Advertisement

ಕೋವಿಡ್ ಸಂಪೂರ್ಣ ನಿಯಂತ್ರಣಕ್ಕೆ ಕೈಜೋಡಿಸಿ

07:05 PM Nov 18, 2020 | Suhan S |

ಶಿವಮೊಗ್ಗ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ನಿರಂತರವಾಗಿ ಕಡಿಮೆಯಾಗುತ್ತಿದ್ದರೂ, ಜನ ಮೈಮರೆಯದೆ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವ ಮೂಲಕ ಸೋಂಕನ್ನು ಸಂಪೂರ್ಣವಾಗಿ ನಿಯಂತ್ರಿಸಲು ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್‌ ತಿಳಿಸಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಂಗಳವಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಕೊರೊನಾ ಕುರಿತು ಜನಜಾಗೃತಿ ವಾಹನಕ್ಕೆ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿ ಅವರು ಮಾತನಾಡಿದರು.

ಕೋವಿಡ್ ಸಾಂಕ್ರಾಮಿಕ ರೋಗಕ್ಕೆ ಲಸಿಕೆ ಕಂಡು ಹಿಡಿಯುವ ತನಕ ಮುಂಜಾಗರೂಕತೆಯೇ ಇದಕ್ಕೆ ಮದ್ದಾಗಿದೆ. 60 ವರ್ಷಕ್ಕಿಂತ ಮೇಲ್ಪಟ್ಟವರು ಅಗತ್ಯ ಸಂದರ್ಭಗಳಲ್ಲಿ ಮಾತ್ರ ಮನೆಯಿಂದ ಹೊರಗೆ ಬರಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಜನಜಂಗುಳಿಗೆ ಅವಕಾಶ ನೀಡದೆ ಪ್ರತಿಯೊಬ್ಬರೂ ಕನಿಷ್ಟ ಅಂತರ ಕಾಯ್ದುಕೊಳ್ಳಬೇಕು. ಸ್ಯಾನಿಟೈಸರ್‌ ಸಮರ್ಪಕವಾದ ಬಳಕೆ ಮತ್ತು ಕೈಗಳನ್ನು ಆಗಾಗ್ಗೆ ಸೋಪಿನಿಂದತೊಳೆಯುವ ಮೂಲಕ ಕೊರೊನಾ ಬೇರೆಯವರಿಗೆ ಹರಡುವುದನ್ನು ತಪ್ಪಿಸಬಹುದಾಗಿದೆ ಎಂದು ಅವರು ಹೇಳಿದರು.

ಜಿಲ್ಲೆಯಲ್ಲಿ ಸಾರ್ವಜನಿಕರ ಸಹಕಾರದಿಂದಾಗಿ ಕೋವಿಡ್ ನಿಯಂತ್ರಣಕ್ಕೆ ಬಂದಿದೆ. ಪ್ರಸ್ತುತ 169ಮಂದಿ ಮಾತ್ರ ಸೋಂಕಿಗೆ ಒಳಗಾಗಿ ವಿವಿಧ ಆಸ್ಪತ್ರೆ ಹಾಗೂ ಮನೆಗಳಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದರು. ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕಾಧಿಕಾರಿ ಶಫಿಸಾದುದ್ದೀನ್‌ ಮಾತನಾಡಿ, ವಿಶಾಲವಾದ ಎಲ್‌ಇಡಿ ಪರದೆ ಹೊಂದಿರುವ ಎರಡು ವಾಹನಗಳ ಮೂಲಕ ಜಿಲ್ಲೆಯ ಆಯ್ದ 180 ಗ್ರಾಮಗಳಲ್ಲಿ ಕೊರೊನಾ ಕುರಿತು ಜನಜಾಗೃತಿ ಮೂಡಿಸುವ ಕಾರ್ಯ ಕೈಗೊಳ್ಳಲಾಗಿದೆ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಜೇಶ ಸುರಗಿಹಳ್ಳಿ, ಆಶಾ ಕಾರ್ಯಕರ್ತೆಯರು ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next