ಬೆಂಗಳೂರು:ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಆದಾಯ ತೆರಿಗೆ, ಜಾರಿ ನಿರ್ದೇಶನಾಲಯ ಹಾಗೂ ಸಿಬಿಐ ಸಂಸ್ಥೆಗಳಿಂದ ಕಾಂಗ್ರೆಸ್ ನಾಯಕರ ಮೇಲೆ ನಿರಂತರ ದಾಳಿ ನಡೆಯುತ್ತಲೇ ಇದೆ.
ರಾಜ್ಯದ ಕಾಂಗ್ರೆಸ್ ಮುಖಂಡ ಹಾಗೂ ಸಚಿವ ರಮೇಶ್ ಜಾರಕಿಹೊಳಿ ಮನೆ ಹಾಗೂ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷ ಲಕ್ಷ್ಮೀ ಹೆಬ್ಟಾಳ್ಕರ್ ಮನೆಯ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದರು.
ಮುಖ್ಯಮಂತ್ರಿ ಸಂಸದೀಯ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಕೆ. ಗೋವಿಂದ ರಾಜ್ ಅವರ ಮನೆಯ ಮೇಲೂ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ಆ ಸಂದರ್ಭದಲ್ಲಿಯೇ ಅವರ ಮನೆಯಲ್ಲಿ ಹೈ ಕಮಾಂಡ್‌ಗೆ ಹಣ ನೀಡಿರುವ ಡೈರಿ ದೊರೆತಿದೆ ಎಂಬ ಸುದ್ದಿ ಬಹಿರಂಗಗೊಂಡು ದೊಡ್ಡ ಚರ್ಚೆಗೆ ಗ್ರಾಸವಾಯಿತು.
ಕಾಂಗ್ರೆಸ್‌ನ ಹೊಸಕೋಟೆ ಶಾಸಕ ಎಂ.ಟಿ.ಬಿ. ನಾಗರಾಜ್ ಅವರ ಮನೆಯ ಮೇಲೂ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದರು. ಅದೇ ರೀತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರೆಂದು ಗುರುತಿಸಿಕೊಂಡಿದ್ದ ಇಬ್ಬರು ಅಧಿಕಾರಿಗಳಾದ ಚಿಕ್ಕರಾಯಪ್ಪ ಹಾಗೂ ಜಯಚಂದ್ರ ಮನೆಗಳ ಮೇಲೆ ದಾಳಿ ನಡೆಸಿ ಅವರಿಂದ ಕೋಟ್ಯಂತರ ರೂಪಾಯಿ ಸಿಕ್ಕಿದೆ ಎಂದು ಹೇಳಲಾಗಿತ್ತು. ಇದಲ್ಲದೇ, ನೋಟು ಬ್ಯಾನ್ ಮಾಡಿದ ನಂತರ ಕಾಂಗ್ರೆಸ್‌ನ ಪ್ರಭಾವಿ ಸಚಿವರುಗಳ ಮನೆಗಳ ಮೇಲೆ ದಾಳಿಯಾಗಲಿದೆ ಎಂದು ಯಡಿಯೂರಪ್ಪ ಬಹಿರಂಗವಾಗಿಯೇ ಹೇಳಿಕೆ ನೀಡಿದ್ದರು.
ಮುಂದಿನ ವರ್ಷ ರಾಜ್ಯದಲ್ಲಿ ವಿಧಾನಸಭೆಗೆ ಚುನಾವಣೆ ನಡೆಯುವುದರಿಂದ ಕಾಂಗ್ರೆಸ್ ಶಕ್ತಿ ಕುಂದಿಸಲು ಇನ್ನೂ ಕೂಡ ರಾಜ್ಯ ಕಾಂಗ್ರೆಸ್ ನಾಯಕರನ್ನು ಟಾರ್ಗೆಟ್ ಮಾಡಲಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.