ಧಾರವಾಡ: ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಸಿಬಿಐನಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಸುಳ್ಳು ಪತ್ತೆ ಪರೀಕ್ಷೆ ನಡೆಸುವ ಸಿಬಿಐ ಮನವಿಯನ್ನು ನ್ಯಾಯಾಲಯ ನಿರಾಕರಿಸಿದೆ.
ವೀಡಿಯೋ ಕಾನ್ಫರನ್ಸ್ ಮೂಲಕ ಧಾರವಾಡದ 2ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ಎದುರು ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿ ಅವರನ್ನು ಇಂದು ಹಾಜರುಪಡಿಸಿದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು 14 ದಿನಗಳ ಕಾಲ ಅಂದರೆ ನ.23 ರವರೆಗೆ ವಿನಯ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.
ಇದನ್ನೂ ಓದಿ:ಯೋಗೀಶಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ 14 ದಿನ ನ್ಯಾಯಾಂಗ ಬಂಧನ
ಮೂರು ದಿನಗಳ ಸಿಬಿಐ ಕಸ್ಟಡಿ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಇಂದು ಧಾರವಾಡದ 2ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ಎದುರು ವಿನಯ್ ಅವರನ್ನು ಹಾಜರುಪಡಿಸಬೇಕಾಗಿತ್ತು.ಆದರೆ ಕೋರ್ಟ್ ಬಳಿ ಅಪಾರ ಸಂಖ್ಯೆಯಲ್ಲಿ ವಿನಯ್ ಅವರ ಬೆಂಬಲಿಗರು ಅಪಾರ ಪ್ರಮಾಣದಲ್ಲಿ ಸೇರಿದ್ದರಿಂದಾಗಿ ಕೊನೆ ಕ್ಷಣದಲ್ಲಿ ಸಿಬಿಐ ಅಧಿಕಾರಿಗಳು ವೀಡಿಯೋ ಕಾನ್ಫರನ್ಸ್ ಮೂಲಕ ವಿನಯ್ ಅವರನ್ನು ನ್ಯಾಯಾಲಯದ ಎದುರು ಹಾಜರುಪಡಿಸಿದರು.
ಈ ವೇಳೆ ವಿನಯ್ ಪಾಲಿಗ್ರಾಪಿ ಅಂದರೆ ಸುಳ್ಳು ಪತ್ತೆ ಪರೀಕ್ಷೆ ಗೆ ಅವಕಾಶ ನೀಡುವಂತೆ ಕೋರಿದರು. ಆದರೆ ಇದಕ್ಕೆ ನ್ಯಾಯಾಲಯ ನಿರಾಕರಿಸಿ 14 ದಿನ ನ್ಯಾಯಾಂಗ ಬಂಧನಕ್ಕೆ ಆದೇಶಿಸಿತು.
ಹೆಚ್ಚಿನ ವಿಚಾರಣೆಗಾಗಿ ಸಿಬಿಐ ವಿನಯ್ ಅವರನ್ನು ತಮ್ಮ ಕಸ್ಟಡಿಗೆ ನೀಡುವಂತೆ ಸಿಬಿಐ ಅರ್ಜಿ ಸಲ್ಲಿಸಿರಲಿಲ್ಲ. ವಿನಯ್ ಪರ ವಕೀಲರೂ ಜಾಮೀನು ಕೋರಿ ಅರ್ಜಿಯನ್ನೂ ದಾಖಲಿಸಿರಲಿಲ್ಲ. ಹೀಗಾಗಿ ನ್ಯಾಯಾಲಯ ನ.23ರ ವರೆಗೂ ವಿನಯ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿದೆ.