ಹಾವೇರಿ: ಜಿಲ್ಲೆಯಲ್ಲಿ 12 ರಿಂದ 14 ವರ್ಷದ 64,593 ಮಕ್ಕಳಿಗೆ ಇಂದಿ(ಬುಧವಾರ)ನಿಂದ ಕಾರ್ಬೆವ್ಯಾಕ್ಸ್ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಈ ಲಸಿಕೆ ಮಕ್ಕಳಿಗೆ ಕೋವಿಡ್‌ನಿಂದ ವಿಶೇಷ ಆರೋಗ್ಯ ಭದ್ರತೆ ನೀಡುತ್ತದೆ. ಪೋಷಕರು ಯಾವುದೇ ಭಯವಿಲ್ಲದೆ ಲಸಿಕೆ ಪಡೆಯಲು ಮಕ್ಕಳನ್ನು ಪ್ರೋತ್ಸಾಹಿಸಬೇಕೆಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಹೇಳಿದರು.
ನಗರದ ಜಿಲ್ಲಾಸ್ಪತ್ರೆ ಸಭಾಂಗಣದಲ್ಲಿ ಬುಧವಾರ 12 ರಿಂದ 14 ವರ್ಷದ ಮಕ್ಕಳಿಗೆ ಸರ್ಕಾರ ವಿಶೇಷ ಅನುಮತಿ ನೀಡಿರುವ ಕಾರ್ಬೆವ್ಯಾಕ್ಸ್ ಕೋವಿಡ್ ಲಸಿಕೆ ಹಾಕುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಶಾಲೆಯಿಂದ ಹೊರಗುಳಿದ 12 ವರ್ಷ ಮೇಲ್ಪಟ್ಟ ಮಕ್ಕಳಿಗೂ ಲಸಿಕೆ ಹಾಕಲಾಗುವುದು. ಈ ನಿಟ್ಟಿನಲ್ಲಿ ಶಿಕ್ಷಣ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಸಕ್ಕರೆ ಕಾಯಿಲೆ, ಅಸ್ತಮಾದಂತಹ ಗಂಭೀರ ಆರೋಗ್ಯ ಸಮಸ್ಯೆ ಎದುರಿಸುವ 60 ವರ್ಷ ಮೇಲ್ಪಟ್ಟವರಿಗೆ ಮಾತ್ರ ಈವರೆಗೆ ಬೂಸ್ಟರ್ ಡೋಸ್ ಕೋವಿಡ್ ಲಸಿಕೆ ನೀಡಲಾತ್ತಿತ್ತು. ಆದರೆ, ಈಗ ಸರ್ಕಾರದ ಸೂಚನೆಯಂತೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಬೂಸ್ಟರ್ ಡೋಸ್ ನೀಡಲಾಗುತ್ತದೆ. ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು.
ಈಗಾಗಲೇ ಜಿಲ್ಲೆಯಲ್ಲಿ 15 ರಿಂದ 17 ವರ್ಷದ 76 ಸಾವಿರ ಮಕ್ಕಳಿಗೆ ಮೊದಲ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ. ಉಳಿದವರಿಗೆ ಲಸಿಕೆ ನೀಡುವ ಕಾರ್ಯಕ್ರಮ ಪ್ರಗತಿಯಲ್ಲಿದೆ. ಇದರೊಂದಿಗೆ ನಿಗದಿತ ಸಮಯದಲ್ಲಿ ಎರಡನೇ ಡೋಸ್ ಲಸಿಕೆ ನೀಡಲಾಗುವುದು. 18 ವರ್ಷ ಮೇಲ್ಪಟ್ಟ ಶೇ.102ರಷ್ಟು ಜನರಿಗೆ ಮೊದಲ ಡೋಸ್ ಹಾಗೂ ಶೇ.96.67ರಷ್ಟು ಜನರಿಗೆ ಎರಡನೇ ಡೋಸ್ ನೀಡಲಾಗಿದೆ. ಈ ತಿಂಗಳ ಅಂತ್ಯದೊಳಗೆ ಬಾಕಿ ಉಳಿದಿರುವ ಎಲ್ಲರಿಗೂ ಎರಡನೇ ಡೋಸ್ ಲಸಿಕೆ ನೀಡಲಾಗುವುದು ಎಂದರು.
ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ|ಜಯಾನಂದ ಮಾತನಾಡಿ, 12 ರಿಂದ 14 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ನೀಡಲು ಜಿಲ್ಲೆಯಲ್ಲಿ 64,593 ಮಕ್ಕಳನ್ನು ಗುರುತಿಸಲಾಗಿದೆ. ಇಂದು ಸಾಂಕೇತಿಕವಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಎರಡ್ಮೂರು ದಿನಗಳಲ್ಲಿ ತಾಲೂಕು, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಎಲ್ಲ ಮಕ್ಕಳಿಗೂ ಲಸಿಕೆ ಹಾಕಲಾಗುವುದು. ಜಿಲ್ಲೆಯಲ್ಲಿ 2021ರ ಜ.16ರಿಂದ ಮೊದಲ ಹಂತದ ಕೋವಿಡ್ ಲಸಿಕೆ ಕಾರ್ಯಕ್ರಮ ಆರಂಭಿಸಿ, ವಿವಿಧ ವಯೋಮಾನದವರಿಗೆ ಹಂತ ಹಂತವಾಗಿ ಲಸಿಕೆ ನೀಡಲಾಗಿದೆ. 12 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುತ್ತಿರುವುದು ಆರನೇ ಹಂತವಾಗಿದೆ. ಜಿಲ್ಲೆಯಲ್ಲಿ ಒಟ್ಟಾರೆ 12,03,091 ಜನರಿಗೆ ಮೊದಲ ಡೋಸ್, 11,39,705 ಜನರಿಗೆ ಎರಡನೇ ಡೋಸ್ ಹಾಗೂ 17,352 ಜನರಿಗೆ ಮುನ್ನೆಚ್ಚರಿಕೆ ಡೋಸ್ ನೀಡಲಾಗಿದೆ ಎಂದರು.
ಸರ್ಕಾರಿ ಪ್ರೌಢಶಾಲೆಯ ಎಂಟನೇ ತರಗತಿಯ ಹೊನ್ನಪ್ಪ ಮೇವುಂಡಿ ಹಾಗೂ ಅನುಷಾ ಬಡಿಗೇರ ವಿದ್ಯಾರ್ಥಿಗಳಿಗೆ ಕಾರ್ಬೆವ್ಯಾಕ್ಸ್ ಕೋವಿಡ್ ಲಸಿಕೆ ನೀಡುವುದರ ಮೂಲಕ ಲಸಿಕಾಕರಣಕ್ಕೆ ಚಾಲನೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಮ್ಮದ ರೋಷನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|ಎಚ್.ಎಸ್.ರಾಘವೇಂದ್ರಸ್ವಾಮಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ|ಪಿ.ಆರ್.ಹಾವನೂರ, ಡಿಡಿಪಿಐ ಬಿ.ಎಸ್.ಜಗದೀಶ್ವರ, ತಾಲೂಕು ಆರೋಗ್ಯಾಧಿಕಾರಿ ಡಾ|ಪ್ರಭಾಕರ ಕುಂದೂರ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.ಪಾಟೀಲ ಇತರರಿದ್ದರು.
64,593 ಮಕ್ಕಳಿಗೆ ಲಸಿಕೆ ಗುರಿ: ಜಿಲ್ಲೆಯ ಶಾಲೆಗಳಲ್ಲಿ ಕಲಿಯುತ್ತಿರುವ 12 ರಿಂದ 14 ವರ್ಷದ 64,593 ಮಕ್ಕಳನ್ನು ಗುರುತಿಸಿ ಸರ್ಕಾರ ಬಿಡುಗಡೆ ಮಾಡಿರುವ ಕಾರ್ಬೆವ್ಯಾಕ್ಸ್ ಲಸಿಕೆ ನೀಡಲಾಗುತ್ತಿದೆ. ತಾಲೂಕುವಾರು ಶಿಕ್ಷಣ ಇಲಾಖೆ ನೀಡಿರುವ ಮಾಹಿತಿಯಂತೆ ಬ್ಯಾಡಗಿ ತಾಲೂಕಿನಲ್ಲಿ 4550, ಹಾನಗಲ್ಲ ತಾಲೂಕಿನಲ್ಲಿ 10,500, ಹಾವೇರಿ ತಾಲೂಕಿನಲ್ಲಿ 13,100, ಹಿರೇಕೆರೂರು ತಾಲೂಕಿನಲ್ಲಿ 7,135, ರಾಣಿಬೆನ್ನೂರ ತಾಲೂಕಿನಲ್ಲಿ 13,650, ಸವಣೂರ ತಾಲೂಕಿನಲ್ಲಿ 7,000 ಹಾಗೂ ಶಿಗ್ಗಾವಿ ತಾಲೂಕಿನಲ್ಲಿ 8,658 ಮಕ್ಕಳು ಸೇರಿ 64,593 ಮಕ್ಕಳನ್ನು ಲಸಿಕೆ ನೀಡಲು ಗುರುತಿಸಲಾಗಿದೆ. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಮರಳಿ ಶಾಲೆಗೆ ಕರೆತರಲು ಹಾಗೂ ಲಸಿಕೆ ಕೊಡಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಸೂಚನೆ ನೀಡಲಾಗಿದೆ ಎಂದು ಡಿಸಿ ಸಂಜಯ ಶೆಟ್ಟೆಣ್ಣವರ ಹೇಳಿದರು.