Advertisement

ಬಿಜೆಪಿಯಿಂದ 4 ಕ್ಷೇತ್ರಗಳಲ್ಲಿ ಹೊಸಬರಿಗೆ ಮಣೆ

02:36 PM Apr 13, 2023 | Team Udayavani |

ಮೈಸೂರು: ರಾಜ್ಯ ವಿಧಾನ ಸಭೆ ಚುನಾವಣೆಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಎರಡು ದಿನ ಬಾಕಿ ಇರುವಂತೆ ಬಿಜೆಪಿ ಜಿಲ್ಲೆಯ 11 ಕ್ಷೇತ್ರಗಳ ಪೈಕಿ 9 ಕ್ಷೇತ್ರಗಳಿಗೆ ಟಿಕೆಟ್‌ ಫೈನಲ್‌ ಮಾಡಿದ್ದು, ನಾಲ್ವರು ಹೊಸಬರಿಗೆ ಮಣೆ ಹಾಕುವ ಮೂಲಕ ಭಾರತೀಯ ಜನತಾ ಪಾರ್ಟಿ ಚುನಾವಣಾ ಅಖಾಡಕ್ಕಿಳಿದಿದೆ.

Advertisement

ಜಿಲ್ಲೆಯ ಹುಣಸೂರು, ತಿ. ನರಸೀಪುರ, ಚಾಮುಂಡೇಶ್ವರಿ ಹಾಗೂ ಕೆ.ಆರ್‌. ನಗರ ವಿಧಾನ ಸಭಾ ಕ್ಷೇತ್ರಗಳಿಗೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರನ್ನು ಹೊರತುಪಡಿಸಿ ಹೊಸ ಮುಖಗಳಿಗೆ ಅವಕಾಶ ನೀಡಿದೆ. ಇತ್ತ ಪಿರಿಯಾಪಟ್ಟಣದಲ್ಲಿ ಬಿಜೆಪಿ ಹಿರಿಯ ಮುಖಂಡ ಹಾಗೂ ಮಾಜಿ ಸಂಸದ ಮತ್ತು ಮಾಜಿ ಸಚಿವ ಎಚ್‌.ಸಿ. ವಿಜಯಶಂಕರ್‌ ಅವರಿಗೆ ಅವಕಾಶ ನೀಡಿದ್ದರೆ, ಚಾಮರಾಜ ಮತ್ತು ನಂಜನಗೂಡು ವಿಧಾನಸಭಾ ಕ್ಷೇತ್ರಗಳಲ್ಲಿ ಹಾಲಿ ಶಾಸಕರಿಗೆ ಟಿಕೆಟ್‌ ನೀಡಿದೆ. ನರಸಿಂಹರಾಜ ಕ್ಷೇತ್ರದಲ್ಲಿ ಕಳೆದ ಬಾರಿ ಅಭ್ಯರ್ಥಿಯಾಗಿದ್ದ ಸಂದೇಶ್‌ಸ್ವಾಮಿ ಅವರಿಗೆ ಮತ್ತೆ ಟಿಕೆಟ್‌ ನೀಡಿದ್ದರೆ, ವರುಣಾ ಕ್ಷೇತ್ರದಲ್ಲಿ ಸಚಿವ ವಿ. ಸೋಮಣ್ಣ ಅವರಿಗೆ ಅವಕಾಶ ನೀಡುವ ಮೂಲಕ ಭಾರತೀಯ ಜನತಾ ಪಾರ್ಟಿ ಜಿಲ್ಲೆ ಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲಲು ರಣತಂತ್ರ ರೂಪಿಸಿದೆ.

