ಮಡಿಕೇರಿ :ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ, ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ 128 ನೇ ಜನ್ಮ ದಿನಾಚರಣೆಯನುರವಿವಾರ ಆಚರಿಸಲಾಯಿತು.
ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ.ಸಿಇಒ ಕೆ.ಲಕ್ಷಿ¾ಪ್ರಿಯಾ, ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಭಾರತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಮಹಂತೇಶಪ್ಪ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಕೆಂಚಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಮಚ್ಚಾಡೊ ಇತರರು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಗೌರವ ನಮನ ಸಲ್ಲಿಸಿದರು.
ಸ್ತ್ರೀಯರಿಗೆ ಮತದಾನ ಹಕ್ಕು ಮತ್ತು ಸಮಾನ ಅವಕಾಶ, ಕಾರ್ಮಿಕರಿಗಾಗಿ ಹಲವು ಕಲ್ಯಾಣ ಕಾರ್ಯಕ್ರಮಗಳು, ಭಾರತೀಯ ರಿಸರ್ವ್ ಬ್ಯಾಂಕ್ ಸ್ಥಾಪನೆ, 6 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಉಚಿತ ಶಿಕ್ಷಣ, ಚುನಾವಣಾ ಆಯೋಗ ಸ್ಥಾಪನೆ, ಹೀಗೆ ಹತ್ತು ಹಲವು ಕಾಯ್ದೆ ಹಾಗೂ ಕಾರ್ಯಕ್ರಮಗಳನ್ನು ಸಂವಿಧಾನದಲ್ಲಿ ಅಳವಡಿಸುವ ಮೂಲಕ ಸಮಾನತೆಯ ಸಮಾಜ ಹಾಗೂ ಆಧುನಿಕ ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಶ್ರಮಿಸಿದ್ದಾರೆ ಎಂದು ಗಣ್ಯರು ಸ್ಮರಿಸಿದರು.
ಹಿಂದೂ ಕೋಡ್ ಬಿಲ್ ಜಾರಿಗೊಳಿಸುವ ಮೂಲಕ ಮಹಿಳೆ ಯರಿಗೆ ಸಮಾನ ಹಕ್ಕು ಮತ್ತು ಅವಕಾಶ ನೀಡಿದ್ದಾರೆ. ಕೃಷಿ, ವಿದ್ಯುತ್ ಹಾಗೂ ನೀರಾವರಿಗೆ ಹೆಚ್ಚಿನ ಒತ್ತು, ಹೀಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ಸಮಾಜ ಸುಧಾರಣೆಗೆ ದುಡಿದಿದ್ದಾರೆ ಎಂದು ಅವರು ತಿಳಿಸಿದರು.
“ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆಗಳು, ಸಂದೇಶಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳು ವಂತಾ ಗಬೇಕು. ಸರ್ವರಿಗೂ ಸಮಪಾಲು ಮತ್ತು ಸರ್ವರಿಗೂ ಸಮಬಾಳು ಎಂಬುದನ್ನು ಪ್ರಬಲವಾಗಿ ಪ್ರತಿಪಾದಿಸಿದ್ದ ಡಾ| ಬಿ.ಆರ್.ಅಂಬೇಡ್ಕರ್ ಅವರು, ಶಿಕ್ಷಣ ಪಡೆದಾಗ ಮಾತ್ರ ಸಮಾನ ಅವಕಾಶ ಮತ್ತು ಆರ್ಥಿಕ ಪ್ರಗತಿ ಸಾಧ್ಯ ಎಂಬುದನ್ನು ಪ್ರತಿಪಾದಿಸಿದ್ದರು ಎಂದು ಗಣ್ಯರು ಹೇಳಿದರು.
ಸಂವಿಧಾನದಲ್ಲಿ ಮೂಲಭೂತ ಹಕ್ಕುಗಳು, ಕರ್ತವ್ಯಗಳು ಮತ್ತು ರಾಜ್ಯ ನಿರ್ದೇಶಕ ತತ್ವಗಳು ಜತೆಗೆ ಸಾಮಾಜಿಕ ಭದ್ರತೆ ಮತ್ತಿತರ ಅಂಶಗಳನ್ನು ಸೇರ್ಪಡೆ ಮಾಡಿ ಪ್ರಜಾಪ್ರಭುತ್ವ ಯಶಸ್ಸಿಗೆ ಶ್ರಮಿಸಿದ ಕೀರ್ತಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ ಎಂದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಅರುಂಧತಿ, ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಸಿ.ಜಗನ್ನಾಥ್, ಸಮಾಜ ಕಲ್ಯಾಣ ಇಲಾಖೆಯ ತಾಲ್ಲೂಕು ಅಧಿಕಾರಿ ಚಿಕ್ಕಬಸವಯ್ಯ, ನಾನಾ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.