ನವದೆಹಲಿ: ಕೋವಿಡ್ 19 ವೈರಸ್ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್ ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ಇಂಡಿಗೋ ವಿಮಾನ ಯಾನ ಸಂಸ್ಥೆ ಏಪ್ರಿಲ್ 30ರವರೆಗೆ ಅಂತಾರಾಷ್ಟ್ರೀಯ ವಿಮಾನ ಸಂಚಾರವನ್ನು ರದ್ದುಗೊಳಿಸಿರುವುದಾಗಿ ತಿಳಿಸಿದೆ.
ಏರ್ ಇಂಡಿಯಾ ಈಗಾಗಲೇ ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನ ಸಂಚಾರವನ್ನು ಏಪ್ರಿಲ್ 30ರವರೆಗೆ ರದ್ದುಗೊಳಿಸಿರುವುದಾಗಿ ವರದಿ ವಿವರಿಸಿದೆ.
ನಮ್ಮ ಅಂತಾರಾಷ್ಟ್ರೀಯ ವಿಮಾನ ಸಂಚಾರವನ್ನು ತಾತ್ಕಾಲಿಕವಾಗಿ ಏಪ್ರಿಲ್ 30ರವರೆಗೆ ರದ್ದುಪಡಿಸಿದ್ದೇವೆ. ನಿಮ್ಮ ಹಣ ಸುರಕ್ಷಿತವಾಗಿರುತ್ತದೆ. ಅಲ್ಲದೇ ನೀವು ಈಗಾಗಲೇ ಕಾಯ್ದಿರಿಸಿರುವ ಟಿಕೆಟ್ ಅವಧಿ ಒಂದು ವರ್ಷದವರೆಗೂ ಇರಲಿದೆ ಎಂದು ಇಂಡಿಗೋ ಟ್ವೀಟ್ ಮೂಲಕ ತಿಳಿಸಿದೆ.
ಕೋವಿಡ್ 19 ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಿಸಿದ್ದರು. ಇದು ಬಹುತೇಕ ಏಪ್ರಿಲ್ 14ರಂದು ಅಂತ್ಯಗೊಳ್ಳಲಿದೆ. ಈ ಅವಧಿಯಲ್ಲಿ ಎಲ್ಲಾ ದೇಶೀಯ ಮತ್ತು ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನ ಸಂಚಾರವನ್ನು ರದ್ದುಗೊಳಿಸಲಾಗಿತ್ತು.
ಮಾರಣಾಂತಿಕ ಕೋವಿಡ್ 19 ಪೂರ್ಣ ಪ್ರಮಾಣದಲ್ಲಿ ನಿಯಂತ್ರಣಕ್ಕೆ ಬಂದ ನಂತರ ವಿಮಾನ ಸಂಚಾರ ಪುನರಾರಂಭವಾಗಲಿದೆ ಎಂದು ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಬುಧವಾರ ತಿಳಿಸಿದ್ದಾರೆ.