ವಿಜಯಪುರ: ರೈತರ ಶ್ರೇಯಾಭಿಲಾಶಿಯಾಗಿ ಸಿದ್ದರಾಮಯ್ಯ ಸರ್ಕಾರ ಕಾರ್ಯನಿರ್ವಹಿಸಿದ್ದು ನೂರಾರು ಕೋಟಿ ರೂ. ಅನುದಾನವನ್ನು ರೈತರ ಅಭಿವೃದ್ಧಿಗೆ ನೀಡಿರುವುದೇ ಸಾಕ್ಷಿ ಎಂದು ಕೃಷಿ ಸಚಿವ ಕೃಷ್ಣಬೈರೇಗೌಡ ತಿಳಿಸಿದರು. ಪಟ್ಟಣ ಸಮೀಪದ ಹಾರೋಹಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ವೆಂಕಟಸ್ವಾಮಿ ಪರವಾಗಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ರಾಜ್ಯದಲ್ಲಿ ರೈತರು ಕೊರೆದ ಕೊಳವೆ ಬಾವಿಗಳಿಂದ ನೀರೆತ್ತಲು ಯಾರ ಅಪ್ಪಣೆಯೂ ಇಲ್ಲದಂತೆ ಉಚಿತ ವಿದ್ಯುತ್ ಸಂಪರ್ಕ ಕಲ್ಪಿಸಿಕೊಳ್ಳಲು ಅವಕಾಶ ನೀಡಲಾಗಿದೆ ಎಂದು ಹೇಳಿದರು. ಸಹಕಾರ ಸಂಘಗಳ ಮೂಲಕ ಬಡ್ಡಿರಹಿತ ಸಾಲ ನೀಡುವ ಯೋಜನೆಯನ್ನು ರೈತರಿಗೆ ಅನುಷ್ಠಾನಗೊಳಿಸಿದ್ದೇ ಕಾಂಗ್ರೆಸ್ ಸರ್ಕಾರ.
ಬಯಲುಸೀಮೆ ಪ್ರದೇಶಗಳಲ್ಲಿ ಅಂತರ್ಜಲ ಮಟ್ಟದ ಕುಸಿತದಿಂದ ರೈತರು ಪರದಾಡುವುದನ್ನು ಗಮನಿಸಿ ನೀರಾವರಿ, ಎತ್ತಿನಹೊಳೆ ಯೋಜನೆಯನ್ನು ಸರ್ಕಾರ ಜಾರಿ ಮಾಡಲು ಅನುದಾನ ಒದಗಿಸಿದೆ ಎಂದು ವಿವರಿಸಿದರು.
ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ, ಶಾಲಾ ಮಕ್ಕಳಿಗೆ ಉಚಿತವಾಗಿ ಕ್ಷೀರಭಾಗ್ಯ, ವಿದ್ಯಾಸಿರಿಯಂತಹ ಅನೇಕ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ವೆಂಕಟಸ್ವಾಮಿ, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಬಿ.ಚೇತನ್‌ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ರಾಮಚಂದ್ರಪ್ಪ, ಜಿಪಂ ಉಪಾಧ್ಯಕ್ಷೆ ಅನಂತಕುಮಾರಿ, ಜಿಲ್ಲಾ ಕಾಂಗ್ರೆಸ್ ಮಾಜಿ ಪ್ರಧಾನ ಕಾರ್ಯದರ್ಶಿ ಯಲುವಹಳ್ಳಿ ನಟರಾಜು, ವಿವಿಧ ಘಟಕಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ವೆಂಕಟಗಿರಿಕೋಟೆ, ಬಿಜ್ಜವಾರ, ಹಾರೋಹಳ್ಳಿ, ಕೋರಮಂಗಲ ಪಂಚಾಯಿತಿಗಳ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಪ್ರಚಾರ ಕೈಗೊಳ್ಳಲಾಯಿತು.