Advertisement

New Industrial Area Construction: ಭೂ ಸ್ವಾಧೀನ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಸೂಚನೆ

01:16 AM Sep 27, 2024 | Team Udayavani |

ಮಣಿಪಾಲ: ಉಡುಪಿ ಜಿಲ್ಲೆಯಲ್ಲಿ ಹೊಸ ಕೈಗಾರಿಕೆ ಪ್ರದೇಶದ ನಿರ್ಮಾಣಕ್ಕೆ ಅಗತ್ಯವಿರುವ ಭೂ ಸ್ವಾಧೀನ ಪ್ರಕ್ರಿಯೆಯನ್ನು ಆದ್ಯತೆ ಮೇಲೆ ಕೈಗೊಂಡು ಕೈಗಾರಿಕೆ ಪ್ರದೇಶವನ್ನು ವಿಸ್ತರಿಸಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರಗಿದ ಕೈಗಾರಿಕಾ ಸ್ಪಂದನ ಸಮಿತಿ, ಕ್ಲಸ್ಟರ್‌ ಸಮಿತಿ, ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ, ಜಿಲ್ಲಾ ಮಟ್ಟದ ರಫ್ತು ಉತ್ತೇಜನ ಸಮಿತಿ ಹಾಗೂ ಪ್ರಧಾನ ಮಂತ್ರಿ ಉದ್ಯೋಗ ಸೃಜನಾ ಯೋಜನೆಯ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೈಗಾರಿಕಾ ಪ್ರದೇಶ ನಿರ್ಮಾಣಕ್ಕೆ ಕೆರೆಬೆಟ್ಟು ಗ್ರಾಮದಲ್ಲಿ 31.28 ಎಕ್ರೆ, ಶಿವಪುರದಲ್ಲಿ 45.75 ಎಕ್ರೆ ಸಹಿತ 77.03 ಎಕ್ರೆ ಖಾಸಗಿ ಜಮೀನನ್ನು ಭೂ ಮಾಲಕರಿಗೆ ಪರಿಹಾರ ಧನ ಪಾವತಿಸಿ, ನಿಯಮಾನುಸಾರ ಸ್ವಾಧೀನಪಡಿಸಿಕೊಳ್ಳಲಾಗಿದೆ. ಆದರೆ, 36.56 ಎಕ್ರೆ ಸರಕಾರಿ ಜಮೀನು ಮಂಜೂರಾತಿ ಪ್ರಕ್ರಿಯೆ ಬಾಕಿ ಇದೆ. ವಿಶೇಷ ಭೂ ಸ್ವಾಧೀನ ಅಧಿಕಾರಿಗಳು, ಕೆಐಎಡಿಬಿ ಅಧಿಕಾರಿಗಳು ಹಾಗೂ ಕಂದಾಯ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ಸ್ವಾಧೀನ ಪ್ರಕ್ರಿಯೆಯನ್ನು ತತ್‌ಕ್ಷಣ ಪೂರ್ಣಗೊಳಿಸಬೇಕು ಎಂದರು.

ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ 44.84 ಎಕ್ರೆ ಖಾಸಗಿ ಜಮೀನು ಹಾಗೂ 5.58 ಎಕ್ರೆ ಸರಕಾರಿ ಜಮೀನು ಸೇರಿ 50.42 ಎಕ್ರೆ ಜಮೀನಿನ ಸ್ವಾಧೀನ ಪ್ರಕ್ರಿಯೆಯ ಪ್ರಗತಿ ಕುಂಠಿತವಾಗಿದೆ. ಈ ಬಗ್ಗೆ ವಿಶೇಷ ಗಮನಹರಿಸಬೇಕು ಎಂದರು.

ಬೆಳಪು ಕೈಗಾರಿಕೆ ಪ್ರದೇಶದಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೆ ತೊಂದರೆ ಉಂಟಾಗುತ್ತಿದೆ. ಈ ಬಗ್ಗೆ ಕೆಐಎಡಿಬಿ ಅಧಿಕಾರಿಗಳು ಕೂಡಲೇ ಸ್ಪಂದಿಸಿ, ಮೂಲಸೌಕರ್ಯ ಕಲ್ಪಿಸಬೇಕು. ಮಣಿಪಾಲದ ಶಿವಳ್ಳಿ ಕೈಗಾರಿಕೆ ಪ್ರದೇಶದಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅಗತ್ಯವಿರುವ ರಸ್ತೆ ಸಂಪರ್ಕ ಕಾಮಗಾರಿಯನ್ನು ಮಳೆಗಾಲ ಮುಗಿದ ಕೂಡಲೇ ಆದ್ಯತೆ ಮೇಲೆ ಕೈಗೊಳ್ಳಬೇಕು. ಈ ಭಾಗದಲ್ಲಿರುವ ರೆಡಿಮಿಕ್ಸ್ ಕೇಂದ್ರಗಳಲ್ಲಿ ವ್ಯವಸ್ಥಿತವಾದ ನಿರ್ವಹಣೆ ಇಲ್ಲದ ಕಾರಣ ವಾಯುಮಾಲಿನ್ಯ ಉಂಟಾಗುತ್ತಿದೆ. ಈ ಬಗ್ಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿಗಳು ಪರಿಶೀಲಿಸಬೇಕು ಎಂದು ನಿರ್ದೇಶಿಸಿದರು.

Advertisement

ಪ್ರಧಾನಮಂತ್ರಿ ಉದ್ಯೋಗ ಸೃಜನಾ ಯೋಜನೆ ಯಡಿ ಆರ್ಥಿಕ ನೆರವು ಕೋರಿ ಅರ್ಜಿಗಳನ್ನು ಬ್ಯಾಂಕ್‌ಗಳು ನಿಯಮಾನುಸಾರ ಶೀಘ್ರ ವಿಲೇವಾರಿ ಮಾಡಬೇಕು. ಜಿಲ್ಲೆಯಲ್ಲಿ ರಫ್ತುದಾರರನ್ನು ಉತ್ತೇಜಿಸಲು ಎಲ್ಲ ರೀತಿಯಲ್ಲೂ ಸಹಕರಿಸಬೇಕು. ಅವರಿಗೆ ಅಗತ್ಯವಿರುವ ಪರವಾನಿಗೆ, ನಿರಾಪೇಕ್ಷಣ ಪತ್ರಗಳನ್ನು ವಿಳಂಬವಿಲ್ಲದೇ ನಿಯಮಾನುಸಾರ ಶೀಘ್ರ ನೀಡಬೇಕು ಎಂದರು.

ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್‌ ವಿ. ನಾಯಕ್‌, ಪೌರಾಯುಕ್ತ ರಾಯಪ್ಪ, ಕೆಐಎಡಿಬಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ ಮೂರ್ತಿ, ಸಣ್ಣ ಕೈಗಾರಿಕೆ ಸಂಘದ ಜಿಲ್ಲಾ ಅಧ್ಯಕ್ಷ ಹರೀಶ್‌ ಕುಂದರ್‌, ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next