ಉಡುಪಿ: ಕರ್ನಾಟಕದ ಕರಾವಳಿ ಜಿಲ್ಲೆ ಉಡುಪಿಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಸಾವಿರ ದಾಟಿದೆ. ಈ ಮೂಲಕ ರಾಜ್ಯದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆಯಲ್ಲಿ ಸಾವಿರದ ಗಡಿ ದಾಟಿದ ಮೊದಲ ಜಿಲ್ಲೆಯಾಗಿದೆ.
ಇಂದು ಜಿಲ್ಲೆಯಲ್ಲಿ 14 ಜನರಿಗೆ ಕೋವಿಡ್ ಸೋಂಕು ತಾಗಿರುವುದು ದೃಢವಾಗಿದೆ. ಇದರೊಂದಿಗೆ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 1005ಕ್ಕೆ ಎರಿಕೆಯಾಗಿದೆ.
ಜಿಲ್ಲೆಯಲ್ಲಿ ಒಟ್ಟು 1005 ಸೋಂಕಿತರ ಪೈಕಿ 720 ಮಂದಿ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದು, ಓರ್ವ ಸೋಂಕಿತ ಸಾವನ್ನಪ್ಪಿದ್ದಾನೆ. ಸದ್ಯ ಜಿಲ್ಲೆಯಲ್ಲಿ 285 ಸಕ್ರಿಯ ಸೋಂಕು ಪ್ರಕರಣಗಳಿವೆ.
ಜಿಲ್ಲೆಯ ಇಂದಿನ ಎಲ್ಲಾ 14 ಮಂದಿ ಸೋಂಕಿತರು ಮಹಾರಾಷ್ಟ್ರದಿಂದ ಬಂದವರೇ ಆಗಿದ್ದಾರೆ. ಆರು ವರ್ಷದ ಹೆಣ್ಣು ಮಗುವಿಗೆ ಕೂಡಾ ಸೋಂಕು ದೃಢವಾಗಿದೆ.
ಜಿಲ್ಲೆಯಲ್ಲಿ ಇದುವರೆಗೆ 12,830 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ಇದರಲ್ಲಿ 11,734 ಜನರ ವರದಿ ನೆಗೆಟಿವ್ ಬಂದಿದ್ದು, 1006 ಜನರಿಗೆ ಸೋಂಕು ಪಾಸಿಟಿವ್ ಕಂಡು ಬಂದಿದೆ. ( ಇದರಲ್ಲಿ ಒಂದು ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾಯಿಸಲಾಗಿದೆ) ಇನ್ನೂ 90 ಜನರ ವರದಿ ಬರಲು ಬಾಕಿಯಿದೆ ಎನ್ನುತ್ತಿದೆ ಜಿಲ್ಲಾಡಳಿತ ನೀಡಿರುವ ಮಾಹಿತಿ.
ರಾಜ್ಯದಲ್ಲಿಂದು ಹೊಸ 308 ಸೋಂಕು ಪ್ರಕರಣಗಳು ದೃಢವಾಗಿದ್ದು, ಕೋವಿಡ್-19 ಸೋಂಕಿತರ ಸಂಖ್ಯೆ 6824ಕ್ಕೆ ಏರಿಕೆಯಾಗಿದೆ. ಇಂದು ಮಂದಿ 209 ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ3648 ಒಟ್ಟು ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮರಳಿ ಮನೆಗೆ ತೆರಳಿದ್ದಾರೆ. ಇಂದು ಮೂರು ಮಂದಿ ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದು, ರಾಜ್ಯದಲ್ಲಿ ಸೋಂಕಿನಿಂದ ಮರಣ ಹೊಂದಿದವರ ಸಂಖ್ಯೆ 81ಕ್ಕೆ ಏರಿಕೆಯಾಗಿದೆ. ಮೂವರು ಕೋವಿಡ್ ಅಲ್ಲದ ಕಾರಣದಿಂದ ಮರಣ ಹೊಂದಿದ್ದಾರೆ.