Advertisement

ಜಿಲ್ಲೆಯ ಅಭಿವೃದ್ಧಿಗೆ ಸಂಘಟಿತವಾಗಿ ಕಾರ್ಯ ನಿರ್ವಹಿಸಿ

09:48 PM Jan 20, 2020 | Lakshmi GovindaRaj |

ಚಿಕ್ಕಬಳ್ಳಾಪುರ: ಅಧಿಕಾರಿಗಳು ಮತ್ತು ಚುನಾಯಿತ ಜನಪ್ರತಿನಿಧಿಗಳು ಜಿಲ್ಲೆಯ ಅಭಿವೃದ್ಧಿಗಾಗಿ ಸಂಘಟಿತರಾಗಿ ಕಾರ್ಯನಿರ್ವಹಿಸಬೇಕು. ಆಗ ಮಾತ್ರ ಜಿಲ್ಲೆ ಅಭಿವೃದ್ಧಿಯಾಗಲು ಸಾಧ್ಯ. ಈ ನಿಟ್ಟಿನಲ್ಲಿ ಜಿಲ್ಲೆಯ ಅಧಿಕಾರಿಗಳು ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಜನ ಸಾಮಾನ್ಯರಿಗೆ ಮುಟ್ಟಿಸುವ ಕೆಲಸ ಮಾಡಬೇಕೆಂದು ಸಂಸದ ಬಿ.ಎನ್‌.ಬಚ್ಚೇಗೌಡ ತಿಳಿಸಿದರು.

Advertisement

ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಮೊದಲ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಅರಿವು ಮೂಡಿಸುವ ಕಾರ್ಯವನ್ನು ಅಧಿಕಾರಿಗಳು ಖುದ್ದಾಗಿ ನಿರ್ವಹಿಸಬೇಕೆಂದು ಸೂಚಿಸಿದರು.

ಸಾರ್ವಜನಿಕರಿಗೆ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ರವಾನೆಯಾಗಲು ಹಾಗೂ ಅದನ್ನು ಅನುಷ್ಠಾನಗೊಳಿಸಲು ಅಧಿಕಾರಿಗಳಿಂದ ಮಾತ್ರ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಅಧಿಕಾರಿಯು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಈ ಬಗ್ಗೆ ನಿರ್ಲಕ್ಷ್ಯ ವಹಿಸಬಾರದು. ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲೆಯ ಅಭಿವೃದ್ಧಿಗಾಗಿ ಶ್ರಮಿಸಬೇಕು. ಜನರಿಗೆ ಅಗತ್ಯ ಮೂಲ ಸೌಲಭ್ಯಗಳನ್ನು ಒದಗಿಸಲು ಆದ್ಯತೆ ನೀಡುವಂತೆ ತಿಳಿಸಿದರು.

ಡಯಾಲಿಸಿಸ್‌ ಘಟಕ ಸ್ಥಾಪಿಸಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಿ.ಎಂ. ಯೋಗೇಶ್‌ಗೌಡ ಮಾತನಾಡಿ, ಆಯುಷ್ಮಾನ್‌ ಆರೋಗ್ಯ ಕರ್ನಾಟಕ ಯೋಜನೆಯಡಿ ಜಿಲ್ಲೆಯಾದ್ಯಂತ ಆಯುಷ್ಮಾನ್‌ ಕಾರ್ಡ್‌ಗಳನ್ನು ಸಮರ್ಪಕವಾಗಿ ವಿತರಿಸಲಾಗುತ್ತಿದೆ. ನಕಲಿ ವೈದ್ಯರನ್ನು ಕಡಿವಾಣ ಹಾಕಲು ಈಗಾಗಲೇ ವಿವಿಧ ತಾಲೂಕುಗಳಲ್ಲಿ ನಕಲಿ ಕ್ಲಿನಿಕ್‌ಗಳ ಮೇಲೆ ದಾಳಿ ಮಾಡಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಸಂಸದರು, ಪ್ರತಿ ತಾಲೂಕು ಹಂತದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಡಯಾಲಿಸಿಸ್‌ ಕೇಂದ್ರಗಳನ್ನು ತೆರೆಯಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರಗಳು ಇಲ್ಲದ ಹಳ್ಳಿಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಾಪನೆಗೆ ಕೇಂದ್ರ ಅಥವಾ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ಸೂಚಿಸಿದರು.

Advertisement

ಫ್ಲೋರೈಡ್‌ ಮುಕ್ತ ನೀರು ಸರಬರಾಜು: ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿದಂತೆ ಕ್ರಮ ವಹಿಸಬೇಕೆಂದ ಅವರು, ಜಿಲ್ಲೆಯಲ್ಲಿ ಫ್ಲೋರೈಡ್‌ ಮುಕ್ತ ನೀರು ಸರಬರಾಜು ಮಾಡಲು 120 ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ಮಾಣ ಮಾಡಲಾಗಿದೆ.

