ಅಮೇಥಿ: ಉತ್ತರ ಪ್ರದೇಶದ ಅಮೇಥಿಯಲ್ಲಿರುವ ಕಾಂಗ್ರೆಸ್ ಪಕ್ಷದ ಕಚೇರಿ ಮೇಲೆ ಭಾನುವಾರ ತಡರಾತ್ರಿ ಅಪರಿಚಿತ ದುಷ್ಕರ್ಮಿಗಳ ತಂಡವೊಂದು ದಾಳಿ ನಡೆಸಿದ್ದು ಕಾಂಗ್ರೆಸ್ ಕಚೇರಿ ಹೊರಗಡೆ ನಿಲ್ಲಿಸಿದ್ದ ಹಲವಾರು ವಾಹನಗಳನ್ನು ಧ್ವಂಸಗೊಳಿಸಿ ಗದ್ದಲ ಸೃಷ್ಟಿಸಿದ ಘಟನೆ ನಡೆದಿದೆ.
ವಿಚಾರ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರದೀಪ್ ಸಿಂಗಲ್ ಪಕ್ಷದ ಕಚೇರಿಗೆ ದೌಡಾಯಿಸಿದ್ದಾರೆ ಬಳಿಕ ಪಕ್ಷದ ಕಾರ್ಯಕರ್ತರ ಜೊತೆಗೂಡಿ ಘಟನೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆ ಕಾವು ಹೆಚ್ಚುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿ ಮಯಾಂಕ್ ದ್ವಿವೇದಿ ಅವರು ಭಾರೀ ಪೊಲೀಸ್ ಪಡೆಯೊಂದಿಗೆ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾನಿರತರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು ಈ ವೇಳೆ ಪ್ರತಿಭಟನಾಕಾರರು ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗತೊಡಗಿದ್ದಾರೆ. ಕೊನೆಗೂ ಪ್ರತಿಭಟನಾಕಾರರನ್ನು ಸಮಾಧಾನ ಪಡಿಸಿ ಆದಷ್ಟು ಬೇಗ ದುಷ್ಕರ್ಮಿಗಳನ್ನು ಬಂಧಿಸುವ ಭರವಸೆಯನ್ನು ಹಿರಿಯ ಪೊಲೀಸ್ ಅಧಿಕಾರಿ ನೀಡಿದ್ದಾರೆ.
ಬಿಜೆಪಿ ವಿರುದ್ಧ ಕಾಂಗ್ರೆಸ್ ಕಿಡಿ
ದುಷ್ಕರ್ಮಿಗಳು ದಾಳಿ ನಡೆಸಿದ ವಿಡಿಯೋ ಅನ್ನು ಸಾಮಾಜಿಕ ಜಾಲತಾಣ x ನಲ್ಲಿ ಹಂಚಿಕೊಂಡ ಕಾಂಗ್ರೆಸ್ ‘ಅಮೇಠಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ವಿರುದ್ಧ ಸೋಲಿನ ಭೀತಿಯಿಂದ ಬಿಜೆಪಿ ಹಿಂಸಾಚಾರ ನಡೆಸುತ್ತಿದೆ ಎಂದು ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ಅವರನ್ನು ಉಲ್ಲೇಖಿಸಿ ಕಾಂಗ್ರೆಸ್ ಆರೋಪ ಮಾಡಿದೆ.