ನವದೆಹಲಿ: ದೇಶದ ಎಲ್ಲ ಸರ್ಕಾರಿ ಅನುದಾನಿತ ಮತ್ತು ವಸತಿ ಶಾಲೆಗಳಲ್ಲಿ ವಿದ್ಯಾರ್ಥಿನಿಯರ ಸಂಖ್ಯೆಗೆ ಅನುಗುಣವಾಗಿ ಶೌಚಾಲಯಗಳನ್ನು ನಿರ್ಮಿಸಲು ರಾಷ್ಟ್ರೀಯ ಮಾದರಿಯನ್ನು ರೂಪಿಸುವಂತೆ ಕೇಂದ್ರ ಸರ್ಕಾರಕ್ಕೆ ಸೋಮವಾರ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.
ಸಿಜೆಐ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರಿದ್ದ ನ್ಯಾಯಪೀಠವು, ದೇಶಾದ್ಯಂತ ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ನ್ಯಾಪ್ಕಿನ್‌ಗಳನ್ನು ವಿತರಿಸಲು ನೀತಿಯನ್ನು ರೂಪಿಸುವಂತೆ ಹಾಗೂ ವಿತರಣೆ ಪ್ರಕ್ರಿಯೆಯಲ್ಲಿ ಕೇಂದ್ರ ಸರ್ಕಾರವು ಏಕರೂಪತೆಯನ್ನು ತರಬೇಕು ಎಂದು ಸೂಚಿಸಿತು.
ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸರ್ಕಾರ, ಶಾಲಾ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಸ್ಯಾನಿಟರಿ ನ್ಯಾಪ್ಕಿನ್‌ಗಳನ್ನು ವಿತರಿಸಲು ಕರಡು ನೀತಿಯನ್ನು ರೂಪಿಸಲಾಗಿದೆ ಮತ್ತು ಇದಕ್ಕಾಗಿ ಅಭಿಪ್ರಾಯಗಳನ್ನು ಆಹ್ವಾನಿಸಲಾಗಿದೆ ಎಂದಿತು.
ಶಾಲಾ ವಿದ್ಯಾರ್ಥಿನಿಯರ ಋತುಚಕ್ರದ ನೈರ್ಮಲ್ಯಕ್ಕೆ ಸಂಬಂಧಿಸಿದಂತೆ ಏಕರೂಪದ ರಾಷ್ಟ್ರೀಯ ನೀತಿಯನ್ನು ರೂಪಿಸಲು ಕೇಂದ್ರ ಸರ್ಕಾರಕ್ಕೆ ತಮ್ಮ ಪ್ರತಿಕ್ರಿಯೆಗಳನ್ನು ಸಲ್ಲಿಸದ ರಾಜ್ಯಗಳ ವಿರುದ್ಧ ಬಲವಂತದ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಸುಪ್ರೀಂ ಕೋರ್ಟ್ ಇತ್ತೀಚಿಗೆ ನೀಡಿತ್ತು.