ಹಾಸನ: ಇನ್ನು ಮೂರು ದಿನಗಳಲ್ಲಿ ಇಲಾಖೆ ಸಿಬ್ಬಂದಿಗಳಿಗೆ ಕೊರೊನಾ ಲಸಿಕೆಯನ್ನು ನೀಡಿ ನಿಗದಿತ ಗುರಿ ಸಾಧಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ಗುರುವಾರ ವಿಡಿಯೋ ಸಂವಾದ ನಡೆಸಿದ ಅವರು, ಆರೋಗ್ಯ ಇಲಾಖೆಯ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಲಸಿಕೆ ಹಾಕುವ ಗುರಿ ಸಾಧಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಲಸಿಕೆಯನ್ನು ಹಾಕಿಸಿಕೊಳ್ಳಲು ಹಿಂಜರಿಯುವ ಆರೋಗ್ಯ ಸಿಬ್ಬಂದಿ ಮನವೊಲಿಸಬೇಕು. ವೈದ್ಯಕೀಯ ವಿದ್ಯಾರ್ಥಿಗಳು, ನರ್ಸಿಂಗ್ ವಿದ್ಯಾರ್ಥಿಗಳು, ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳು ಹಾಗೂ ಆಶಾ ಕಾರ್ಯಕರ್ತರಿಗೆ ಆದ್ಯತೆ ನೀಡಿ ಬೇಗ ಲಸಿಕೆ ಹಾಕಬೇಕು ಎಂದು ತಿಳಿಸಿದರು.
ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಾವೇದ್ ಅಖಾ¤ರ್ ಪಂಕಜ್ ಕುಮಾರ್ ಪಾಂಡೆ ಮಾತನಾಡಿ, ಎಲ್ಲ ಅಂಗನವಾಡಿ ಕಾರ್ಯ ಕರ್ತೆಯರು ಮತ್ತು ಸಹಾಯಕರುಗಳಿಗೆ ಕಡ್ಡಾಯವಾಗಿ ಲಸಿಕೆಯನ್ನು ಹಾಕಿ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳೆಲ್ಲರೂ ಲಸಿಕೆಯ ಸದುಪಯೋಗ ಪಡೆದುಕೊಳ್ಳುವಂತೆ ನೋಡಿಕೊಳ್ಳಿ ಎಂದು ಸೂಚಿಸಿದರು.
ರಾಷ್ಟ್ರೀಯ ಆರೋಗ್ಯ ಮಿಷನ್ ಉಪನಿರ್ದೇಶಕ ಅರುಂಧತಿ ಮಾತನಾಡಿ, ಆರೋಗ್ಯ ಸಿಬ್ಬಂದಿಗಳೆಲ್ಲರಿಗೂ ಲಸಿಕೆಯನ್ನು ಹಾಕಿ ಹಾಗೂ ಅಂಗನವಾಡಿ ಕಾರ್ಯಕರ್ತರು ಲಸಿಕೆ ಪಡೆಯಲು ಹಿಂಜರಿಯುತ್ತಿದ್ದು ಅವರನ್ನು ಗುರುತಿಸಿ ಲಸಿಕೆ ಹಾಕಿಸಿಕೊಳ್ಳುವಂತೆ ಮನವೊಲಿಸಿ ಎಂದು ಹೇಳಿದರು.
ಇದನ್ನೂ ಓದಿ :ಬಾಲ್ಯ ವಿವಾಹ ತಡೆ ಪ್ರಕರಣ ವರದಿ ಸಲ್ಲಿಸಿ; ಜಿಲ್ಲಾಧಿಕಾರಿ
ಜಿಲ್ಲಾಧಿಕಾರಿ ಆರ್.ಗಿರೀಶ್ ಮಾತನಾಡಿ, ಜಿಲ್ಲೆಯಲ್ಲಿ ಇದುವರೆಗೆ ಶೇ.50.93 ಲಸಿಕೆಯ ಗುರಿ ಸಾಧಿಸಲಾಗಿದೆ. ಖಾಸಗಿ ವೈದ್ಯಕೀಯ ಸಂಸ್ಥೆಗಳಲ್ಲಿ ಗುರುವಾರ 2000 ಮಂದಿಗೆ ಹಾಗೂ 2000 ಮಂದಿಗೆ ಲಸಿಕೆಯನ್ನು ಹಾಕಲಾಗುತ್ತಿದೆ. ಆದಷ್ಟು ಬೇಗ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೂ ಸಂಪೂರ್ಣ ಲಸಿಕೆ ನೀಡಲಾಗುವುದು ಎಂದು ಮಾಹಿತಿ ಒದಗಿಸಿದರು.
ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ. ಸತೀಶ್, ಆರ್‌ಸಿಎಚ್ ಅಧಿಕಾರಿ ಡಾ. ಕಾಂತರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ದಿಲೀಪ್ ಮತ್ತಿತರರು ಹಾಜರಿದ್ದರು.