ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ದೂರದೃಷ್ಟಿ ಯೋಜನೆಗೆ ಇಂದು ಚಾಲನೆ ನೀಡಿದ ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಅವರು ಸರ್ಕಾರದ ಯಾವುದೇ ಅಭಿವೃದ್ಧಿ ಯೋಜನೆ ಯಶಸ್ವಿಯಾಗಿ ಅನುಷ್ಠಾನಗೊಳ್ಳಬೇಕಾದರೆ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಸಹಕಾರ, ಶ್ರಮ ಹಾಗೂ ಸಮನ್ವಯ ಅತ್ಯಂತ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದು ಅಭಿಪ್ರಾಯಪಟ್ಟರು.
ಗ್ರಾಮ ಪಂಚಾಯಿತಿಗಳಿಗೆ ಆಯ್ಕೆ ಆಗುವ ಸದಸ್ಯರು ತಮ್ಮ ಕ್ಷೇತ್ರದ ಅಭಿವೃದ್ಧಿಗಾಗಿ ಆಶಯಗಳನ್ನು ಹೊಂದಿದ್ದು, ಅದಕ್ಕೆ ಪೂರಕವಾಗಿ ಅಧಿಕಾರಿಗಳು ಸಹಕರಿಸಿ, ಗ್ರಾಮ ಪಂಚಾಯಿತಿಯ ಅಭಿವೃದ್ಧಿಗೆ ಕೈಜೋಡಿಸಬೇಕು. ಜನಪ್ರತಿನಿಧಿ ಮತ್ತು ಅಧಿಕಾರಿಯ ನಡುವೆ ಹೊಂದಾಣಿಕೆ ಇದ್ದಲ್ಲಿ ಮಾತ್ರ ಅಭಿವೃದ್ಧಿ ಕಾಣಲು ಸಾಧ್ಯ ಎಂದರು.
ಇತ್ತೀಚಿನ ದಿನಗಳಲ್ಲಿ ನಡೆಯುವ ಗ್ರಾಮ ಸಭೆಗಳಲ್ಲಿ ಕೆಲವು ಇಲಾಖೆ ಅಧಿಕಾರಿಗಳು ಗೈರು ಹಾಜರಾಗುವ ಹವ್ಯಾಸ ಬೆಳೆಸಿಕೊಂಡಿದ್ದಾರೆ. ಇದರಿಂದಾಗಿ ಸಕಾಲದಲ್ಲಿ ನ್ಯಾಯಯುತವಾಗಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಸೌಲಭ್ಯಗಳನ್ನು ಒದಗಿಸುವಲ್ಲಿ ತೊಡಕು ಉಂಟಾಗುತ್ತಿದೆ. ಅಧಿಕಾರಿಗಳು ಗ್ರಾಮ ಸಭೆಗಳಲ್ಲಿ ಪಾಲ್ಗೊಳ್ಳುವುದನ್ನು ಕಡ್ಡಾಯಗೊಳಿಸಿ, ಗೈರು ಹಾಜರಾದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮವನ್ನು ಕೈಗೊಳ್ಳಬೇಕು ಎಂದು ಸಚಿವರು ಸೂಚಿಸಿದರು.
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದಂತೆ ಗ್ರಾಮ ಪಂಚಾಯಿತಿಗಳು ಗ್ರಾಮೀಣ ಸಹಭಾಗಿತ್ವದ ಪರಾಮರ್ಶೆ ಮೂಲಕ ರಾಜ್ಯ ಮತ್ತು ರಾಷ್ಟ್ರದ ಅಭಿವೃದ್ಧಿ ಮೈಲುಗಲ್ಲುಗಳನ್ನು ಸಾಧಿಸುವ ನಿಟ್ಟಿನಲ್ಲಿ ಮುಂದಿನ ಐದು ವರ್ಷಗಳಿಗೆ ಸಮುದಾಯದ ಸಹಭಾಗಿತ್ವದೊಂದಿಗೆ ಯೋಜನೆಯನ್ನು ತಯಾರಿಸಿ ದೂರ ದೃಷ್ಟಿ ಯೋಜನೆಯನ್ನು ಸಿದ್ಧಪಡಿಸಬೇಕಾಗಿರುತ್ತದೆ. ಗ್ರಾಮೀಣ ಪ್ರದೇಶದ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು, ಸಮುದಾಯದ ಸಹಭಾಗಿತ್ವದೊಂದಿಗೆ ಲಭ್ಯವಿರುವ ಸಂಪನ್ಮೂಲಗಳ ಆಧಾರದ ಮೇಲೆ ಅಲ್ಪಾವಧಿ, ಮಧ್ಯಮಾವಧಿ ಹಾಗೂ ದೀರ್ಘಾವಧಿ ಹಂತಗಳಲ್ಲಿ ಗುರಿಗಳನ್ನು ನಿಗದಿಪಡಿಸಿಕೊಂಡು ಯೋಜನೆಯನ್ನು ಸಿದ್ಧಪಡಿಸುವುದು ದೂರದೃಷ್ಟಿ ಯೋಜನೆ ಎಂದು ಬೆಂಗಳೂರಿನ ನಗರ ಜಿಲ್ಲಾ ಪಂಚಾಯಿತಿಯ ಮುಖ್ಯ ಯೋಜನಾಧಿಕಾರಿಯದ ವಿನುತಾ ರಾಣಿ ಅವರು ತಿಳಿಸಿದರು.
ಗ್ರಾಮ ಪಂಚಾಯಿತಿಗಳಲ್ಲಿ ಎಂಟು ವಲಯಗಳ ಒಟ್ಟು 248 ಅಂಶಗಳನ್ನು ಒಳಗೊಂಡ 17 ವಿವಿಧ ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ನಿಗದಿ ಪಡಿಸಿಕೊಳ್ಳಲಾಗುವುದು ಎಂದು ತಿಳಿಸಿದ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಸಂಗಪ್ಪ ಅವರು ಬಡತನ ಮುಕ್ತ ಜೀವನೋಪಾಯ ಕೌಶಲ್ಯ ಅಭಿವೃದ್ಧಿ ಆರೋಗ್ಯ ಶಿಕ್ಷಣ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ನೈಸರ್ಗಿಕ ಸಂಪನ್ಮೂಲ ನಿರ್ವಹಣೆ ಹಾಗೂ ಸಾಮಾಜಿಕ ಸುರಕ್ಷತೆ ಕ್ಷೇತ್ರಗಳಲ್ಲಿ ಯೋಜನೆಗಳನ್ನು ರೂಪಿಸಿಕೊಳ್ಳಲಾಗುವುದು ಎಂದು ತಿಳಿಸಿದರು.
ಈ ನಿಟ್ಟಿನಲ್ಲಿ ಹತ್ತು ವ್ಯವಸ್ಥಿತ ಹಂತಗಳಲ್ಲಿ ಯೋಜನೆಗಳನ್ನು ರೂಪಿಸಲು ಸೂಕ್ತ ಪೂರ್ವ ಸಿದ್ಧತೆ ಹಾಗೂ ಪೂರಕ ವಾತಾವರಣವನ್ನು ನಿರ್ಮಾಣ ಮಾಡಲು ಅರಿವು ಮೂಡಿಸುವ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿಯ ಉಪ ಕಾರ್ಯದರ್ಶಿ ನೋಮೇಶ ಕುಮಾರ್, ಮುಖ್ಯ ಲೆಕ್ಕಪತ್ರ ಅಧಿಕಾರಿ ಲಲಿತ ಕೆ, ಯೋಜನಾ ನಿರ್ದೇಶಕ ಈಶ್ವರಪ್ಪ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.