ಸಿಂಧನೂರು: ಸಾಮಾಜಿಕ ನ್ಯಾಯದ ಮೇಲೆ ಮೈತ್ರಿ ಸರ್ಕಾರ ನಡೆಯುತ್ತಿದ್ದು, ಈ ಹಿಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಜನಪ್ರಿಯ ಯೋಜನೆಗಳು ಮುಂದುವರಿಯುತ್ತವೆ. ಇದರಲ್ಲಿ ಯಾವುದೇ ಬದಲಾವಣೆಗಳಿಲ್ಲ ಎಂದು ಪಶುಸಂಗೋಪನಾ ಹಾಗೂ ಮೀನುಗಾರಿಕೆ ಇಲಾಖೆ ಸಚಿವ ವೆಂಕಟರಾವ್ ನಾಡಗೌಡ ಹೇಳಿದರು.
ನಗರದ ಪಿಡಬ್ಲ್ಯೂಡಿ ಕ್ಯಾಂಪಿನ ಹಿಂದುಳಿದ ವರ್ಗಗಳ ಇಲಾಖೆಯ 3.25 ಕೋಟಿ ವೆಚ್ಚದ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ಕಟ್ಟಡ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಸಿಎಂ ಕುಮಾರಸ್ವಾಮಿ ರೈತರ ಪರ ಬಜೆಟ್ ನೀಡಿದ್ದಾರೆ. ಉತ್ತರ ಕರ್ನಾಟಕ ಭಾಗಕ್ಕೆ ಸ್ವಲ್ಪ ಮಟ್ಟಿಗೆ ಅನ್ಯಾಯವಾದರೂ ಈ ಹಿಂದೆ ಕಾಂಗ್ರೆಸ್ ಸರ್ಕಾರ ನೀಡಿದ ಯೋಜನೆಗಳು ಮುಂದುವರಿಯಲಿವೆ ಎಂದರು.
ಭೂಸೇನಾ ನಿಗಮದ ಅಧಿಕಾರಿಗಳು ಹಣ ದುರ್ಬಳಕೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಿಗಮದ ಹಿರಿಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದು, ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಯಾವುದೇ ಕೆಲಸಗಳನ್ನು ಭೂಸೇನಾ ನಿಗಮಕ್ಕೆ ನೀಡಬಾರದು ಎನ್ನುವ ನಿರ್ಧಾರಕ್ಕೆ ಬರಲಾಗಿದೆ. ಹಣ ದುರ್ಬಳಕೆ ಮಾಡಿಕೊಂಡ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಲಾಗುವುದು ಎಂದರು.
ಬಜೆಟ್‌ನಲ್ಲಿ ಮೀನುಗಾರಿಕೆ ಇಲಾಖೆಯ ಹೊಸ ಪ್ರಾಜೆಕ್ಟ್ಗೆ 4 ಕೋಟಿ ಅನುದಾನ ನೀಡಿದ್ದು, ಅಧಿಕಾರಿಗಳ ಸಭೆ ನಡೆಸಿ ಕೆಲಸ ನಡೆಸುವುದಾಗಿ ಹೇಳಿದರು.
ನಗರಸಭೆ ಅಧ್ಯಕ್ಷೆ ಮಂಜುಳಾ ಪಾಟೀಲ, ಸದಸ್ಯರಾದ ಕೆ.ಮರಿಯಪ್ಪ, ಬಸವರಾಜ ನಾಡಗೌಡ, ಹಾಜಿಮಸ್ತಾನ್, ಶರಣಬಸವ ನೆಟೆಕಲ್, ಚಂದ್ರಶೇಖರ ಮೈಲಾರ, ಪೌರಾಯುಕ್ತ ವಿರೂಪಾಕ್ಷ ಮೂರ್ತಿ ಇತರರು ಇದ್ದರು.