ಜೆಡಿಎಸ್‌ ತಾಲೂಕು ಅಧ್ಯಕ್ಷರಾಗಿದ್ದ ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿ ದೇವರಹಳ್ಳಿ ಗ್ರಾಮದವರಾದ ಸೋಮಶೇಖರ್‌, ಇತ್ತೀಚೆಗಷ್ಟೇ ಜೆಡಿಎಸ್‌ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದರು. ಉದ್ಯಮಿ ಹಾಗೂ ಗ್ರೇಡ್‌-1 ಗುತ್ತಿಗೆದಾರರಾಗಿದ್ದಾರೆ. ಸೋಮಶೇಖರ್‌ ಹುಣಸೂರು ವಿಧಾನಸಭಾ ಕ್ಷೇತ್ರ ದಲ್ಲಿ 2019ರಲ್ಲಿ ನಡೆದ ಉಪಚುನಾವಣೆಯಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು. ಸಧ್ಯಕ್ಕೆ ಕ್ಷೇತ್ರದಲ್ಲಿ ಬಿಜೆಪಿಯಿಂದ ಪ್ರಬಲ ಅಭ್ಯರ್ಥಿಗಳಿಲ್ಲದಿರುವುದರಿಂದ ಪಕ್ಷ ದೇವರಹಳ್ಳಿ ಸೋಮಶೇಖರ್‌ ಅವರಿಗೆ ಮಣೆಹಾಕಿದೆ.

ವೈದ್ಯ ಹುದ್ದೆಗೆ ರಾಜೀನಾಮೆ: ಜಿಲ್ಲೆಯಲ್ಲಿರುವ ಎಸ್ಸಿ ಮೀಸಲು ಕ್ಷೇತ್ರಗಳ ಪೈಕಿ ಒಂದಾದ ತಿ.ನರಸೀಪುರ ವಿಧಾನ ಸಭಾ ಕ್ಷೇತ್ರಕ್ಕೆ ಬಿಜೆಪಿ ಅಚ್ಚರಿಯ ಅಭ್ಯರ್ಥಿ ಘೋಷಣೆ ಮಾಡಿದ್ದು, 23 ವರ್ಷಗಳ ಕಾಲ ಸರ್ಕಾರಿ ವೈದ್ಯರಾಗಿ ಸೇವೆ ಸಲ್ಲಿಸುತ್ತಾ ಬಂದಿರುವ ತಾಲೂಕಿನ ನಿಲಸೋಗೆ ಗ್ರಾಮದ ಡಾ.ರೇವಣ್ಣ ಅವರಿಗೆ ಟಿಕೆಟ್‌ ನೀಡಿದೆ. ತಿ.ನರಸೀಪುರ ತಾಲೂಕು ಆಸ್ಪತ್ರೆಯಲ್ಲಿ ಸರ್ಜನ್‌ ಆಗಿ ಕಳೆದ ಕೆಲ ವರ್ಷಗಳಿಂದ ಕಾರ್ಯನಿ ರ್ವಹಿಸುತ್ತಿದ್ದ ಡಾ. ರೇವಣ್ಣ ಅವರು ಎಂಬಿವಿಎಸ್‌, ಎಂಎಸ್‌ ಪದವಿ ಪಡೆದಿದ್ದು, ತಾಲೂಕಿನಲ್ಲಿ ಚಿರಪರಿಚಿತರಾಗಿದ್ದಾರೆ. ಈ ಹಿಂದೆ ರೇವಣ್ಣ ಅವರ ಚಿಕ್ಕಪ್ಪ ಪುಟ್ಟಬಸವಯ್ಯ ಅವರು ಎರಡು ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಜಿಲ್ಲಾ ಪಂಚಾಯಿ ಸದಸ್ಯರಾಗಿದ್ದರೆ, 2013ರ ಚುನಾವಣೆಯಲ್ಲಿ ಕೆಜೆಪಿಯಿಂದ ಸ್ಪರ್ಧಿಸಿ 5 ಸಾವಿರ ಮತಗಳ ಅಂತರದಿಂದ ಸೋತಿದ್ದರು. ಸಧ್ಯಕ್ಕೆ ಚಿಕ್ಕಪ್ಪ ಪುಟ್ಟಬಸವಯ್ಯ ಅವರ ರಾಜಕೀಯ ಗರಡಿಯಲ್ಲಿ ಪಳಗಿರುವ ರೇವಣ್ಣ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಪ್ರಬಲ ಪೈಪೋಟಿ ನೀಡಲು ಸಜ್ಜಾಗಿದ್ದಾರೆ.

