ಬೆಂಗಳೂರು: ರಾಜ್ಯದಲ್ಲಿ ಮತ್ತೆರಡು ಕೋವಿಡ್19 ಪ್ರಕರಣಗಳು ದೃಢಪಟ್ಟಿದ್ದು, ಒಟ್ಟಾರೆಯಾಗಿ ಸೋಂಕಿತರ ಸಂಖ್ಯೆ ಹತ್ತಕ್ಕೆರಿದೆ. ಲಂಡನ್ ಪ್ರವಾಸದಿಂದ ಬೆಂಗಳೂರಿಗೆ ಹಿಂದಿರುಗಿದ ವ್ಯಕ್ತಿಯೊಬ್ಬರಿಗೆ ಹಾಗೂ ಗುಲ್ಬರ್ಗದಲ್ಲಿ 60 ವರ್ಷದ ವ್ಯಕ್ತಿಯೊಬ್ಬರಿಗೆ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ ಶ್ರೀರಾಮುಲು ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.
ಗುಲ್ಬರ್ಗಾದಲ್ಲಿದ್ದ ವ್ಯಕ್ತಿಯು ಈ ಮೊದಲೇ, ಕಲಬುರುಗಿಯಲ್ಲಿ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಸಂಪರ್ಕದಲ್ಲಿದ್ದ ಎಂದು ಅವರು ತಮ್ಮ ವರದಿಯಲ್ಲಿ ತಿಳಿಸಿದ್ದಾರೆ. ಇವರಿಬ್ಬರು ಈಗಾಗಲೇ ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದರಿಂದ, ಶೀಘ್ರ ಗುಣಮುಖರಾಗಲಿರುವ ವಿಶ್ವಾಸ ಹೊಂದಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
ಸೋಮವಾರ ಸಂಜೆ ವೇಳೆಗೆ ಬೆಂಗಳೂರು ಮೂಲದ 32 ವರ್ಷದ ಮತ್ತೊಬ್ಬ ಟೆಕ್ಕಿಗೆ ಕೊರೋನಾ ಸೋಂಕು ತಗುಲಿರುವುದು ದೃಢಫಟ್ತಿತ್ತು. ಬಳಿಕ ಸೋಮವಾರ ತಡರಾತ್ರಿ ಮತ್ತಿಬ್ಬರ ಕೊರೋನಾ ಸೋಂಕು ಪರೀಕ್ಷಾ ವರದಿ ಹೊರಬಿದ್ದಿದ್ದು, ಇಬ್ಬರಿಗೂ ಸೋಂಕು ತಗುಲಿರುವುದು ಸಾಬೀತಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕೂಡ ಟ್ವೀಟ್ ಮಾಡಿದ್ದಾರೆ.
ಕೊರೋನಾ ವೈರಸ್ ತಡೆಗೆ ಸಾಕಷ್ಟು ಶ್ರಮಿಸುತ್ತಿದ್ದೇವೆ. ಬೆಂಗಳೂರು, ಹಾಸನ, ಮಂಗಳೂರು, ಹುಬ್ಬಳ್ಳಿ, ಕಲಬುರಗಿ ಸೇರಿದಂತೆ ಹಲವು ಕಡೆ ಕೊರೋನಾ ವೈರಸ್ ವಾರ್ ರೂಮ್ ಮತ್ತು ತಪಾಸಣೆ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ರಾಜ್ಯಾದ್ಯಂತ ಹೆಲ್ಪ್ ಡೆಸ್ಕ್ ಆರಂಭಿಸಲು ತೀರ್ಮಾನಿಸಲಾಗಿದೆ. ಇದಕ್ಕಾಗಿಯೇ ಪ್ರತಿ ಜಿಲ್ಲೆಯಲ್ಲಿ 150-250 ಪ್ರತ್ಯೇಕ ಬೆಡ್ ವ್ಯವಸ್ಥೆ ಮಾಡಲಾಗುವುದು. ಇದನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವೀಕ್ಷಿಸಲಾಗುವುದು ಎಂದರು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ಧಾರೆ.