ಬೆಂಗಳೂರು: ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಡಿ.5ರಂದು ನಡೆದ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಸೋಮವಾರ ನಡೆಯಲಿದೆ. ಎಲ್ಲ 15 ಕ್ಷೇತ್ರಗಳಲ್ಲಿ ಈಗಾಗಲೇ ನಿಗದಿಪಡಿಸಿರುವ ಮತ ಎಣಿಕೆ ಕೇಂದ್ರಗಳಲ್ಲಿ ಬೆಳಗ್ಗೆ 8ರಿಂದ ಮತ ಎಣಿಕೆ ಆರಂಭವಾಗಲಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಂಶ ನಿಚ್ಚಳವಾಗಲಿದೆ. ಮತ ಎಣಿಕೆ ಕಾರ್ಯಕ್ಕೆ ಹದಿನೈದು ಕ್ಷೇತ್ರಗಳಿಗೆ ತಲಾ ಒಬ್ಬರಂತೆ ಚುನಾವಣಾಧಿಕಾರಿಗಳನ್ನು ನೇಮಿಸಲಾಗಿದೆ.
ಮತ ಎಣಿಕೆಗೆ 213 ಟೇಬಲ್‌ಗಳ ವ್ಯವಸ್ಥೆ ಮಾಡಲಾಗಿದ್ದು, 20 ಸುತ್ತುಗಳಲ್ಲಿ ಎಣಿಕೆ ಕಾರ್ಯ ನಡೆಯಲಿದೆ. ತಲಾ 240 ಮೇಲ್ವಿಚಾರಕರು, ಎಣಿಕೆ ಸಹಾಯಕರು, ಮೈಕ್ರೋ ಅಬ್ಸರ್‌ವರ್‌ಗಳನ್ನು ನಿಯೋಜಿಸಲಾಗಿದೆ. ಮತ ಎಣಿಕೆ ಕೇಂದ್ರಗಳ ಸುತ್ತ ಜಿಲ್ಲಾಡಳಿತ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಂಡಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.
ಮತ ಎಣಿಕೆ ಕೇಂದ್ರಗಳಲ್ಲಿ ಬಿಗಿ ಭದ್ರತೆ: ಮತ ಎಣಿಕೆ ಕೇಂದ್ರಗಳಲ್ಲಿ ಪೊಲೀಸ್ ಇಲಾಖೆ ಬಂದೋಬಸ್ತ್ ಕೈಗೊಂಡಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಿದೆ. ಬೆಂಗಳೂರು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ನಡೆಯಲಿರುವ ಮತ ಎಣಿಕೆ ಕೇಂದ್ರಗಳಲ್ಲಿ ಆಯಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಂದೋಬಸ್ತ್, ಭದ್ರತೆ ನೇತೃತ್ವ ವಹಿಸಿಕೊಂಡಿದ್ದಾರೆ. ಜಿಲ್ಲೆಗಳಲ್ಲಿ ಜಿಲ್ಲಾ ಸಶಸ್ತ್ರ ಪೊಲೀಸ್ ಪಡೆ, ಕೆಎಸ್‌ಆರ್‌ಪಿ ತುಕಡಿಗಳು ಭದ್ರತೆಗೆ ನಿಯೋಜನೆಗೊಂಡಿವೆ. ಎಸ್ಪಿ, ಡಿವೈಎಸ್‌ಪಿ, ಇನ್ಸ್‌ಪೆಕ್ಟರ್‌ಗಳು ಎಲ್ಲ ಕೇಂದ್ರಗಳಿಗೆ ಭೇಟಿ ನೀಡಲಿದ್ದಾರೆ.
ಜತೆಗೆ, ಇನ್ಸ್‌ಪೆಕ್ಟರ್ ಹಾಗೂ ಸಬ್ ಇನ್ಸ್‌ಪೆಕ್ಟರ್‌ಗಳು ಕೇಂದ್ರಗಳಲ್ಲಿ ಭದ್ರತೆ ನೋಡಿಕೊಂಡಿರಲಿದ್ದಾರೆ. ಮತ ಎಣಿಕೆ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರಲಿದ್ದು, ಮದ್ಯ ಮಾರಾಟ ನಿಷೇಧಿಸಲಾಗಿದೆ. ಇದಲ್ಲದೆ ವಿಧಾನಸಭಾ ಕ್ಷೇತ್ರಾದ್ಯಂತ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಗಸ್ತು ತಿರುಗುತ್ತಿರುತ್ತಾರೆ. ಸೂಕ್ಷ್ಮ ಮತಗಟ್ಟೆಗಳಲ್ಲಿ ಹೆಚ್ಚಿನ ನಿಗಾ ಇಡಲಾಗಿದೆ ಎಂದು ಪೊಲೀಸ್ ಪ್ರಧಾನ ಕಚೇರಿ ಮೂಲಗಳು ತಿಳಿಸಿವೆ.