Advertisement

ಕರ್ನಾಟಕದಲ್ಲಿ ಬಿಹಾರದ ಪರಿಸ್ಥಿತಿ ನಿರ್ಮಾಣ: ವಿಜಯೇಂದ್ರ

11:11 PM May 26, 2024 | Team Udayavani |

ಮೈಸೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದ್ದು, ಈಗ ರಾಜ್ಯ ದಲ್ಲಿ ಬಿಹಾರದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ರಾಜ್ಯದ ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿ ರಾಜ್ಯಾ ಧ್ಯಕ್ಷ ಬಿ.ವೈ. ವಿಜಯೇಂದ್ರ ವಾಗ್ಧಾಳಿ ನಡೆಸಿದರು.

Advertisement

ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯ ಸರಕಾರಕ್ಕೆ ವರ್ಷ ಪೂರ್ಣಗೊಂಡಿದ್ದು, ಈ ಸರಕಾರದ ಬಗ್ಗೆ ಜನರು ಆಕ್ರೋಶಗೊಂಡಿದ್ದಾರೆ. ಅಸಮರ್ಥ ಸರಕಾರವಾದ್ದರಿಂದ ಕಾನೂನು ವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಸರಕಾರದ ಆಡಳಿತ ವೈಖರಿ ಗಮನಿಸಿದರೆ ಲಾಲು ಪ್ರಸಾದ್‌ ಯಾದವ್‌ ಅವರ ಬಿಹಾರ ನೆನಪಾಗುತ್ತಿದೆ ಎಂದರು.

ದಾವಣಗೆರೆಯ ಚನ್ನಗಿರಿಯಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಠಾಣೆಯನ್ನು ಧ್ವಂಸ ಮಾಡಿದ್ದರೆ. ರಾಜ್ಯದಲ್ಲಿ ಕಳೆದ ಎರಡು ತಿಂಗಳಿಂದ ನಡೆಯುತ್ತಿರುವ ಹತ್ಯೆಗಳು, ಲವ್‌ ಜೆಹಾದ್‌ ಪ್ರಕರಣಗಳನ್ನು ನೋಡಿದರೆ ರಾಜ್ಯದಲ್ಲಿ ಮುಖ್ಯಮಂತ್ರಿ, ಗೃಹ ಸಚಿವರು ಇದ್ದಾರೆಯೇ ಎಂಬ ಪ್ರಶ್ನೆ ಮೂಡುತ್ತದೆ ಎಂದರು. ಪ್ರಜ್ವಲ್‌ ಪ್ರಕರಣ ಕುರಿತು ಪ್ರತಿಕ್ರಿಯೆಗೆ ನಿರಾಕರಿಸಿದ ಬಿ.ವೈ. ವಿಜಯೇಂದ್ರ, ಪರಿಷತ್‌ ಚುನಾವಣೆಯಲ್ಲಿ ಎಲ್ಲ 6 ಕ್ಷೇತ್ರಗಳನ್ನು ಗೆಲ್ಲಲು ನಾವು ತಯಾರಿ ಮಾಡುತ್ತಿದ್ದೇವೆ ಎಂದರು. ಪ್ರತಾಪ್‌ ಸಿಂಹ ಅವರಿಗೆ ಟಿಕೆಟ್‌ ಕೈ ತಪ್ಪಲು ವಿಜಯೇಂದ್ರ ಕಾರಣ ಎಂಬ ವಿಚಾರದ ಕುರಿತು ಪ್ರತಿಕ್ರಿಯಿಸಿ, ಇದಕ್ಕೆ ಸೂಕ್ತ ಜಾಗದಲ್ಲಿ ಸೂಕ್ತ ಉತ್ತರ ಕೊಡುತ್ತೇನೆ ಎಂದರು.

ಇಂತಹ ಶಿಕ್ಷಣ ಸಚಿವರನ್ನು ಪಡೆದ ನಾವೇ ಧನ್ಯರು
ಮೈಸೂರು: ರಾಜ್ಯದ ಶಿಕ್ಷಣ ಸಚಿವರು ನಾವು ಕರ್ನಾಟಕದಲ್ಲಿ ಇದ್ದೇವೆ ಎನ್ನುವುದನ್ನೇ ಮರೆತುಬಿಟ್ಟಿದ್ದಾರೆ. ಈ ಕುರಿತು ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದರೆ, ಶಿಕ್ಷಣ ಸಚಿವರಿಗೆ ಕನ್ನಡ ಬರಬೇಕು ಎನ್ನುವ ಕಾನೂನು ಎಲ್ಲಿದೆ ಎಂದು ಸಮರ್ಥಿಸಿಕೊಳ್ಳುತ್ತಾರೆ. ಇಂತಹ ಶಿಕ್ಷಣ ಸಚಿವರನ್ನು ಪಡೆದ ನಾವೇ ಧನ್ಯರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವ್ಯಂಗ್ಯವಾಡಿದರು.

