ಉಡುಪಿ: ನಂಜನಗೂಡು ಮತ್ತು ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹಣದ ಹೊಳೆ ಹರಿಸಿ ಗೆದ್ದಿದೆ ಎಂದು ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಶ್ರೀಕೃಷ್ಣ ಮಠಕ್ಕೆ ಭೇಟಿ ಕೊಟ್ಟ ಅವರು ಸುದ್ದಿಗಾರರ ಜತೆ ಮಾತನಾಡಿ, ಉಪಚುನಾವಣೆಯಲ್ಲಿ ಹೇಗಾದರೂ ಗೆಲ್ಲಲೇ ಬೇಕು ಎಂದು ಮುಖ್ಯಮಂತ್ರಿಗಳು ನಿರ್ಧಾರ ಮಾಡಿದ್ದರು. ಅದರಂತೆ ಹಣದ ಹೊಳೆಯನ್ನು ಹರಿಸಿ ಗೆದ್ದರು ಎಂದರು.
2018ರ ಚುನಾವಣೆಗೆ ಈ ಫಲಿತಾಂಶ ದಿಕ್ಸೂಚಿಯಲ್ಲ. ಸ್ವತಃ ಮುಖ್ಯಮಂತ್ರಿಗಳು ಚುನಾವಣೆಗೆ ಮುನ್ನ ಇದು ದಿಕ್ಸೂಚಿಯಲ್ಲ ಎಂದು ಹೇಳುತ್ತಿದ್ದರು. ಆದರೆ ಈಗ ಯೂ ಟರ್ನ್ ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದರು. ಯಡಿಯೂರಪ್ಪ ನೇತೃತ್ವದಲ್ಲಿ ಮುಂದೆಯೂ ಚುನಾವಣೆ ಎದುರಿಸುತ್ತೇವೆ. ಈಗ ಗೆದ್ದದ್ದು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿ ಇದ್ದ ಕಾರಣದಿಂದ. ಮುಂದಿನ ಮಹಾಚುನಾವಣೆಯಲ್ಲಿ ಬಿಜೆಪಿ ಬಹುಮತ ಸಾಧಿಸುತ್ತದೆ ಎಂದು ತಿಳಿಸಿದರು.
ಶ್ರೀನಿವಾಸಪ್ರಸಾದ್ ಹಿರಿಯ ನಾಯಕರು. ಅವರಿಗೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಕೊಡುತ್ತೇವೆ. ಗೌರವದಿಂದ ನೋಡಿಕೊಳ್ಳುತ್ತೇವೆ ಎಂದು ಹೇಳಿದರು. ಪೊಲೀಸ್ ಅಮಾನತು ಪ್ರಕರಣ ಕುರಿತು ಮಾತನಾಡಿದ ಅವರು, ಪೊಲೀಸರ ಪತ್ನಿಗೇ ಹೀಗಾದರೆ ಕಾನೂನು ವ್ಯವಸ್ಥೆ ಕುಸಿದಿರುವುದಕ್ಕೆ ಉದಾಹರಣೆ. ಅಮಾನತು ಕ್ರಮವನ್ನು ಹಿಂದಕ್ಕೆ ಪಡೆದುಕೊಳ್ಳಬೇಕು ಎಂದು ಶೆಟ್ಟರ್ ಆಗ್ರಹಿಸಿದರು.
ಮಟ್ಟಾರು ರತ್ನಾಕರ ಹೆಗ್ಡೆ, ಕೆ. ರಘುಪತಿ ಭಟ್, ಬೈಕಾಡಿ ಸುಪ್ರಸಾದ ಶೆಟ್ಟಿ, ಗಿರೀಶ್ ಅಂಚನ್ ಮೊದಲಾದ ಬಿಜೆಪಿ ನಾಯಕರು ಉಪಸ್ಥಿತರಿದ್ದರು.