ಬೆಂಗಳೂರು: ದ್ವಿತೀಯ ಪಿಯುಸಿ ಪ್ರಶ್ನೆಪತ್ರಿಕೆ ಬಹಿರಂಗಗೊಳಿಸಿದ ಪ್ರಕರಣದ ಆರೋಪಿ ಕುಮಾರಸ್ವಾಮಿ ಜಾಮೀನು ಕೋರಿ ಎರಡನೇ ಬಾರಿ ಹೈಕೋರ್ಟ್ ಮೊರೆಹೋಗಿದ್ದಾನೆ.
ಪ್ರಶ್ನೆ ಪತ್ರಿಕೆ ಬಹಿರಂಗ ಪ್ರಕರಣದ ತನಿಖೆ ಪೂರ್ಣಗೊಳಿಸಿ ಪೊಲೀಸರು ಅಧೀನ ನ್ಯಾಯಾಲಯಕ್ಕೆ ಸಲ್ಲಿಸಿರುವ ಚಾರ್ಜ್‌ಶೀಟ್‌ನಲ್ಲಿ, ತನ್ನ ವಿರುದ್ಧ ಆರೋಪಗಳನ್ನು ದೃಢೀಕರಿಸುವ ಸಾûಾÂಧಾರಗಳು ಲಭ್ಯವಾಗಿಲ್ಲ.
ಈ ಪ್ರಕರಣದಲ್ಲಿ ಒಂದು ವರ್ಷ ಜೈಲು ಶಿಕ್ಷೆ ಅನುಭವಿಸಿದ್ದೇನೆ. ಹೀಗಾಗಿ ಜಾಮೀನು ಮಂಜೂರು ಮಾಡಬೇಕೆಂದು ಕೋರಿ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಮಂಗಳವಾರ ನ್ಯಾಯಮೂರ್ತಿ ರತ್ನಕಲಾ ಅವರಿದ್ದ ಏಕಸದಸ್ಯ ಪೀಠ ನಡೆಸಿತು.
ಸರ್ಕಾರದ ಪರ ವಕೀಲರು ವಾದ ಮಂಡಿಸಿ, ಪ್ರಶ್ನೆಪತ್ರಿಕೆ ಬಹಿರಂಗೊಳಿಸಿರುವ ಗಂಭೀರ ಆರೋಪ ಪ್ರಕರಣದ ಆರೋಪಿಯಾಗಿರುವ ಕುಮಾರಸ್ವಾಮಿಗೆ ಜಾಮೀನು ನೀಡಲು ಹೈಕೋರ್ಟ್ ಈ ಹಿಂದೆ ನಿರಾಕರಿಸಿತ್ತು. ಅಲ್ಲದೆ ಆರೋಪಿ ವಿರುದ್ಧ ಕೊಕಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಇಡೀ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಪೊಲೀಸರು, ಆರೋಪಿ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದ್ದು, ಸದ್ಯದಲ್ಲಿಯೇ ಅಧೀನ ನ್ಯಾಯಾಲಯ ಪ್ರಕರಣದ ವಿಚಾರಣೆ ನಡೆಸಲಿದೆ. ಈ ಹಂತದಲ್ಲಿ ಆರೋಪಿಗೆ ಜಾಮೀನು ಮಂಜೂರಾದರೆ ವಿಚಾರಣೆಗೆ ಅಡ್ಡಿಯಾಗುವ ಸಾಧ್ಯತೆಯಿದೆ. ಹೀಗಾಗಿ ಜಾಮೀನು ಮಂಜೂರು ಮಾಡಬಾರದು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.
ಸರ್ಕಾರದ ಪರ ವಕೀಲರು ಹಾಗೂ ಅರ್ಜಿದಾರರ ಪರ ವಕೀಲರ ವಾದ ಪ್ರತಿವಾದ ಆಲಿಸಿದ ನ್ಯಾಯಪೀಠ, ಆರೋಪಿ ಸಲ್ಲಿಸಿರುವ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿ ಎರಡು ವಾರಗಳ ಕಾಲ ವಿಚಾರಣೆ ಮುಂದೂಡಿತು.