ಬಿಜೆಪಿ-ಜೆಡಿಎಸ್‌ ಪಕ್ಷಗಳ ಪ್ರಮುಖರ ಸಭೆಯಲ್ಲಿ ಮಾತನಾಡಿ, ಶಿಕ್ಷಣ ಕ್ಷೇತ್ರ ಹದಗೆಟ್ಟು ಹೋಗಿದೆ. ಪ್ರಧಾನಿ ಮೋದಿ ಅವರು ಎನ್‌ಇಪಿ ಜಾರಿ ಮಾಡಿದ್ದರು. ಆದರೆ ಕಾಂಗ್ರೆಸ್‌ ಸರಕಾರ ಆಡಳಿತಕ್ಕೆ ಬಂದ ಮೊದಲ ತಿಂಗಳಲ್ಲಿಯೇ ಮೊಸರಲ್ಲಿ ಕಲ್ಲು ಹುಡುಕಿದ ಹಾಗೆ ಎನ್‌ಇಪಿ ರದ್ದುಗೊಳಿಸಿ ಎಸ್‌ಇಪಿ ಜಾರಿಗೆ ತರಲು ಹೊರಟಿದ್ದಾರೆ. ಪರೀಕ್ಷಾ ಕೇಂದ್ರದಲ್ಲಿ ಸಿಸಿಟಿವಿ ಇಡುವ ಪರಿಸ್ಥಿತಿ ಬಂದಿದೆ ಎಂದು ಆರೋಪಿಸಿದರು.

Advertisement

ಗ್ಯಾರಂಟಿ ಯೋಜನೆಯಲ್ಲೇ ಮುಳುಗಿದ ಸಿಎಂ: ಬಿವೈವಿ
ಚಿಕ್ಕಮಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರ ಹಿಡಿದು ಒಂದು ವರ್ಷ ಕಳೆದಿದೆ. ಸಾಧನೆ ಶೂನ್ಯವಾಗಿದೆ. ಅಭಿವೃದ್ಧಿ ಕೆಲಸಗಳು ಸಂಪೂರ್ಣ ಸ್ಥಗಿತಗೊಂಡಿದ್ದು, ರಾಜ್ಯದ ಜನತೆ ಭ್ರಮನಿರಸನಗೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಟೀಕಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಕೆಲಸಕ್ಕಾಗಿ ಸಿಎಂ ಸಿದ್ದರಾಮಯ್ಯ ಯಾವುದೇ ಗುದ್ದಲಿ ಪೂಜೆ ನೆರವೇರಿಸಿಲ್ಲ. ಗ್ಯಾರಂಟಿ ಯೋಜನೆಯಲ್ಲಿಯೇ ಮುಳುಗಿದ್ದಾರೆ. ಅಲ್ಲದೆ ರಾಜ್ಯ ಸರಕಾರ ಅಲ್ಪಸಂಖ್ಯಾತರ ತುಷ್ಟೀಕರಣಕ್ಕೆ ಮುಂದಾಗಿದೆ. ರಾಜ್ಯದ ಜನತೆ ಇದರಿಂದ ತೊಂದರೆ ಅನುಭವಿಸುವಂತಾಗಿದೆ ಎಂದರು.

ಹುಬ್ಬಳಿ ಮತ್ತು ಧಾರವಾಡದಲ್ಲಿ ಕೊಲೆ ಪ್ರಕರಣಗಳು ನಡೆದಿದ್ದರೆ, ಚನ್ನಗಿರಿಯಲ್ಲಿ ಪೊಲೀಸ್‌ ವಶದಲ್ಲಿದ್ದ ವ್ಯಕ್ತಿ ಮೃತಪಟ್ಟಿದ್ದು, ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಹಲವು ಮಂದಿ ಪೊಲೀಸರಿಗೆ ಗಾಯಗಳಾಗಿವೆ. ಈ ಘಟನೆಗಳು ರಾಜ್ಯ ಸರಕಾರದ ಮುಸ್ಲಿಂ ತುಷ್ಟೀಕರಣಕ್ಕೆ ಸಾಕ್ಷಿಯಾಗಿದೆ. ವಿಧಾನಪರಿಷತ್‌ ಚುನಾವಣೆಯಲ್ಲಿ 4 ಕ್ಷೇತ್ರದಲ್ಲಿ ಬಿಜೆಪಿ ಸ್ಪರ್ಧಿಸಿದ್ದರೆ, ಜೆಡಿಎಸ್‌ 2 ಕ್ಷೇತ್ರದಲ್ಲಿ ಕಣದಲ್ಲಿದೆ. ಈ ಎಲ್ಲ ಅಭ್ಯರ್ಥಿಗಳು ದೊಡ್ಡ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ವಿಜಯೇಂದ್ರ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next