ದೇವನಹಳ್ಳಿ: ಪರಿಣಾಮಕಾರಿಯಾಗಿ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಲು ಜಿಲ್ಲೆಯಾದ್ಯಂತ ಸ್ವಚ್ಛತಾ ಸಪ್ತಾಹ ಹಮ್ಮಿಕೊಳ್ಳಲು ಆರೋಗ್ಯ ಇಲಾಖೆ ಅಧಿಕಾರಿಗಳು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸೂಚಿಸಿದರು.
ತಾಲೂಕಿನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಮಲೇರಿಯಾ ವಿರೋಧಿ ಮತ್ತು ಡೆಂಘೀ ವಿರೋಧಿ ಮಾಸಾಚರಣೆ ಸಮನ್ವಯ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಟ್ಟಡಗಳ ಸುತ್ತಮುತ್ತ ಹಾಗೂ ನಿರ್ಮಾಣಗೊಳ್ಳುತ್ತಿರುವ ಹೊಸ ಕಟ್ಟಡದ ಮೇಲ್ಭಾಗದಲ್ಲಿ ನೀರು ನಿಲ್ಲದಂತೆ ಮಾಲಿಕರಿಗೆ ಸೂಚನೆನೀಡಬೇಕು. ಸೊಳ್ಳೆಗಳು ಉತ್ಪತ್ತಿಯಾಗುವ ನೀರು ನಿಂತಿರುವ ಹೊಂಡ, ಗಣಿಗಾರಿಕೆ ಪ್ರದೇಶದ ಹೊಂಡಗಳಲ್ಲಿ ಗಪ್ಪಿ ಮೀನು ಬಿಡಲು ಕ್ರಮವಹಿಸಬೇಕು ಎಂದು ತಿಳಿಸಿದರು.
ಹೊಸಕೋಟೆ ಮತ್ತು ನೆಲಮಂಗಲ ತಾಲೂಕು ಸೇರಿ ನಗರ ಪ್ರದೇಶದ ಹೊರ ಭಾಗದಲ್ಲಿ ಕಸದ ತುಂಬಿರುವುದು ಕಂಡು ಬಂದಿದ್ದು, ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು ಸ್ವಚ್ಛತೆ ಕಾಪಾಡಲು ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ಸೂಚಿಸಿದರು.
ಸಾರ್ವಜನಿಕರಿಗೆ ಮಲೇರಿಯಾ, ಡೆಂಘೀ, ಚಿಕೂನ್‌ಗುನ್ಯಾ ರೋಗ ನಿಯಂತ್ರಣಗಳ ಬಗ್ಗೆ ಮಾಹಿತಿ ನೀಡಬೇಕು. ಸ್ವತ್ಛತೆ ಹಾಗೂ ನೈರ್ಮಲ್ಯದ ಬಗ್ಗೆ ತಾಲೂಕವಾರು ನಗರಸಭೆ ಮತ್ತು ಪುರಸಭೆ ಮುಖ್ಯಸ್ಥರು ಇತರೆ ಇಲಾಖೆ ಸಹಯೋಗದೊಂದಿಗೆ ಜಾಗೃತಿ ಮೂಡಿಸಿ ರೋಗ ತಡೆಗಟ್ಟಲು ಕ್ರಮವಹಿಸಬೇಕು. ಮನೆಗಳಲ್ಲಿ ಶೇಖರಿಸುವ ನೀರನ್ನು ವಾರಕ್ಕೊಮ್ಮೆ ಸ್ವಚ್ಛಮಾಡುವ ಜೊತೆಗೆ ನೀರಿನ ಟ್ಯಾಂಕ್‌ಗಳ ಮೇಲೆ ಮುಚ್ಚಳಿಕೆಯಿಂದ ಭದ್ರಗೊಳಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಧರ್ಮೆಂದ್ರ ಮಾತನಾಡಿ, ಜಿಲ್ಲೆಯಲ್ಲಿ 3 ಮಲೇರಿಯಾ, 7 ಚಿಕೂನ್‌ಗುನ್ಯಾ ಹಾಗೂ 8 ಡೆಂಘೀ ಪ್ರಕರಣ ಕಂಡುಬಂದಿದ್ದು, ಸಾಂಕ್ರಾಮಿಕ ರೋಗಗಳ ನಿಯಂ ತ್ರಣಕ್ಕೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಭೆಗೆ ಮಾಹಿತಿ ನೀಡಿದರು. ಸಭೆಯಲ್ಲಿ ಜಿಪಂ ಸಿಇಒ ನಾಗರಾಜು, ಜಿಲ್ಲಾ ಆರೋಗ್ಯಾಧಿಕಾರಿ ಮಂಜುಳಾದೇವಿ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.