ಚಾಮುಂಡೇಶ್ವರಿಗೆ ಮಾಜಿ ಶಾಸಕರ ಪುತ್ರ: 2018ರ ಚುನಾವಣೆಯಲ್ಲಿ ಜಿಲ್ಲೆಯ ಹೈವೋಲ್ಟೆàಜ್‌ ಕ್ಷೇತ್ರವಾಗಿದ್ದ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಬಿಜೆಪಿ ಈ ಬಾರಿಯ ಚುನಾವಣೆಯಲ್ಲಿ ಹೊಸ ಅಭ್ಯರ್ಥಿಗೆ ಮಣೆ ಹಾಕಿದೆ. ಎರಡು ತಿಂಗಳ ಹಿಂದೆಯಷ್ಟೇ ಬಿಜೆಪಿ ಸೇರ್ಪಡೆಯಾಗಿದ್ದ ಕಾಂಗ್ರೆಸ್‌ ಮಾಜಿ ಶಾಸಕ ವಾಸು ಅವರ ಪುತ್ರ ಕವೀಶ್‌ ಗೌಡ ಅವರಿಗೆ ಟಿಕೆಟ್‌ ಘೋಷಿಸಿದ್ದು, ಜೆಡಿಎಸ್‌ ಅಭ್ಯರ್ಥಿ ಜಿ.ಟಿ. ದೇವೇಗೌಡ ಮತ್ತು ಕಾಂಗ್ರೆಸ್‌ ಅಭ್ಯರ್ಥಿ ಮಾವಿನಹಳ್ಳಿ ಸಿದ್ದೇಗೌಡ ಅವರೊಂದಿಗೆ ಸೆಣಸಲಿದ್ದಾರೆ. ಲಂಡನ್‌ನಲ್ಲಿ ಫೈನಾನ್ಸ್‌ ಎಂಬಿಎ ಪದವಿ ಪಡೆದಿ ರುವ ಕವೀಶ್‌ ಗೌಡ ಅವರು ಮೈಸೂರಿನ ಶಿಕ್ಷಣ ಸಂಸ್ಥೆಯ ಮಾಲೀಕರಾಗಿದ್ದು, ಇವರ ತಂದೆ ಕಾಂಗ್ರೆಸ್‌ ಶಾಸಕರಾಗಿದ್ದ ವೇಳೆ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದರು. ಬಳಿಕ ಬದಲಾದ ಸನ್ನಿವೇಶದಿಂದ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದರು.

Advertisement

ಪಕ್ಷೇತರ ಅಭ್ಯರ್ಥಿಗೆ ಮಣೆ ; ಕೆ.ಆರ್‌. ನಗರ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಹೊಸಹಳ್ಳಿ ವೆಂಕಟೇಶ್‌ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್‌ ನೀಡಿದೆ. 2018ರ ಚುನಾವಣೆಯಲ್ಲಿ ಬಿಜೆಪಿಯಲ್ಲೇ ಇದ್ದ ವೆಂಕಟೇಶ್‌ ಅವರು, ಪ್ರಬಲ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಕೊನೆ ಕ್ಷಣದಲ್ಲಿ ಟಿಕೆಟ್‌ ಕೈತಪ್ಪಿದ್ದಕ್ಕೆ ಬೇಸರಗೊಂಡು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಮತ್ತೆ ಬಿಜೆಪಿ ಸೇರ್ಪಡೆಯಾಗಿದ್ದ ವೆಂಕಟೇಶ್‌ ಅವರಿಗೆ ಪಕ್ಷ ಮಣೆ ಹಾಕಿದ್ದು, ಕಾಂಗ್ರೆಸ್‌-ಜೆಡಿಎಸ್‌ ನಡುವಿನ ಹಣಹಣಿಯಿರುವ ಕೆ.ಆರ್‌.ನಗರ ಕ್ಷೇತ್ರದಲ್ಲಿ ಕಮಲ ಅರಳಿಸುವರೇ ಎಂಬುದನ್ನು ಕಾದು ನೋಡಬೇಕಿದೆ.

-ಸತೀಶ್‌ ದೇಪುರ

Advertisement

Udayavani is now on Telegram. Click here to join our channel and stay updated with the latest news.

Next