ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ನಾಮಪತ್ರ ಸಲ್ಲಿಕೆಗೆ ಕೊನೆ ದಿನ ಹತ್ತಿರವಾಗುತ್ತಿರುವಂತೆ ಟಿಕೆಟ್ ಆಕಾಂಕ್ಷಿಗಳು ಲಾಬಿ ಮುಂದುವರೆಸಿದ್ದಾರೆ.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಿವಾಸದಲ್ಲಿ ಪರಿಷತ್ ಟಿಕೆಟ್ ಆಕಾಂಕ್ಷಿತರು ತಮ್ಮದೇ ಆದ ರೀತಿಯಲ್ಲಿ ಒತ್ತಡ ಹೇರುವ ಪ್ರಯತ್ನ ನಡೆಸಿದ್ದಾರೆ.
ಮಾಜಿ ಸಚಿವ ಎಂ.ಆರ್. ಸೀತಾರಾಂ ಅವರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಹಿಂದುಳಿದ ವರ್ಗದ ಕೋಟಾದಡಿ ತಮಗೆ ಅವಕಾಶ ಕಲ್ಪಿಸುವಂತೆ ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಪಕ್ಷಕ್ಕಾಗಿ ಹಲವು ವರ್ಷಗಳಿಂದ ದುಡಿದಿದ್ದೇನೆ. ಹಿಂದುಳಿದ ವರ್ಗಗಳ ಕೋಟಾದಲ್ಲಿ ನನಗೆ ಟಿಕೆಟ್ ಸಿಗುವ ವಿಶ್ವಾಸವಿದೆ. ಕಳೆದ ಬಾರಿ ನನಗೆ ಟಿಕೆಟ್ ಸಿಗಬೇಕಿತ್ತು. ಆಗ ಅವಕಾಶ ದೊರೆತಿರಲಿಲ್ಲ. ಈಗ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಜೊತೆ ಚರ್ಚೆ ಮಾಡಿದ್ದೇನೆ. ಹಿಂದುಳಿದ ವರ್ಗ ಹಾಗೂ ಅಲ್ವ ಸಂಖ್ಯಾತರಿಗೆ ಟಿಕೆಟ್ ನೀಡುವ ಭರವಸೆ ನೀಡಿದ್ದಾರೆ.ಹೈಕಮಾಂಡ್ ಯಾವ ನಿರ್ಧಾರ ಮಾಡುತ್ತದೆಯೋ ಕಾದು ನೋಡಬೇಕು ಎಂದು ಹೇಳಿದರು.
ಈ ಮಧ್ಯೆ, ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಟಾರ್ ಭೇಟಿ ನೀಡಿ ಅಲ್ಪ ಸಂಖ್ಯಾತ ಕೋಟಾದಡಿ ಮತ್ತೂಂದು ಅವಧಿಗೆ ಅವಕಾಶ ಕಲ್ಪಿಸುವಂತೆ ಮನವಿ ಮಾಡಿದ್ದಾರೆ.
ಮನೆಗೆ ಟಿಕೆಟ್ ಆಕಾಂಕ್ಷಿಗಳ ಒತ್ತಡ ಹೆಚ್ಚಾದ್ದರಿಂದ ಸಿದ್ದರಾಮಯ್ಯ ಮಾಜಿ ಸಚಿವ ಡಾ. ಹೆಚ್ ಸಿ ಮಹದೇವಪ್ಪ ಹಾಗೂ ಚೆಲುವರಾಯ ಸ್ವಾಮಿ ಅವರೊಂದಿಗೆ ಬೆಂಗಾವಲು ವಾಹನವನ್ನು ಬಿಟ್ಟು ಅಜ್ಞಾತ ಸ್ಥಳಕ್ಕೆ ತೆರಳಿದರು.