Advertisement

ಉದ್ಯೋಗ ಭದ್ರತೆಗೆ ಗುತ್ತಿಗೆ ನೌಕರರ ಪ್ರತಿಭಟನೆ

11:27 AM Oct 26, 2018 | Team Udayavani |

ಬೀದರ: ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರ ವೇದಿಕೆಯು ಉದ್ಯೋಗ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸಲು ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಗುರುವಾರ ಸಾಂಕೆತೀಕ ಧರಣಿ ನಡೆಸಿದರು.

Advertisement

ದೇಶವ್ಯಾಪಿ ನಡೆಯುತ್ತಿರುವ ಪ್ರತಿಭಟನೆ ಅಂಗವಾಗಿ ಜಿಲ್ಲಾ ಕೇಂದ್ರದಲ್ಲಿ ಧರಣಿ ಸತ್ಯಾಗ್ರಹ ನಡೆಸಿದ ನೌಕರರು, ಹಲವಾರು ವರ್ಷಗಳಿಂದ ಇಲಾಖೆಯಲ್ಲಿ ಸೇವೆ ಸಲ್ಲಿಸುತಿದ್ದರೂ ನಮಗೆ ಉದ್ಯೋಗ ಭದ್ರತೆಯಿಲ್ಲ. ಗುತ್ತಿಗೆ ನೌಕರರಿಗೆ ಸರ್ಕಾರ ಸಮಾನ ವೇತನ ಕಲ್ಪಿಸಬೇಕು ಮತ್ತು ಗುತ್ತಿಗೆ ವ್ಯವಸ್ಥೆಯನ್ನು ಸಂಪೂರ್ಣ ರದ್ದುಪಡಿಸಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರ್ಕಾರ ಆರೋಗ್ಯ ಕ್ಷೇತ್ರದ ಬಜೆಟ್‌ಅನ್ನು ಶೇ.15ಕ್ಕೆ ಏರಿಸಬೇಕು. ಅದಕ್ಕೆ ಅಗತ್ಯವಿರುವ ಆರ್ಥಿಕ ನೆರವನ್ನು ಕೇಂದ್ರ ಸರ್ಕಾರ ಒದಗಿಸಬೇಕು. ವೇತನ, ಭತ್ಯೆಗಳು ಮತ್ತು ವೇತನ ಶ್ರೇಣಿಯನ್ನು ಹರಿಯಾಣ ರಾಜ್ಯದ ಮಾದರಿಯಲ್ಲಿ ನೀಡಬೇಕು. ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಮಾದರಿಯಲ್ಲಿ ಕಾಯ್ದೆ ಜಾರಿಗೆ ತಂದು ಸೇವಾ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ. 

ಎಲ್ಲಾ ಗುತ್ತಿಗೆ ನೌಕರರಿಗೆ ನೇರವಾಗಿ ಇಲಾಖೆಯಿಂದಲೇ ವೇತನ ಪಾವತಿ ಮಾಡಬೇಕು ಮತ್ತು ಎಲ್ಲಾ ನೌಕರರಿಗೂ ವಿವಿಧ ಸೌಕರ್ಯಗಳು ದೊರಕಬೇಕು. ಹಾಲಿ ಗುತ್ತಿಗೆ ನೌಕರರನ್ನು ಖಾಯಂ ನೌಕರರೆಂದು ಪರಿಗಣಿಸಬೇಕು. ಸರ್ಕಾರಿ ನೌಕರರಿಗೆ ನೀಡುವ “ಜ್ಯೋತಿ ಸಂಜೀವಿನಿ’ ವೈದ್ಯಕೀಯ ಯೋಜನೆಯನ್ನು ಆರೋಗ್ಯ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಗುತ್ತಿಗೆ ನೌಕರರಿಗೂ ವಿಸ್ತರಿಸಬೇಕು ಎಂಬಿತ್ಯಾದಿ ಬೇಡಿಕೆಗಳು ಈಡೇರಿಸುವಂತೆ ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಲಾಯಿತು. ನಗರದ ಪ್ರಮುಖ ರಸ್ತೆಗಳಲ್ಲಿ ಗುತ್ತಿಗೆ ನೌಕರರು ಪ್ರತಿಭಟನಾ ರ್ಯಾಲಿ ನಡೆಸಿದರು. ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಾಜೇದ್ರಕುಮಾರ ಗಂದಗೆ, ಗೌರವಾಧ್ಯಕ್ಷ ರಾಜಕುಮಾರ ಮಾಳಗೆ, ಕಾರ್ಯದರ್ಶಿ ಪ್ರವೀಣ ಗುರುಮಿಟಕಲ್‌, ಜಿಲ್ಲಾ ಸಂಚಾಲಕ ಉಮೇಶ ಬಿರಾದಾರ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Advertisement

ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಖಾಶೆಂಪೂರ ಅವರು, ಆರೋಗ್ಯ ಇಲಾಖೆ ಗುತ್ತಿಗೆ ನೌಕರರ ಬೇಡಿಕೆಗಳ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಲು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು. ನೌಕರರ ಹಿತ ಕಾಪಾಡಲು ರಾಜ್ಯ ಸರ್ಕಾರ ಬದ್ಧವಾಗಿದೆ. ಈ ಬಗ್ಗೆ ಇವತ್ತೇ ಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವರ ಜೊತೆ ಚರ್ಚಿಸಲಾಗುವುದು ಎಂದು ಭರವಸೆ ನೀಡಿದರು. ಬೇರೆ ರಾಜ್ಯದ ಸಮಸ್ಯೆಗಳ ಬಗ್ಗೆ ತಲೆಕೆಡಿಸಿಕೊಳ್ಳೋದು ಬೇಡ. ನಮ್ಮ ರಾಜ್ಯದ ಸಮಸ್ಯೆಗಳಿಗೆ ಸ್ಪಂದಿಸಲು ಎಲ್ಲ ರೀತಿಯ ಪ್ರಯತ್ನ ಮಾಡಲಾಗುವುದು
ಎಂದು ಪ್ರತಿಭಟನಾ ನಿರತ ನೌಕರರಿಗೆ ಮನವರಿಕೆ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next