ಬೆಂಗಳೂರು:ರಾಜ್ಯ ವಿಧಾನಪರಿಷತ್‌ನ ನಾಲ್ಕು ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕಾರ್ಯಾಧ್ಯಕ್ಷರ ಜತೆ ಪರಿಷತ್ ಚುನಾವಣೆ ಸಂಬಂಧ ಸಭೆ ನಡೆಸಿದ ನಂತರ ಮಾತನಾಡಿದ ಅವರು, ನಾಲ್ಕೂ ಕ್ಷೇತ್ರಗಳಲ್ಲಿ ಈ ಬಾರಿ ಕಾಂಗ್ರೆಸ್‌ಗೆ ಗೆಲ್ಲುವ ಅವಕಾಶವಿದೆ ಎಂದು ತಿಳಿಸಿದರು.
ವಿಧಾನ ಪರಿಷತ್ ಪದವೀಧರರು, ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ನಾಲ್ಕು ಕ್ಷೇತ್ರಗಳ ಪೈಕಿ ಈಗಾಗಲೇ ಎರಡು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗಿದೆ. ಮಧು ಮಾದೇಗೌಡರು ಹಾಗೂ ಧಾರವಾಡದ ಗುರಿಕಾರ್ ಅವರ ಹೆಸರನ್ನು ಎಐಸಿಸಿ ಅಂತಿಮಗೊಳಿಸಿದೆ.
ಬೆಳಗಾವಿ, ಬಾಗಲಕೋಟೆ, ಬಾದಾಮಿ, ಬಿಜಾಪುರದ ಶಿಕ್ಷಕರು ಹಾಗೂ ಪದವೀಧರರ ಕ್ಷೇತ್ರದ ತಲಾ ಒಬ್ಬರು ಅಭ್ಯರ್ಥಿ ಆಯ್ಕೆ ಸಂಬಂಧ ನಾಯಕರ ಜತೆ ಚರ್ಚಿಸಿ ಅಭಿಪ್ರಾಯ ಸಂಗ್ರಹಿಸಲಾಗಿದೆ ಎಂದು ಹೇಳಿದರು.
ಪದವೀಧರ ಕ್ಷೇತ್ರಕ್ಕೆ ಆರು ಮಂದಿ ಅರ್ಜಿ ಹಾಕಿದ್ದು, ಶಿಕ್ಷಕರ ಕ್ಷೇತ್ರಕ್ಕೆ 15ಕ್ಕೂ ಹೆಚ್ಚು ಮಂದಿ ಅರ್ಜಿ ಸಲ್ಲಿಸಿದ್ದಾರೆ. ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಿರುವ ಹಿನ್ನೆಲೆಯಲ್ಲಿ ಎಲ್ಲರ ಅಭಿಪ್ರಾಯ ಪಡೆಯುವುದು ಮುಖ್ಯ. ಇಂದಿನ ಸಭೆಯಲ್ಲಿ ಎಲ್ಲರೂ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.
ಕೆಲವು ನಾಯಕರು ಗೋವಾ ಚುನಾವಣಾ ಪ್ರಚಾರಕ್ಕೆ ತೆರಳಿದ್ದು, ಮುಂದಿನ ಕೆಲ ದಿನಗಳಲ್ಲಿ ಅವರು ಬಂದ ನಂತರ ಚರ್ಚಿಸಿ, ನಮ್ಮ ಶಿಫಾರಸ್ಸನ್ನು ದೆಹಲಿಗೆ ಕಳುಹಿಸಿಕೊಡುತ್ತೇವೆ ಎಂದು ತಿಳಿಸಿದರು.