Advertisement
ಬೀದರ್ನ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಒತ್ತಾಯಿಸಿ ವಿಪಕ್ಷ ಬಿಜೆಪಿ ಪೋಸ್ಟರ್ ಆಂದೋಲನ ಹಾಗೂ ತೀವ್ರ ಪ್ರತಿಭಟನೆ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ ಗುತ್ತಿಗೆದಾರ ಸಚಿನ್ ಪಾಂಚಾಳ್ ಪ್ರಕರರಣದಲ್ಲಿ ಪ್ರಿಯಾಂಕ್ ಖರ್ಗೆಯ ಪಾತ್ರವಿಲ್ಲ, ಡೆತ್ ನೋಟಲ್ಲಿ ಪ್ರಿಯಾಂಕ್ ಹೆಸರು ಉಲ್ಲೇಖವಿಲ್ಲ, ಅವರ ವಿರುದ್ಧ ಯಾವುದೇ ಸಾಕ್ಷ್ಯಾಧಾರವೂ ಲಭ್ಯವಾಗಿಲ್ಲ ಮತ್ತು ಅದಕ್ಕೂ ಮಿಗಿಲಾಗಿ ಅವರು ಯಾವುದೇ ತನಿಖೆಗೆ ತಯಾರು ಇರುವುದಾಗಿ ಹೇಳಿದ್ದಾರೆ, ಹಾಗಾಗಿ ರಾಜೀನಾಮೆ ಸಲ್ಲಿಸುವ ಪ್ರಮೇಯ ಉದ್ಭವಿಸುವುದಿಲ್ಲ. ಪ್ರಕರಣದ ಸಂಬಂಧ ದಾಖಲಾಗಿರುವ ದೂರಿನ ಆಧಾರದಲ್ಲಿ ತನಿಖೆಯ ಸಿಐಡಿಗೆ ವಹಿಸಲಾಗಿದ್ದು, ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.ಬೇಡಿಕೆ ಮುಂದಿಡಲು ಬಿಜೆಪಿಯವರಿಗೆ ನೈತಿಕತೆ ಇಲ್ಲ:
ಬಿಜೆಪಿಯವರು ಸಚಿನ್ ಆತ್ಮಹತ್ಯೆ ಪ್ರಕರಣದ ತನಿಖೆ ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ರಾಜ್ಯದ ಪೊಲೀಸರ ಬಗ್ಗೆ ಬಿಜೆಪಿಯವರಿಗೆ ನಂಬಿಕೆಯಿಲ್ಲವೇ? ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಒಂದೇ ಒಂದು ಪ್ರಕರಣವನ್ನೂ ಸಿಬಿಐಗೆ ವಹಿಸಿರಲಿಲ್ಲ. ಆದ್ದರಿಂದ ಸಿಬಿಐಗೆ ತನಿಖೆ ವಹಿಸಬೇಕೆಂಬ ಬೇಡಿಕೆ ಮುಂದಿರಿಸಲು ಬಿಜೆಪಿಯವರಿಗೆ ನೈತಿಕತೆ ಇಲ್ಲ ಎಂದು ಹೇಳಿದರು.
ಹೊಸ ವರ್ಷದಲ್ಲಿ ರಾಜ್ಯ ಸರಕಾರದ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಸಿದ್ದರಾಮಯ್ಯ ಸುಳಿವು ನೀಡಿದ್ದು, ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ಸಂಪುಟ ವಿಸ್ತರಣೆ ಬಗ್ಗೆ ಮುಂದಿನ ದಿನಗಳಲ್ಲಿ ಚರ್ಚಿಸಲಾಗುವುದು ಎಂದು ಹೇಳಿದರು.