ಹೊಸದಿಲ್ಲಿ: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನದ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಅಭಿಷೇಕ್ ಮನು ಸಿಂಘ್ವಿ ಅವರ ಅನಿರೀಕ್ಷಿತ ಸೋಲಿಗೆ ಕಾರಣವಾಗಿ ಹಿಮಾಚಲ ಪ್ರದೇಶದ ಕಾಂಗ್ರೆಸ್ ಸ್ಥಿರ ಸರಕಾರದಲ್ಲಿ ರಾಜಕೀಯ ಕೋಲಾಹಲ ಉಂಟಾಗಿದೆ. ಪಂಜಾಬ್ ಮಾಜಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರಿಗೆ ಹಿಮಾಚಲ ಪ್ರದೇಶದ ರಾಜಕೀಯ ಚಟುವಟಿಕೆಗಳನ್ನು ನಿಭಾಯಿಸುವ ಜವಾಬ್ದಾರಿಯನ್ನು ಬಿಜೆಪಿ ವಹಿಸಿದೆ ಎಂದು ವರದಿಯಾಗಿದೆ.
ಉತ್ತರ ಭಾರತದಲ್ಲಿ ಕಾಂಗ್ರೆಸ್‌ನ ಏಕೈಕ ಸರಕಾರವನ್ನು ಉರುಳಿಸಲು ಪ್ರಯತ್ನಿಸುತ್ತಿರುವ ಪ್ರತಿಪಕ್ಷ ಬಿಜೆಪಿಗೆ ಮಾಜಿ ಕಾಂಗ್ರೆಸ್ ನಾಯಕ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ನೆರವಾಗುತ್ತಿದ್ದಾರೆ ಎಂದು ಮಾಧ್ಯಮಗಳು ವಿಶ್ಲೇಷಣೆ ಮಾಡಿವೆ.
ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಮತ್ತು ಪಟಿಯಾಲದ ರಾಜಮನೆತನದ ಕ್ಯಾಪ್ಟನ್ ಅಮರಿಂದರ್ ಸಿಂಗ್, ಹಿಮಾಚಲ ಪ್ರದೇಶ ಕಾಂಗ್ರೆಸ್‌ನಲ್ಲಿ ಸಂಘರ್ಷದ ಕೇಂದ್ರ ಬಿಂದುವಾಗಿದ್ದ ಮತ್ತೊಂದು ರಾಜಮನೆತನದ ಕುಡಿ ವಿಕ್ರಮಾದಿತ್ಯ ಸಿಂಗ್ ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದಾರೆ ಎನ್ನಲಾಗಿದೆ.
ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅವರ ಪುತ್ರ ಮತ್ತು ಪ್ರಸ್ತುತ ಕಾಂಗ್ರೆಸ್ ಸರ್ಕಾರದ ಸಚಿವ ವಿಕ್ರಮಾದಿತ್ಯ ಸಿಂಗ್ ಅವರು ತಮ್ಮದೇ ಸರಕಾರದಲ್ಲಿ ಅವಮಾನವಾಗಿದೆ ಎಂದು ರಾಜೀನಾಮೆ ನೀಡುವುದಾಗಿ ಬೆದರಿಕೆ ಹಾಕಿದ್ದಾರೆ.
ವೀರಭದ್ರ ಸಿಂಗ್ ಅವರ ಐದು ಪುತ್ರಿಯರಲ್ಲಿ ಒಬ್ಬರು ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಮೊಮ್ಮಗನನ್ನು ಮದುವೆಯಾಗಿದ್ದಾರೆ. ಅಪರಜಿತಾ ಸಿಂಗ್ ಅವರು ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಪುತ್ರಿ ಜೈ ಇಂದರ್ ಕೌರ್ ಅವರ ಮಗ ಅಂಗದ್ ಸಿಂಗ್ ಅವರನ್ನು ವಿವಾಹವಾಗಿದ್ದಾರೆ.
ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಕಾಂಗ್ರೆಸ್ ಪಕ್ಷದಲ್ಲಿದ್ದ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು 2021 ರಲ್ಲಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಪಂಜಾಬ್ ಲೋಕ ಕಾಂಗ್ರೆಸ್ (PLC) ಪಕ್ಷವನ್ನು ಪ್ರಾರಂಭಿಸಿ ನಂತರ ಅದನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಿದ್ದರು.