Advertisement

Contractor Case: ಸಚಿವ ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಪ್ರಶ್ನೆಯೇ ಉದ್ಭವಿಸಲ್ಲ: ಸಿಎಂ

04:46 PM Jan 01, 2025 | Team Udayavani |

ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್‌ ಖರ್ಗೆ ರಾಜೀನಾಮೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ. ಇದು ರಾಜಕೀಯ ದ್ವೇಷದ ಆರೋಪವಷ್ಟೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Advertisement

ಬೀದರ್‌ನ ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಒತ್ತಾಯಿಸಿ ವಿಪಕ್ಷ ಬಿಜೆಪಿ ಪೋಸ್ಟರ್‌ ಆಂದೋಲನ ಹಾಗೂ ತೀವ್ರ ಪ್ರತಿಭಟನೆ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ ಗುತ್ತಿಗೆದಾರ ಸಚಿನ್ ಪಾಂಚಾಳ್ ಪ್ರಕರರಣದಲ್ಲಿ ಪ್ರಿಯಾಂಕ್ ಖರ್ಗೆಯ ಪಾತ್ರವಿಲ್ಲ, ಡೆತ್ ನೋಟಲ್ಲಿ ಪ್ರಿಯಾಂಕ್‌ ಹೆಸರು ಉಲ್ಲೇಖವಿಲ್ಲ, ಅವರ ವಿರುದ್ಧ ಯಾವುದೇ ಸಾಕ್ಷ್ಯಾಧಾರವೂ ಲಭ್ಯವಾಗಿಲ್ಲ ಮತ್ತು ಅದಕ್ಕೂ ಮಿಗಿಲಾಗಿ ಅವರು ಯಾವುದೇ ತನಿಖೆಗೆ ತಯಾರು ಇರುವುದಾಗಿ ಹೇಳಿದ್ದಾರೆ, ಹಾಗಾಗಿ ರಾಜೀನಾಮೆ ಸಲ್ಲಿಸುವ ಪ್ರಮೇಯ ಉದ್ಭವಿಸುವುದಿಲ್ಲ. ಪ್ರಕರಣದ ಸಂಬಂಧ ದಾಖಲಾಗಿರುವ ದೂರಿನ ಆಧಾರದಲ್ಲಿ ತನಿಖೆಯ ಸಿಐಡಿಗೆ ವಹಿಸಲಾಗಿದ್ದು, ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

ಬೇಡಿಕೆ ಮುಂದಿಡಲು ಬಿಜೆಪಿಯವರಿಗೆ ನೈತಿಕತೆ ಇಲ್ಲ:

ಬಿಜೆಪಿಯವರು ಸಚಿನ್‌ ಆತ್ಮಹತ್ಯೆ ಪ್ರಕರಣದ ತನಿಖೆ ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ರಾಜ್ಯದ ಪೊಲೀಸರ ಬಗ್ಗೆ ಬಿಜೆಪಿಯವರಿಗೆ ನಂಬಿಕೆಯಿಲ್ಲವೇ? ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಒಂದೇ ಒಂದು ಪ್ರಕರಣವನ್ನೂ ಸಿಬಿಐಗೆ ವಹಿಸಿರಲಿಲ್ಲ. ಆದ್ದರಿಂದ ಸಿಬಿಐಗೆ ತನಿಖೆ ವಹಿಸಬೇಕೆಂಬ ಬೇಡಿಕೆ ಮುಂದಿರಿಸಲು ಬಿಜೆಪಿಯವರಿಗೆ ನೈತಿಕತೆ ಇಲ್ಲ ಎಂದು ಹೇಳಿದರು.

ವಿಧಾನ ಪರಿಷತ್‌ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹಾಗೂ ಎಂಎಲ್‌ಸಿ ಸಿ.ಟಿ.ರವಿಯವರ ಪ್ರಕರಣವನ್ನೂ ಸಿಐಡಿಗೆ ವಹಿಸಲಾಗಿದೆ. ಅವಾಚ್ಯ ಪದಬಳಕೆ ಆಗಿದೆಯಾ? ಇಲ್ಲವಾ? ಎಂಬ ಬಗ್ಗೆ ಎಫ್ ಎಸ್ ಎಲ್ ವರದಿ ಬರಲಿದೆ. ಮಹಿಳಾ ಸಚಿವರಿಗೆ ಅವಹೇಳನ ಮಾಡಿರುವ ಆರೋಪವಿದ್ದು, ಸಿ.ಟಿ.ರವಿಯವರ ಮೇಲೆ ದೂರು ದಾಖಲಾಗಿದೆ ಎಂದರು.

ಸಂಪುಟ ವಿಸ್ತರಣೆ ಸುಳಿವು:
ಹೊಸ ವರ್ಷದಲ್ಲಿ ರಾಜ್ಯ ಸರಕಾರದ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಸಿದ್ದರಾಮಯ್ಯ ಸುಳಿವು ನೀಡಿದ್ದು, ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ಸಂಪುಟ ವಿಸ್ತರಣೆ ಬಗ್ಗೆ ಮುಂದಿನ ದಿನಗಳಲ್ಲಿ ಚರ್ಚಿಸಲಾಗುವುದು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next