ಬೆಂಗಳೂರು: ಮಹದಾಯಿ ನೀರು ಹಂಚಿಕೆ ಕುರಿತಂತೆ ಗೋವಾ ಮುಖ್ಯಮಂತ್ರಿಗಳು ಬರೆದ ಪತ್ರದ ವಿಚಾರದಲ್ಲಿ ಕಾಂಗ್ರೆಸ್
ನಡೆದುಕೊಳ್ಳುತ್ತಿರುವ ರೀತಿಯಿಂದ ಪಕ್ಷಕ್ಕೆ ಯಾವುದೇ ಹಾನಿಯಾಗದಂತೆ ನೋಡಿಕೊಳ್ಳುವ ಬಗ್ಗೆ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮಹತ್ವದ ಚರ್ಚೆ ನಡೆದಿದೆ.
ಕುಡಿಯುವ ನೀರಿನ ಉದ್ದೇಶಕ್ಕಾಗಿ ಕರ್ನಾಟಕಕ್ಕೆ 7.56 ಟಿಎಂಸಿ ನೀರು ಬಿಡುಗಡೆ ಕುರಿತ ರಾಜ್ಯದ ಮಧ್ಯಂತರ ಅರ್ಜಿಯನ್ನು ಮಹದಾಯಿ ನ್ಯಾಯಾಧಿಕರಣ ತಿರಸ್ಕರಿಸಿದ ಬಳಿಕವೂ ಗೋವಾ ಮುಖ್ಯಮಂತ್ರಿಗಳನ್ನು ಪಕ್ಷ ಮನವೊಲಿಸಿ ಮಾತುಕತೆಗೆ ದಾರಿ ಮಾಡಿಕೊಟ್ಟಿದೆ. ಆದರೆ, ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ಕಾಂಗ್ರೆಸ್ ಈ ಬಗ್ಗೆ ಗೊಂದಲ ಮೂಡಿಸುತ್ತಿದ್ದು, ಇದರ ವಿರುದಟಛಿ ರಾಜಕೀಯವಾಗಿಯೇ ತಿರುಗೇಟು ನೀಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಸಭೆಯ ಬಳಿಕ ಸುದ್ದಿಗಾರರಿಗೆ ಈ ಕುರಿತು ಮಾಹಿತಿ ನೀಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಶಾಸಕ ಅರವಿಂದ ಲಿಂಬಾವಳಿ, ಮಹದಾಯಿ ನದಿ ವಿವಾದದಲ್ಲಿ ಕಾಂಗ್ರೆಸ್ ಪಕ್ಷವು ದ್ವಿಮುಖ ನೀತಿ ಅನುಸರಿಸುತ್ತಿರುವುದನ್ನು ಬಿಜೆಪಿ ಕೋರ್ ಕಮಿಟಿ ಸಭೆ ಖಂಡಿಸಿದೆ. ಈ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ರಾಜಕಾರಣದ ಹೊರತಾಗಿಯೂ ಬಿಜೆಪಿ ರಾಜ್ಯದ ಜನತೆಯ ಹಿತಾಸಕ್ತಿ ಕಾಪಾಡಲು ಬದಟಛಿವಾಗಿದೆ ಎಂಬ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು ಎಂದು ಹೇಳಿದರು.
ಹಿಂದೆ ನಡೆದ ಸರ್ವಪಕ್ಷಗಳ ಸಭೆಯಲ್ಲಿ ನಾವು ಬಿಜೆಪಿಯನ್ನೂ, ರಾಜ್ಯದ ಕಾಂಗ್ರೆಸ್ ನಾಯಕರು ಗೋವಾ ಕಾಂಗ್ರೆಸ್ ಪಕ್ಷವನ್ನೂ ಮನವೊಲಿಸಬೇಕು ಎನ್ನುವ ನಿರ್ಧಾರವಾಗಿತ್ತು. ಅದರಂತೆ ನಾವು ಗೋವಾ ಮುಖ್ಯಮಂತ್ರಿಯನ್ನು ಒಪ್ಪಿಸಿದ್ದೇವೆ. ಆದರೆ ಕಾಂಗ್ರೆಸ್ ಈಗ ಡಬಲ್‌ಗೇಮ್ ಆಡುತ್ತಿದೆ. ಗೋವಾ ಮುಖ್ಯಮಂತ್ರಿ ರಾಜ್ಯ ಬಿಜೆಪಿ ಅಧ್ಯಕ್ಷರಿಗೆ ಪತ್ರ ಬರೆದಿದ್ದರೂ ಅದನ್ನೇ ರಾಜ್ಯದ ಹಿತಕ್ಕೆ ಬಳಸಿಕೊಳ್ಳುವ ಪ್ರಕ್ರಿಯೆ ಮುಂದುವರಿಸುವ ಜವಾಬ್ದಾರಿ ರಾಜ್ಯ ಸರ್ಕಾರದ್ದು. ಕರ್ನಾಟಕದ ಹಿತವನ್ನು ಗಮನದಲ್ಲಿಟ್ಟು ಗೋವಾದೊಂದಿಗೆ ಮಾತುಕತೆಗೆ ಕರ್ನಾಟಕ ಸರ್ಕಾರ ಮುಂದಾಗಬೇಕಿತ್ತು. ಇದರಲ್ಲಿ ಗೋವಾಕ್ಕಿಂತ ರಾಜ್ಯದ ಹಿತ ಅಡಗಿದೆ. ಈ ನಿಟ್ಟಿನಲ್ಲಿ ಬಿಜೆಪಿ ಒಂದು ಹೆಜ್ಜೆ ಮುಂದಿಟ್ಟಿದೆ.
ಆದ್ದರಿಂದ ಜವಾಬ್ದಾರಿ ರಾಜ್ಯ ಸರ್ಕಾರದ ಮೇಲೆ ಹೆಚ್ಚಿದೆ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ ಎಂದು ತಿಳಿಸಿದರು.
ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರರಾವ್, ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವಡೇಕರ್, ಚುನಾವಣಾ ಸಹ ಉಸ್ತುವಾರಿ ಪಿಯೂಷ್ ಗೋಯೆಲ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಅನಂತಕುಮಾರ್, ಡಿ.ವಿ.ಸದಾನಂದಗೌಡ, ಸಂಸದ ನಳಿನ್‌ಕುಮಾರ್ ಕಟೀಲ್, ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್, ಶಾಸಕರಾದ ಗೋವಿಂದ ಕಾರಜೋಳ, ಅರವಿಂದ ಲಿಂಬಾವಳಿ, ಮಾಜಿ ಶಾಸಕ ಸಿ.ಎಂ.ಉದಾಸಿ ಮತ್ತಿತರರು ಸಭೆಯಲ್ಲಿ ಪಾಲ್ಗೊಂಡಿದ್ದರು.