ಬೆಳಗಾವಿ: ಭಾರತ ಸರ್ಕಾರವು ಕಳೆದ ಎಂಟು ವರ್ಷಗಳ ಅವಧಿಯಲ್ಲಿ ಬಡವರು ಹಾಗೂ ರೈತರ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದು ಎಲ್ಲಾ ಯೋಜನೆಗಳು ಬಡವರ ಕಲ್ಯಾಣ ಕೇಂದ್ರಿತ ಆಶಯವನ್ನೇ ಹೊಂದಿವೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ರಾಜ್ಯ ಸಚಿವರಾದ ಸೋಮ ಪ್ರಕಾಶ್ ಹೇಳಿದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಎಂಟು ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಸುವರ್ಣ ವಿಧಾನಸೌಧದ ಸೆಂಟ್ರಲ್ ಸಭಾಂಗಣದಲ್ಲಿ ಸೋಮವಾರ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳ ಫಲಾನುಭವಿಗಳ ಜೊತೆ ನಡೆದ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
2014 ಕ್ಕಿಂತ ಮೊದಲು ದೇಶದಲ್ಲಿ ಇದ್ದ ಪರಿಸ್ಥಿತಿ ಈಗ ಸಂಪೂರ್ಣ ಭಿನ್ನವಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಹೊಸ ಆಸೆ, ಭರವಸೆ ಎಲ್ಲರಲ್ಲಿ ಗರಿಗೆದರಿವೆ. ಉತ್ತಮ ಆಡಳಿತ ಹಾಗೂ ಬಡವರ ಕಲ್ಯಾಣದ ಧ್ಯೇಯದೊಂದಿಗೆ ದೇಶವನ್ನು ವಿಶ್ವಗುರುವಾಗಿಸಲು ಸಂಕಲ್ಪ ಮಾಡಲಾಗಿದೆ. ಸರ್ಕಾರದ ಎಲ್ಲಾ ಯೋಜನೆಗಳ ಕೇಂದ್ರ ಬಿಂದು ಬಡವರ ಕಲ್ಯಾಣವೇ ಆಗಿದೆ ಎಂದರು.
ಸ್ಟಾರ್ಟಪ್ ಕೈಗಾರಿಕೆಗಳಿಂದ ದೇಶದ ಔದ್ಯೋಗಿಕ ರಂಗದಲ್ಲಿ ವಿಕಾಸವಾಗುತ್ತಿದೆ. ಭಾರತವು ಜಗತ್ತಿನಲ್ಲಿಯೇ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಆರ್ಥಿಕತೆ ತನ್ನದಾಗಿಸಿಕೊಂಡಿದೆ. ಕರ್ನಾಟಕ ಸರ್ಕಾರವು ಸಹ ಉತ್ತಮ ಆಡಳಿತ ನೀಡುತ್ತಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ ಯೋಜನೆ ಅನುಷಾಾuನದಿಂದ ದೇಶದ ರೈತರ ಕಲ್ಯಾಣ ಯೋಜನೆಗಳ ಪ್ರಮಾಣ ನಾಲ್ಕು ಪಟ್ಟು ಹೆಚ್ಚಳವಾಗಿದೆ ಎಂದರು.
ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮಾತನಾಡಿ, ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ ಎಂಟು ವರ್ಷಗಳ ಅವಧಿಯಲ್ಲಿ ಅನೇಕ ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ರೈತಪರ ಕಾಳಜಿಯೊಂದಿಗೆ ಜಾರಿಗೊಳಿಸಿರುವ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ ಯೋಜನೆಯಡಿ ಕೇಂದ್ರ ಸರ್ಕಾರದಿಂದ ವಾರ್ಷಿಕ 6 ಸಾವಿರ ರೂ . ಹಾಗೂ ರಾಜ್ಯ ಸರ್ಕಾರದಿಂದ 4 ಸಾವಿರ ರೂ. ನೇರವಾಗಿ ಪ್ರತಿಯೊಬ್ಬ ರೈತರ ಬ್ಯಾಂಕ್ ಖಾತೆಗಳಿಗೆ ಜಮೆಯಾಗುತ್ತಿದೆ ಎಂದರು.
ಜಲಜೀವನ್ ಮಿಷನ್ ಯೋಜನೆಯಡಿ ಮನೆ ಮನೆಗೆ ನಳದ ಸಂಪರ್ಕ ಕಲ್ಪಿಸಲಾಗುತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿ 8 ಲಕ್ಷ ಮನೆಗಳಿಗೆ ನಲ್ಲಿಗಳ ಸಂಪರ್ಕ ಕಲ್ಪಿಸುವ ಗುರಿ ಹೊಂದಲಾಗಿದ್ದು ಇದುವರೆಗೆ 2 ಲಕ್ಷ 35 ಸಾವಿರ ಮನೆಗಳಿಗೆ ನಲ್ಲಿಗಳ ಮೂಲಕ ಶುದ್ಧ ಕುಡಿಯುವ ನೀರು ಪೂರೈಸಲಾಗುತ್ತಿದೆ ಎಂದು ಹೇಳಿದರು.
ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮಾತನಾಡಿ, ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ದೇಶದ 75 ಸ್ಥಳಗಳಲ್ಲಿ ಕೇಂದ್ರ ಸಚಿವರು ಈ ರೀತಿಯ ಸಂವಾದವನ್ನು ನಡೆಸುತ್ತಿದ್ದು, ಕರ್ನಾಟಕದಲ್ಲಿ ಬೆಂಗಳೂರು ಹಾಗೂ ಬೆಳಗಾವಿಯಲ್ಲಿ ಸಂವಾದ ಕಾರ್ಯಕ್ರಮ ನಡೆಯುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.
ಇದೇ ವೇಳೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ ಯೋಜನೆ, ಜಲಜೀವನ ಮಿಷನ್, ಪ್ರಧಾನಮಂತ್ರಿ ಆವಾಸ್ ಯೋಜನೆ, ಉಜ್ವಲ್ ಯೋಜನೆ, ಆಯುಷ್ಮಾನ್ ಭಾರತ, ಪ್ರಧಾನಮಂತ್ರಿ ಮುದ್ರಾ ಯೋಜನೆ, ಪೋಷಣ ಅಭಿಯಾನ, ಪ್ರಧಾನಮಂತ್ರಿ ಮಾತೃವಂದನಾ ಯೋಜನೆ, ಸ್ವಚ್ಛ ಭಾರತ ಯೋಜನೆ, ಒಂದು ದೇಶ; ಒಂದು ರೇಷನ್ ಕಾರ್ಡ್, ಗರೀಬ್ ಕಲ್ಯಾಣ ಅನ್ನ ಯೋಜನೆಯ ಫಲಾನುಭವಿಗಳು ಸಂವಾದದಲ್ಲಿ ಭಾಗವಹಿಸಿ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.
ಕಾರ್ಯಕ್ರಮದಲ್ಲಿ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ, ಸಂಸದೆ ಮಂಗಲಾ ಸುರೇಶ ಅಂಗಡಿ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ದುರ್ಯೋಧನ ಐಹೊಳೆ, ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಖ್ತಾರ ಹುಸೇನ ಪಠಾಣ, ಶಾಸಕ ಅಭಯ್ ಪಾಟೀಲ, ವಿಧಾನ ಪರಿಷತ್ ಸದಸ್ಯ ಡಾ| ಸಾಬಣ್ಣ ತಳವಾರ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಎಚ್.ವಿ.,ಉಪಸ್ಥಿತರಿದ್ದರು.