಗದಿರುವುದು ರಾಜ್ಯ ನಾಯಕರ ಬೇಸರಕ್ಕೆ ಕಾರಣವಾಗಿದೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಕೂಡ ರಾಹುಲ್ ಆಗಮಿಸಿದ ಸಂದರ್ಭದಲ್ಲಿ ಮಾತ್ರ ಕಾಣಿಸಿಕೊಂಡು, ಬೇರೆ ಸಂದರ್ಭದಲ್ಲಿ ಹೆಚ್ಚಿನ ಪ್ರಚಾರದಲ್ಲಿ ಕಾಣಿಸಿಕೊಳ್ಳಲಿಲ್ಲ. ಕೇಂದ್ರದ ಮಾಜಿ ಸಚಿವ ಗುಲಾಮ್ ನಬಿ ಆಜಾದ್ ಮಂಗಳೂರು, ಕಲಬುರಗಿ ಹಾಗೂ ಬೀದರ್‌ನಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರು. ಎಐಸಿಸಿ ವಕ್ತಾರೆ ಖುಷ್ಬೂ ಸುಂದರ್ ಅವರು ಬೆಂಗಳೂರು ಕೇಂದ್ರ ಅಭ್ಯರ್ಥಿ ರಿಜ್ವಾನ್ ಪರ ಒಂದು ದಿನ ಪ್ರಚಾರ ನಡೆಸಿ, ತಮ್ಮ ಕಾರ್ಯ ಮುಗಿಸಿ ತೆರಳಿದ್ದರು.
ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚೌಹಾನ್ ಕೂಡ ಈ ಬಾರಿ ಉತ್ತರ ಕರ್ನಾಟಕ ಭಾಗದ ಮರಾಠಿ ಭಾಷಿಕರ ಪ್ರಭಾವವಿರುವ ಪ್ರದೇಶಗಳಲ್ಲಿ ಪ್ರಚಾರಕ್ಕೆ ಆಗಮಿಸದೆ ಇರುವುದು ಗಡಿ ಭಾಗದ ಜಿಲ್ಲೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಲೆಕ್ಕಾಚಾರಕ್ಕೆ ಹೊಡೆತ ಬಿದ್ದಿದೆ.
ರಾಜ್ಯದ ಮೂವತ್ತು ಜನ ಸ್ಟಾರ್ ಪ್ರಚಾರಕರಲ್ಲಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವರಾದ ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್, ವಿಧಾನ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಮತ್ತು ಮುಖ್ಯಮಂತ್ರಿ ಚಂದ್ರು ಅವರು ರಾಜ್ಯದ ಬಹುತೇಕ ಜಿಲ್ಲೆಗಳನ್ನು ಸುತ್ತಿ ಮೈತ್ರಿ ಪಕ್ಷಗಳ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿದರು.
ಉಳಿದ ಬಹುತೇಕ ಸ್ಟಾರ್ ಪ್ರಚಾರಕರು ಕೆಲವೇ ಕ್ಷೇತ್ರಗಳಿಗೆ ಸೀಮಿತರಾಗಿ ಪ್ರಚಾರ ನಡೆಸಿದರು. ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಕಲಬುರಗಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವುದರಿಂದ ತಮ್ಮ ಕ್ಷೇತ್ರ ಹೊರತುಪಡಿಸಿ, ಬೇರೆ ಯಾವ ಅಭ್ಯರ್ಥಿ ಪರವಾಗಿಯೂ ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳಲಿಲ್ಲ.