ಚಿಕ್ಕಮಗಳೂರು: ಜಿಲ್ಲೆಯಲ್ಲಿ ನಾಲ್ಕು ಕೋವಿಡ್ ಸೋಂಕು ಪಾಸಿಟಿವ್ ಪ್ರಕರಣ ಶುಕ್ರವಾರ ದೃಢಪಟ್ಟಿದ್ದು, ಸೋಂಕಿತರನ್ನು ನಗರದ ಕೋವಿಡ್-19 ಚಿಕಿತ್ಸಾ ಕೇಂದ್ರದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
43ವರ್ಷದ ವ್ಯಕ್ತಿಯಲ್ಲಿ ಸೋಂಕು ಪತ್ತೆಯಾಗಿದ್ದು, ಈತ ಇತ್ತೀಚೆಗೆ ಬೆಂಗಳೂರಿನಿಂದ ಅಜ್ಜಂಪುರ ತಾಲೂಕಿನ ಹಿರೇಕಾನಂಗಳ ಗ್ರಾಮಕ್ಕೆ ಆಗಮಿಸಿದ್ದರು. ವ್ಯಕ್ತಿಯಲ್ಲಿ ಸೋಂಕಿನ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಗಂಟಲು ದ್ರವ ಹಾಗೂ ರಕ್ತದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿದ್ದು, ಪ್ರಯೋಗಾಲಯದ ವರದಿಯಲ್ಲಿ ಕೋವಿಡ್ ಸೋಂಕಿರುವುದು ದೃಢಪಟ್ಟಿದೆ.
51ವರ್ಷದ ವ್ಯಕ್ತಿ, 20ವರ್ಷದ ಇಬ್ಬರು ಯುವತಿಯರಲ್ಲಿ ಸೋಂಕು ಪತ್ತೆಯಾಗಿದ್ದು, ಮೂವರೂ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಇವರು ಇತ್ತೀಚೆಗೆ ಮಹಾರಾಷ್ಟ್ರದಿಂದ ಶೃಂಗೇರಿ ತಾಲೂಕಿಗೆ ಆಗಮಿಸಿದ್ದರು. ಪಟ್ಟಣದ ಸಚ್ಚಿದಾನಂದ ಬಾಲಕಿಯರ ವಸತಿ ನಿಲಯದಲ್ಲಿ ಮೂವರನ್ನೂ ಕ್ವಾರಂಟೈನ್ ಮಾಡಲಾಗಿತ್ತು. ಗುರುವಾರ ಈ ಮೂವರ ಗಂಟಲು ದ್ರವ, ರಕ್ತದ ಮಾದರಿಯನ್ನು ಶಿವಮೊಗ್ಗದ ಪ್ರಯೋಗಾಲಯಕ್ಕೆ ಕಳುಹಿಸಿದ್ದು, ಶುಕ್ರವಾರ ಮೂವರಲ್ಲೂ ಪಾಸಿಟಿವ್ ಇರುವುದು ಪ್ರಯೋಗಾಲಯದ ವರದಿಯಿಂದ ದೃಢಪಟ್ಟಿದೆ.
ನಾಲ್ವರೂ ಸೋಂಕಿತರನ್ನು ನಗರದ ಕೋವಿಡ್ ಚಿಕಿತ್ಸಾ ಘಟಕಕ್ಕೆ ದಾಖಲಿಸಲಾಗಿದ್ದು, ಸೋಂಕಿತರ ಪ್ರಾಥಮಿಕ, ದ್ವಿತೀಯ ಸಂಪರ್ಕಗಳ ಪತ್ತೆಗೆ ಜಿಲ್ಲಾಡಳಿತ ಕ್ರಮ ವಹಿಸಿದೆ. ಶುಕ್ರವಾರ ಪತ್ತೆಯಾದ ನಾಲ್ಕು ಪ್ರಕರಣಗಳು ಸೇರಿ ಜಿಲ್ಲೆಯಲ್ಲಿ ಸದ್ಯ ಸಕ್ರೀಯ ಪ್ರಕರಣಗಳ ಸಂಖ್ಯೆ 24ಕ್ಕೆ ಏರಿಕೆಯಾಗಿದೆ.