ಬೆಂಗಳೂರು: ಗುರುವಾರ ನಡೆದ ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ದೇವೇಗೌಡರ ನೇತೃತ್ವದಲ್ಲಿ ಬೃಹತ್ ರೈತಪರ ಹೋರಾಟಕ್ಕೆ ನಿರ್ಣಯ ಕೈಗೊಳ್ಳಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಜೆಪಿ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಉದ್ದಗಲಕ್ಕೂ ರೈತರು ಸಂಕಷ್ಟದಲ್ಲಿದ್ದಾರೆ. ಅವರಿಗೆ ಸೂಕ್ತ ಬೆಲೆ, ಸಬ್ಸಿಡಿ, ರಸಗೊಬ್ಬರ ಸಮಸ್ಯೆ, ಇತ್ಯಾದಿ ಸೌಲಭ್ಯ ಸಿಗದೆ ಕಂಗಾಲಾಗಿದ್ದಾರೆ. ಹೀಗಾಗಿ ದೇಶಾದ್ಯಂತ ರೈತರ ಪರವಾಗಿ ಬೃಹತ್ ಹೋರಾಟವನ್ನು ದೇವೇಗೌಡರ ಮಾರ್ಗದರ್ಶನ ಮತ್ತು ನೇತೃತ್ವದಲ್ಲಿ ರೂಪಿಸಲು ಕಾರ್ಯಕಾರಿಣಿಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.
ಮುಂದಿನ ಲೋಕಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಕಾರ್ಯಕಾರಿಣಿ ಸಮಾಲೋಚನೆ ನಡೆಸಿದೆ. ದೇಶದ ಬೆಳವಣಿಗೆಗಳ ಬಗ್ಗೆ ಹಾಗೂ ಪಕ್ಷದ ಸಂಘಟನೆ ಹಿತದೃಷ್ಟಿಯಿಂದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ಎರಡು ತಿಂಗಳಿಗೊಮ್ಮೆ ಕರೆಯುವಂತೆ ಪಕ್ಷದ ಕೇರಳ ರಾಜ್ಯದ ಹಿರಿಯ ನಾಯಕ ಡಾ| ನೀಲ ಲೋಹಿದಾಸ್ ನಾಡಾರ್ ಅವರು ಸಲಹೆ ಮಾಡಿದ್ದಾರೆ. ಈ ಬಗ್ಗೆ ರಾಷ್ಟ್ರೀಯ ಅಧ್ಯಕ್ಷರು ನಿರ್ಧಾರ ಕೈಕೊಳ್ಳಲಿದ್ದಾರೆ ಎಂದು ಕುಮಾರಸ್ವಾಮಿ ತಿಳಿಸಿದರು.
ಕಾರ್ಯಕಾರಿಣಿ ಸಭೆಯಲ್ಲಿ ಕೇರಳ, ತೆಲಂಗಾಣ, ತಮಿಳುನಾಡು, ಆಂಧ್ರಪ್ರದೇಶ, ಒರಿಸ್ಸಾ, ಉತ್ತರ ಪ್ರದೇಶ, ಬಿಹಾರ, ಗುಜರಾತ್, ಮಹಾರಾಷ್ಟ್ರ, ಹರಿಯಾಣ, ಪಂಜಾಬ್, ಉತ್ತರಾಖಂಡ ಮುಂತಾದ ರಾಜ್ಯಗಳ ಪ್ರತಿನಿಧಿಗಳು ಕಾರ್ಯಕಾರಿಣಿಯಲ್ಲಿ ಭಾಗಿಯಾಗಿದ್ದರು ಎಂದು ಅವರು ತಿಳಿಸಿದರು.
ಸಿ.ಎಂ.ಇಬ್ರಾಹಿಂ, ಕರ್ನಾಟಕ, ಕೇರಳ, ತಮಿಳುನಾಡು, ತೆಲಂಗಾಣ ಹಾಗೂ ಆಂಧ್ರ ಪ್ರದೇಶದ ಪ್ರತಿನಿಧಿಗಳು, ಮಾಜಿ ಸಚಿವರಾದ ಬಂಡೆಪ್ಪ ಕಾಶಂಪೂರ್, ವೆಂಕಟರಾವ್ ನಾಡಗೌಡ ಸಹಿತ ಹಲವು ಪ್ರಮುಖರು ಉಪಸ್ಥಿತರಿದ್ದರು.