ಬಾಗೇಪಲ್ಲಿ ಹಾಗೂ ಗುಡಿಬಂಡೆ ತಾಲೂಕುಗಳಲ್ಲಿ ಪ್ರತಿ ಹಳ್ಳಿಯಲ್ಲಿ ನಿರ್ಮಾಣ ಮಾಡಿದ್ದು, ಅವುಗಳನ್ನು ಉತ್ತಮವಾಗಿ ನಿರ್ವಹಣೆ ಮಾಡಲು ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು. ದಿಶಾ ಸಭೆಯಲ್ಲಿ ಜಿಪಂ ಅಧ್ಯಕ್ಷ ಎಂ.ಬಿ. ಚಿಕ್ಕನರಸಿಂಹಯ್ಯ, ಸಿಇಒ ಬಿ.ಫೌಜಿಯಾ ತರನ್ನುಮ್‌ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲೆಗೆ ಕೇಂದ್ರದ ನರೇಗಾ ಬಾಕಿ 30 ಕೋಟಿ: ಉದ್ಯೋಗ ಖಾತ್ರಿ ಯೋಜನೆ ಅನುಷ್ಠಾನದಲ್ಲಿ ಜಿಲ್ಲೆ 3ನೇ ಸ್ಥಾನದಲ್ಲಿದೆ. ನರೇಗಾ ಯೋಜನೆಗೆ ಕೂಲಿಕಾರರ ಕೂಲಿ ಹಾಗೂ ಸಾಮಗ್ರಿ ಬಿಲ್‌ಗ‌ಳ ಒಟ್ಟು 30 ಕೋಟಿ ರೂ. ಅನುದಾನ ಜಿಲ್ಲೆಗೆ ಬರಬೇಕಾಗಿದೆ ಎಂದು ಜಿಪಂ ಉಪ ಕಾರ್ಯದರ್ಶಿ ನೋಮೇಶ್‌ ಕುಮಾರ್‌ ಸಂಸದರ ಗಮನಕ್ಕೆ ತಂದರು.

ಈ ಬಗ್ಗೆ ಮುಂದಿನ ದಿನಗಳಲ್ಲಿ ಅನುದಾನ ಬಿಡುಗಡೆ ಮಾಡಿಸಲು ಕ್ರಮ ವಹಿಸುವುದಾಗಿ ಸಂಸದರು ಭರವಸೆ ನೀಡಿದರು. ಈಗಾಗಲೇ ನರೇಗಾ ಯೋಜನೆಯಡಿ ಕೆರೆಯಲ್ಲಿ ಹೂಳು ತೆಗೆಯುವುದು, ಚೆಕ್‌ಡ್ಯಾಂಗಳ ನಿರ್ಮಾಣ, ಶಾಲೆಗಳಲ್ಲಿ ಕಾಂಪೌಂಡ್‌ಗಳ ನಿರ್ಮಾಣ, ಮಳೆ ನೀರು ಕೊಯ್ಲು ಪದ್ಧತಿ ಅಳವಡಿಕೆ ಸೇರಿದಂತೆ ಮತ್ತಿತರ ಯೋಜನೆಗಳು ಸಮರ್ಪಕವಾಗಿ ನಡೆಯುತ್ತಿದೆ ಎಂದು ಜಿಪಂ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

72 ಹಳ್ಳಿಗಳಲ್ಲಿ ನೀರಿನ ಸಮಸ್ಯೆ: ಜಿಲ್ಲೆಯ ಗ್ರಾಮೀಣ ಕುಡಿಯುವ ನೀರು ಸಬರಾಜು ಹಾಗೂ ನೈರ್ಮಲ್ಯ ಇಲಾಖೆ ಅಧಿಕಾರಿಗಳು ಮಾತನಾಡಿ, ಜಿಲ್ಲಾದ್ಯಂತ ಒಟ್ಟು 72 ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಎಂದು ಗುರುತಿಸಲಾಗಿದೆ. ಇವುಗಳಲ್ಲಿ ಟ್ಯಾಂಕರ್‌ ಮೂಲಕ 17 ಹಳ್ಳಿಗಳಿಗೆ ಹಾಗೂ 55 ಹಳ್ಳಿಗಳಿಗೆ ಖಾಸಗಿ ಕೊಳವೆ ಬಾವಿಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಸ್ವತ್ಛ ಭಾರತ್‌ ಮಿಷನ್‌ ಯೋಜನೆಯಡಿ 68 ಸಮುದಾಯ ಶೌಚಾಲಯಗಳನ್ನು ನಿರ್ಮಾಣ ಮಾಡುವ ಗುರಿ ಹೊಂದಲಾಗಿದ್ದು, ಇದರಲ್ಲಿ 20 ಸಮುದಾಯ ಶೌಚಾಲಯಗಳು ಪೂರ್ಣಗೊಂಡಿದ್ದು, ಉಳಿದ 48 ಶೌಚಾಲಯಗಳು ಪ್ರಗತಿಯಲ್ಲಿದ್ದು, ಮುಂದಿನ ದಿನಗಳಲ್ಲಿ ಪೂರ್ಣಗೊಳಿಸಲಾಗುತ್ತದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next