ಬೆಳಗಾವಿ: ನೆರೆ ಹಾವಳಿಯಿಂದ ಮುಳುಗಡೆ ಆಗಿರುವ ನದಿ ತೀರದ ಗ್ರಾಮಗಳನ್ನು ಶಾಶ್ವತವಾಗಿ ಸ್ಥಳಾಂತರ ಮಾಡುವುದು ಸರ್ಕಾರದ ಹಂತದಲ್ಲಿ ನಿರ್ಧರಿಸಬೇಕಾಗುತ್ತದೆ. ಪರಿಹಾರ ಕಾರ್ಯ ಮುಗಿದ ಬಳಿಕ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸರ್ಕಾರದ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ| ರಾಜೇಂದ್ರ ಕೆ.ವಿ ಹೇಳಿದರು.
ಶನಿವಾರ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಅಧ್ಯಕ್ಷ ಅಶಾ ಐಹೊಳೆ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಹಳ್ಳಿಗಳ ಸ್ಥಳಾಂತರ ಕುರಿತು ಸಭೆಯಲ್ಲಿ ನಿರ್ಣಯ ಅಂಗೀಕರಿಸಿದರೆ ಅದನ್ನು ಸರಕಾರಕ್ಕೆ ಕಳಿಸಿಕೊಡಲಾಗುವುದು ಎಂದು ಹೇಳಿದರು.
ಅತಿಯಾದ ಮಳೆ ಹಾಗೂ ನದಿಗಳ ಪ್ರವಾಹದಿಂದ ಸಾಕಷ್ಟು ಹಾನಿಯಾಗಿದೆ. ನದಿ ತೀರದ ಗ್ರಾಮಗಳ ಜನರು ಬಹಳ ಸಂಕಷ್ಟಕ್ಕೆ ಸಿಲುಕಿದ್ದರು. ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾಡಳಿತ ತಕ್ಷಣ ಸಂತ್ರಸ್ತರ ನೆರವಿಗೆ ಧಾವಿಸಿ ಪರಿಹಾರ ಕ್ರಮ ಕೈಗೊಂಡಿದೆ. ಈ ಎಲ್ಲ ಅಂಶಗಳನ್ನು ಗಣನೆಗೆ ತೆಗೆದುಕೊಂಡು ಸರಕಾರಕ್ಕೆ ಹಳ್ಳಿಗಳ ಸ್ಥಳಾಂತರದ ಬಗ್ಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ಹೇಳಿದರು.
ಇದಕ್ಕೂ ಮುನ್ನ ನೆರೆ ಹಾವಳಿ ವಿಷಯ ಪ್ರಸ್ತಾಪಿಸಿದ ಖಾನಾಪುರ ತಾಲುಕಿನ ಸದಸ್ಯ ಜಿತೇಂದ್ರ ಮಾದರ, ಜಿಲ್ಲೆಯಲ್ಲಿ ನಿರಂತರ ಮಳೆ ಹಾಗೂ ನದಿಗಳ ಪ್ರವಾಹದಿಂದ ಅಪಾರ ಪ್ರಮಾಣದಲ್ಲಿ ಹಾನಿ ಉಂಟಾಗಿದೆ. ಜನರು ಬಹಳ ತೊಂದರೆಯಲ್ಲಿದ್ದಾರೆ. ಈ ಬಗ್ಗೆ ಚರ್ಚಿಸಿ ಪರಿಹಾರ ಕ್ರಮ ಕೈಗೊಳ್ಳಲು ಜಿಲ್ಲಾ ಪಂಚಾಯತ್ ವಿಶೇಷ ಸಭೆ ಏಕೆ ಕರೆಯಲಿಲ್ಲ ಎಂದು ಅಧ್ಯಕ್ಷರನ್ನು ಪ್ರಶ್ನಿಸಿದರು. ಇದರಿಂದ ಸದಸ್ಯ ಜಿತೇಂದ್ರ ಮಾದರ ಹಾಗೂ ಅಧ್ಯಕ್ಷೆ ಆಶಾ ಐಹೊಳೆ ಮಧ್ಯೆ ಕೆಲಕಾಲ ವಾಗ್ವಾದ ಸಹ ನಡೆಯಿತು. ನಂತರ
ಅಧ್ಯಕ್ಷರು ಸಭೆಯಲ್ಲಿ ನೆರೆ ಹಾನಿ ಕುರಿತು ಚರ್ಚಿಸಲು ಅವಕಾಶ ಮಾಡಿಕೊಟ್ಟರು.
ಪ್ರವಾಹದಿಂದ ಬಹಳಷ್ಟು ಹಳ್ಳಿಗಳ ಜನರು ತೊಂದರೆಗೆ ಸಿಲುಕಿದ್ದಾರೆ. ಮನೆ ಮಠ ಕಳೆದುಕೊಂಡಿದ್ದಾರೆ. ಕೃಷಿ ಜಮೀನು ಹಾಳಾಗಿವೆ. ಕಾರಣ ಅಧಿಕಾರಿಗಳು ತಕ್ಷಣ ಪರಿಹಾರ ಕಾರ್ಯಗಳನ್ನು ಕೈಗೊಂಡು ಸಂತ್ರಸ್ತರ ನೋವಿಗೆ ಸ್ಪಂದಿಸಬೇಕು ಎಂದು ಸದಸ್ಯರು ಆಗ್ರಹಪಡಿಸಿದರು.
ಅಥಣಿಯಲ್ಲಿ ವಿದ್ಯುತ್ ಶಾಕ್‌ನಿಂದ ನೀರಲ್ಲಿ ಬಿದ್ದು ಸಾವನ್ನಪ್ಪಿರುವ ವ್ಯಕ್ತಿಯ ಮರಣೋತ್ತರ ಪರೀಕ್ಷೆಯ ವರದಿ ಇದುವರೆಗೆ ಬಂದಿಲ್ಲ ಎಂದು ಸತ್ತಿ ಜಿ.ಪಂ.ಸದಸ್ಯ ಸಿದ್ದಪ್ಪ ಮುದಕನ್ನವರ ಸಭೆಯ ಗಮನಕ್ಕೆ ತಂದರು.
ಇದಕ್ಕೆ ಉತ್ತರಿಸಿದ ಸಿಇಒ ಡಾ| ರಾಜೇಂದ್ರ ಕೆ.ವಿ. ಪ್ರವಾಹದಲ್ಲಿ ದುರ್ಮರಣರಾದ ವ್ಯಕ್ತಿಗಳ ಕುಟುಂಬಸ್ಥರಿಗೆ 24 ಗಂಟೆಗಳಲ್ಲಿ ಮಾನವೀಯ ದೃಷ್ಟಿಯಿಂದ ಐದು ಲಕ್ಷ ರೂಪಾಯಿ ಚೆಕ್ ನೀಡಲಾಗುತ್ತಿದೆ. ಶೀಘ್ರವೇ ಮರಣೋತ್ತರ ಪರೀಕ್ಷೆ ವರದಿ ತರಿಸಿಕೊಂಡು ಐದು ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತದೆ ಎಂದು ಭರವಸೆ ನೀಡಿದರು.