ಲಕ್ನೋ:ಮುಂಬರುವ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಅಚ್ಚರಿಯ ಫಲಿತಾಂಶ ಹೊರಬೀಳಲಿದೆ ಎಂದು ಉತ್ತರಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ಕುಮಾರ್ ಲಲ್ಲು ಭವಿಷ್ಯ ನುಡಿದಿದ್ದು, ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ಪೂರ್ಣ ಬಹುಮತ ಪಡೆಯಲಿದೆ. ಅಷ್ಟೇ ಅಲ್ಲ ಬಿಜೆಪಿ 30ಕ್ಕಿಂತ ಹೆಚ್ಚು ಸ್ಥಾನ ಪಡೆಯಲಾರದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ನಾಮಿನೇಷನ್ ದಿನ ಆಡಿ ಕಾರಿನಲ್ಲಿ ಇಳಿದ KGF ಬಾಬು, ಚುನಾವಣಾ ಫಲಿತಾಂಶ ದಿನ ರಿಕ್ಷಾ ಹತ್ತಿದರು
ಇತ್ತೀಚೆಗೆ ಪಿಟಿಐಗೆ ನೀಡಿರುವ ಸಂದರ್ಶನದಲ್ಲಿ, ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸಮಾಜವಾದಿ ಪಕ್ಷ, ಬಹುಜನ್ ಸಮಾಜ ಪಕ್ಷದ ಜತೆ ಮೈತ್ರಿ ಮಾಡಿಕೊಳ್ಳುತ್ತಿಲ್ಲ. ಆದರೆ ಇನ್ನಿತರ ಸಣ್ಣ ಪಕ್ಷಗಳು ಮೈತ್ರಿ ಮಾಡಿಕೊಳ್ಳಲು ನಮ್ಮ ಪಕ್ಷದ ಬಾಗಿಲು ತೆರೆದಿದೆ ಎಂದು ಹೇಳಿದ್ದರು.
ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಯಾವ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂಬ ಪ್ರಶ್ನೆಗೆ, ರಾಜಕೀಯದಲ್ಲಿ ಎಲ್ಲವನ್ನೂ ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ. ಸ್ವಲ್ಪ ಸಮಯ ಕಾದು ನೋಡಿ, ನಿಮಗೆ ಹಲವಾರು ವಿಷಯಗಳು ತಿಳಿಯಲಿದೆ ಎಂದು ಲಲ್ಲು ತಿಳಿಸಿದ್ದಾರೆ.
ಉತ್ತರಪ್ರದೇಶದಲ್ಲಿ ಒಂದು ವೇಳೆ ಕಾಂಗ್ರೆಸ್, ಸಮಾಜವಾದಿ ಪಕ್ಷ ಮತ್ತು ಬಿಎಸ್ಪಿ ಒಟ್ಟಾಗಿ ಸೇರಿದರೂ ಕೂಡಾ ಭಾರತೀಯ ಜನತಾ ಪಕ್ಷವನ್ನು ಸೋಲಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿರುವುದಾಗಿ ವರದಿಯಾಗಿದೆ. ಆದರೆ ಮುಂಬರುವ ಚುನಾವಣೆಯಲ್ಲಿ ಬಿಜೆಪಿ 30 ಸ್ಥಾನಕ್ಕಿಂತ ಹೆಚ್ಚು ಗೆಲ್ಲಲು ಸಾಧ್ಯವಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ.