Advertisement

Contracter Case: ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆ ಪ್ರಕರಣ ಸಿಐಡಿಗೆ ಹಸ್ತಾಂತರ

01:32 AM Dec 31, 2024 | Team Udayavani |

ಬೆಂಗಳೂರು: ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಬಿಜೆಪಿ ಆಗ್ರಹಿಸುತ್ತಿರುವ ನಡುವೆಯೇ ಸರಕಾರ ಸೋಮವಾರ ಆ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿದೆ.

Advertisement

ಪ್ರಕರಣದಲ್ಲಿ ತಮ್ಮ ವಿರುದ್ಧ ವಿಪಕ್ಷಗಳಿಂದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು, ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲು ಮನವಿ ಮಾಡಿದ್ದರು. ಅದರಂತೆ ಸರಕಾರ ಈ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿದೆ ಎನ್ನಲಾಗಿದೆ. ಪ್ರಕರಣ ನಮಗೆ ವರ್ಗಾವಣೆಗೊಂಡಿದೆ ಎಂದು ಸಿಐಡಿ ಹಿರಿಯ ಅಧಿಕಾರಿಗಳು ಖಚಿತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ| ಜಿ. ಪರಮೇಶ್ವರ್‌, ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ತನಿಖೆಯಿಂದ ಸತ್ಯಾಸತ್ಯತೆ ಹೊರಬರಲಿದೆ. ತನಿಖಾ ವರದಿ ಬಂದ ಅನಂತರ ಏನೆಂಬುದು ನೋಡೋಣ. ಸಚಿವರ ಮೇಲೆ ಅನಾವಶ್ಯಕವಾಗಿ ಆಪಾದನೆ ಮಾಡುವುದು ಸರಿಯಲ್ಲ. ಡೆತ್‌ನೋಟ್‌ನಲ್ಲಿ ಅವರ ಹೆಸರು ಕೂಡ ಇಲ್ಲ ಎಂದು ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ. ಸಚಿವರ ಹೆಸರನ್ನು ತಂದು, ಸರಕಾರಕ್ಕೆ ಮಸಿ ಬಳಿಯುವ ಕೆಲಸವನ್ನು ಮಾಡುತ್ತಿದ್ದಾರೆ. ಸತ್ಯಾಸತ್ಯತೆ ಹೊರಬರಲಿ ಎಂಬ ದೃಷ್ಟಿಯಿಂದ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ಸಿಐಡಿಗೆ ವಹಿಸಲಾಗಿದೆ ಎಂದು ಹೇಳಿದರು.

ಪ್ರಿಯಾಂಕ್‌ ಮನವಿ ಏನು?
ಸಚಿನ್‌ ಆತ್ಮಹತ್ಯೆಗೆ ಸಂಬಂಧಪಟ್ಟಂತೆ ಪ್ರಕರಣವನ್ನು ಸ್ವತಂತ್ರ ತನಿಖಾ ಸಂಸ್ಥೆಯಾದ ಅಪರಾಧ ತನಿಖಾ ವಿಭಾಗ (ಸಿಐಡಿ)ಕ್ಕೆ ವಹಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಡಿ. 27ರಂದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಆದರೆ ಈ ವಿಷಯ ಸೋಮವಾರ ಬೆಳಕಿಗೆ ಬಂದಿದೆ.

ಬೀದರ್‌ ಜಿಲ್ಲೆ ಭಾಲ್ಕಿ ತಾಲೂಕಿನ ನಿವಾಸಿ ಸಚಿನ್‌ ಪಾಂಚಾಳ ಅವರು ಡಿಸೆಂಬರ್‌ 26ರಂದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣವು ಅತ್ಯಂತ ದುರದೃಷ್ಟಕರ ಮತ್ತು ಖೇದದ ಸಂಗತಿಯಾಗಿದೆ. ಈ ಪ್ರಕರಣದ ಬಗ್ಗೆ ಸಂಶಯ ಮೂಡುವಂತಹ ಹಲವು ವಿಷಯಗಳು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದ್ದು, ಈ ಬಗ್ಗೆ ಸತ್ಯಾಂಶ ತಿಳಿಯಲು ಸ್ವತಂತ್ರ ತನಿಖಾ ಸಂಸ್ಥೆಯಾದ ಅಪರಾಧ ತನಿಖಾ ವಿಭಾಗ (ಸಿಐಡಿ)ಕ್ಕೆ ವಹಿಸಬೇಕು ಎಂದು ಅವರು ಪತ್ರದಲ್ಲಿ ಕೋರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next