ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಪೀಡಿತರ ಸಂಖ್ಯೆ ನಾಲ್ಕಕ್ಕೆ ಏರುತ್ತಿರುವಂತೆಯೇ ಈ ಕುರಿತು ನಾಗರಿಕರು ಆತಂಕ ಪಡಬೇಕಾಗಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಧೈರ್ಯ ತುಂಬಿದ್ದಾರೆ. ಜತೆಗೆ ಮುನ್ನೆಚ್ಚರಿಕೆ ಕ್ರಮಗಳನ್ನು ತಪ್ಪದೆ ಪಾಲಿಸುವ ಮೂಲಕ ಸೋಂಕನ್ನು ತಡೆಗಟ್ಟಲು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.
ಮಂಗಳವಾರ ಆರೋಗ್ಯ ಇಲಾಖೆ ಸಚಿವರು, ಅಧಿಕಾರಿಗಳ ಸಭೆ ನಡೆಸಿ ಬಳಿಕ ಮಾತನಾಡಿದ ಅವರು, 2 ದಿನಗಳಲ್ಲಿ ಕರ್ನಾಟಕದಲ್ಲಿ 4 ಮಂದಿಗೆ ಸೋಂಕು ತಗಲಿರುವುದು ದೃಢಪಟ್ಟಿದೆ. ರಾಜ್ಯದ ಇತರೆಡೆ ಈ ಸೋಂಕು ಹರಡದಂತೆ ತಡೆಗಟ್ಟಲು ಸರಕಾರ ಎಲ್ಲ ರೀತಿಯ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಂಡಿದೆ ಎಂದರು.
ಈ ನಡುವೆ ಆರೋಗ್ಯ ಸಚಿವ ಶ್ರೀರಾಮುಲು ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ| ಕೆ. ಸುಧಾಕರ್ ಅವರು ಜಂಟಿ ಪತ್ರಿಕಾಗೋಷ್ಠಿ ನಡೆಸಿ, ನಾಲ್ಕು ಮಂದಿ ಸೋಂಕಿತರಿಗೂ ರಾಜೀವ್ ಗಾಂಧಿ ಎದೆ ರೋಗಗಳ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲರೂ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಕೊರೊನಾ ಸೋಂಕುಪೀಡಿತ ಟೆಕ್ಕಿಯ ಪತ್ನಿ, ಪುತ್ರಿ ಮತ್ತು ಮತ್ತೋರ್ವ ಟೆಕ್ಕಿಯಲ್ಲಿ ಮಂಗಳವಾರ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ನಾಲ್ಕು ಮಂದಿಗೆ ಕೊರೊನಾ ಸೋಂಕು ತಗುಲಿದಂತಾಗಿದೆ ಎಂದಿದ್ದಾರೆ.
ಶಬರಿಮಲೆಗೆ ಬರಬೇಡಿ
ಮಾ.13ರಂದು ತಿಂಗಳ ಪೂಜೆಗಾಗಿ ತೆರೆಯಲಿರುವ ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಭಕ್ತರು ಆಗಮಿಸದೇ ಇರುವುದು ಒಳ್ಳೆಯದು ಎಂದು ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಅಧ್ಯಕ್ಷ ಎನ್. ವಾಸು ಮನವಿ ಮಾಡಿದ್ದಾರೆ.