ತುಮಕೂರು: ಗ್ಯಾರಂಟಿ ಯೋಜನೆ ಗಳ ಜಾರಿಯಿಂದ ರಾಜ್ಯ ಸರಕಾರದ ಬೊಕ್ಕಸ ದಿವಾಳಿಯಾಗಿಲ್ಲ. ಸರಕಾರ ಆರ್ಥಿಕವಾಗಿ ಸದೃಢವಾಗಿದೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ. ಜತೆಗೆ ಅಭಿವೃದ್ಧಿ ಯೋಜನೆಗಳನ್ನೂ ಜಾರಿಗೆ ತರುತ್ತೇವೆ ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, 2024-25ನೇ ಸಾಲಿನಲ್ಲಿ 3.80 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡಿಸುವ ಮೂಲಕ ಟೀಕಾಕಾರರಿಗೆ ಉತ್ತರ ನೀಡುವುದಾಗಿ ತಿಳಿಸಿದ್ದಾರೆ.
ನಗರದ ಸರಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಸೋಮವಾರ ಜರಗಿದ 657 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಿಲಾನ್ಯಾಸ ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣೆ ಸಮಾರಂಭದಲ್ಲಿ ಅವರು ಮಾತನಾಡಿದರು.
ಎರಡನೇ ಬಜೆಟ್ ಮಂಡಿಸಲು ಸಿದ್ಧತೆ ಕೈಗೊಳ್ಳಲಾಗಿದೆ. ಕಳೆದ ವರ್ಷ 3 ಲಕ್ಷದ 27 ಸಾವಿರ ಕೋಟಿ ರೂ. ಗಾತ್ರದ ಆಯವ್ಯಯ ಮಂಡಿಸಲಾಗಿತ್ತು. ಈ ಬಾರಿ ಈ ಗಾತ್ರ ಸುಮಾರು 53 ಸಾವಿರ ಕೋಟಿ ರೂ.ಯಷ್ಟು ಹೆಚ್ಚಾಗಿದೆ ಎನ್ನುವ ಮೂಲಕ ಗ್ಯಾರಂಟಿ ಯೋಜನೆಗಳಿಗೆ ಸರಕಾರದಲ್ಲಿ ಹಣ ಇಲ್ಲ ಎಂದು ಟೀಕೆ ಮಾಡಿದ್ದ ವಿಪಕ್ಷಗಳಿಗೆ ಮುಖ್ಯಮಂತ್ರಿ ತಿರುಗೇಟು ನೀಡಿದರು.
ಗ್ಯಾರಂಟಿ ಯೋಜನೆಗಳಿಗೆ ಹಣ ಒದಗಿಸಿದರೆ ಖಜಾನೆ ಬರಿದಾಗುತ್ತದೆ. ಸರಕಾರ ದಿವಾಳಿಯಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದರು. ಆದರೆ, ಇಂದು 657 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಮೂಲಕ ಅವರ ಟೀಕೆಗೆ ಉತ್ತರ ಕೊಟ್ಟಿದ್ದೇವೆ ಎಂದರು.
ಸುಳ್ಳು ಉತ್ಪಾದಕರಿಗೆ ಉತ್ತರಿಸಿ
ನಮ್ಮ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಾದ ಮಹಿಳೆಯರು, ಯುವಕ-ಯುವತಿಯರು ಬಿಜೆಪಿ, ಆರೆಸ್ಸೆಸ್ ಸುಳ್ಳು ಉತ್ಪಾದಕರಿಗೆ ಉತ್ತರಿಸಬೇಕು. ರಾಜ್ಯದಲ್ಲಿ ಭೀಕರ ಬರಗಾಲ ಬಂದಿದ್ದರೂ ಕೇಂದ್ರ ಸರಕಾರ ಇದುವರೆಗೂ ರಾಜ್ಯದ ಪಾಲಿನ ಒಂದೇ ಒಂದು ರೂಪಾಯಿ ಬರ ಪರಿಹಾರವನ್ನೂ ನೀಡಿಲ್ಲ. ಆದರೆ ರಾಜ್ಯ ಸರಕಾರ 29,28,910 ರೈತರ ಖಾತೆಗೆ ಬರ ಪರಿಹಾರದ ಮೊದಲ ಕಂತನ್ನು ಜಮೆ ಮಾಡಿದೆ ಎಂದು ತಿಳಿಸಿದರು.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಡಾ| ಜಿ. ಪರಮೇಶ್ವರ್, ಕೆ.ಎನ್.ರಾಜಣ್ಣ, ಕೃಷ್ಣ ಭೈರೇಗೌಡ, ಲಕ್ಷ್ಮೀ ಹೆಬ್ಬಾಳ್ಕರ್, ಸತೀಶ್ ಜಾರಕಿಹೊಳಿ, ರಾಮಲಿಂಗಾ ರೆಡ್ಡಿ, ಬೈರತಿ ಸುರೇಶ್ ಸಹಿತ ಹಲವರು ಉಪಸ್ಥಿತರಿದ್ದರು.