ಉಡುಪಿ: ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು, ನಿರುದ್ಯೋಗ ನಿವಾರಣೆಗೆ ಕ್ರಮ ಕೈಗೊಳ್ಳಬೇಕು ಎಂಬ ಬೇಡಿಕೆ ಸೇರಿದಂತೆ 44 ಕಾರ್ಮಿಕ ಬೇಡಿಕೆ (ಸನ್ನದು) ಹೊಂದಿರುವ ಕಿರುಹೊತ್ತಗೆಯನ್ನು ಸಿಐಟಿಯು ಉಡುಪಿ ಜಿಲ್ಲಾ ಸಮಿತಿ ಬಿಡುಗಡೆಗೊಳಿಸಿ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದೆ.
ಶುಕ್ರವಾರ ಪ್ರಸ್‌ಕ್ಲಬ್‌ನಲ್ಲಿ ಕಿರುಹೊತ್ತಗೆ ಬಿಡುಗಡೆಗೊಳಿಸಿ ಮಾತನಾಡಿದ ಸಿಐಟಿಯು ಜಿಲ್ಲಾಧ್ಯಕ್ಷ ಪಿ.ವಿಶ್ವನಾಥ ರೈ ಮತ್ತು ಪ್ರಧಾನ ಕಾರ್ಯದರ್ಶಿ ಕೆ.ಶಂಕರ್ ಅವರು “ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಹೋರಾಟದ ಮಂದುವರಿದ ಭಾಗವಾಗಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ(ಜೆಸಿಟಿಯು) ಹೊಸದಿಲ್ಲಿಯಲ್ಲಿ ಈಗಾಗಲೇ ಕಾರ್ಮಿಕರ ಸನ್ನದನ್ನು ಬಿಡುಗಡೆ ಮಾಡಿದೆ’ ಎಂದರು.
ಬೆಲೆಯೇರಿಕೆ ನಿಯಂತ್ರಣಕ್ಕೆ ನಿರ್ದಿಷ್ಟ ಕ್ರಮ ಕೈಗೊಳ್ಳಬೇಕು, ಸಾರ್ವಜನಿಕ ವಿತರಣ ವ್ಯವಸ್ಥೆಯ ಸೌಲಭ್ಯ ಪಡೆಯುವವರಿಗೆ ಆಧಾರ್‌ಕಾರ್ಡ್ ಜೋಡಣೆ ಕಡ್ಡಾಯ ಮಾಡಬಾರದು, ನಿರುದ್ಯೋಗ ಸಮಸ್ಯೆ ನಿಯಂತ್ರಿಸಬೇಕು. ಖಾಲಿ ಇರುವ ಎಲ್ಲ ಹುದ್ದೆಗಳನ್ನು ನೇಮಕಾತಿ ಮುಖಾಂತರ ಭರ್ತಿ ಮಾಡಬೇಕು,ಖಾಯಂ ಮತ್ತು ನಿರಂತರ ಸ್ವರೂಪದ ಹುದ್ದೆಗಳನ್ನು ಹೊರಗುತ್ತಿಗೆ ಮತ್ತು ಗುತ್ತಿಗೆ ನೀಡುವುದನ್ನು ನಿಲ್ಲಿಸಬೇಕು,ಸಮಾನ ಕೆಲಸ ಮಾಡುವ ಗುತ್ತಿಗೆ ಕಾರ್ಮಿಕರಿಗೆ ಖಾಯಂ ನೌಕರರಂತೆ ಸಮಾನ ವೇತನ , ಸವಲತ್ತು ಕಡ್ಡಾಯವಾಗಿ ನೀಡಬೇಕೆಂಬ ಸುಪ್ರೀಂ ಕೋರ್ಟ್‌ನ ತೀರ್ಮಾನವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು, ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು, ರಾಷ್ಟ್ರೀಯ ಕನಿಷ್ಠ ವೇತನ ನಿಗದಿಪಡಿಸಬೇಕು, ಕಾರ್ಪೊರೇಟರ್ ವಲಯಗಳಿಗೆ ನೀಡುತ್ತಿರುವ ಸಬ್ಸಿಡಿಯನ್ನು ಕಡಿತಗೊಳಿಸಬೇಕು, ನೂತನ ಪಿಂಚಣಿ ಯೋಜನೆಯನ್ನು ರದ್ದುಪಡಿಸಬೇಕು ಮೊದಲಾದ ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ನಡೆಸಲಾಗುವುದು ಎಂದರು.ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಖಜಾಂಚಿ ಶಶಿಧರ್ ಉಪಸ್ಥಿತರಿದ್ದರು.