Advertisement

ಕೋವಿಡ್‌ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳಿ : ದಕ್ಷಿಣಕನ್ನಡ ಜಿಲ್ಲಾಧಿಕಾರಿಗೆ ಸಿಎಂ ಸೂಚನೆ

04:31 PM Aug 01, 2021 | Team Udayavani |

ಮಂಗಳೂರು: ಕೊರೋನಾ ನಿರ್ವಹಣೆ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದ.ಕ. ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅವರಿಗೆ ಸೂಚನೆ ನೀಡಿದರು.

Advertisement

ಕೋವಿಡ್‌-19 ನಿರ್ವಹಣೆ ಗೆ ಸಂಬಂಧಿಸಿದಂತೆ ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ಮಾಹಿತಿ ಪಡೆದ ಮುಖ್ಯಮಂತ್ರಿಗಳು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ನಿರ್ವಹಣೆ ಸವಾಲಿನ ಕೆಲಸವಾಗಿದೆ. ನೆರೆಯ ಕೇರಳದಲ್ಲಿ ಇದೀಗ ಕೋವಿಡ್‌ ಸೋಂಕಿನ ಪ್ರಕರಣಗಳೂ ವ್ಯಾಪಕವಾಗಿದ್ದು, ಅಲ್ಲಿಂದ ಪ್ರತಿನಿತ್ಯ ಹಲವು ಕಾರ್ಯಗಳಿಗೆ ರಸ್ತೆಯ ಮೂಲಕ ಜಿಲ್ಲೆಗೆ ಬರುವವರ ಸಂಖ್ಯೆ ಹೆಚ್ಚು. ಸೋಂಕು ನಿಯಂತ್ರಿಸಲು ಮುಂಬರುವ 15 ದಿನಗಳ ಕಾಲ ಕಠಿಣಾತಿ ಕಠಿಣ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ ಎಂದು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲೆಯ ಗಡಿ ಭಾಗಗಳಲ್ಲಿ ತೆರೆಯಾಗಿರುವ ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆಯನ್ನು ಮತ್ತಷ್ಟು ತೀವ್ರಗೊಳಿಸಬೇಕು. ಅದಕ್ಕಾಗಿ ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ನಿಯೋಜಿಸುವಂತೆ ನಗರ ಪೊಲೀಸ್‌ ಆಯುಕ್ತ ಶಶಿಕುಮಾರ್‌ ಅವರಿಗೆ ನಿರ್ದೇಶನ ನೀಡಿದರು.
ಕೋವಿಡ್‌ಗೆ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಅತ್ಯಂತ ಅಗತ್ಯವಿರುವ ಪ್ರಾಣವಾಯು ವೈದ್ಯಕೀಯ ಆಮ್ಲಜನಕದ 17 ಘಟಕಗಳು ಜಿಲ್ಲೆಯಲ್ಲಿ ಅನುಷ್ಠಾನವಾಗುತ್ತಿದ್ದು, ಅವುಗಳಲ್ಲಿ ಈಗಾಗಲೇ 8 ಆಮ್ಲಜನಕ ಘಟಕಗಳ ಅನುಷ್ಠಾನ ಕಾರ್ಯ ಪೂರ್ಣಗೊಂಡಿದೆ. ಉಳಿದ ಘಟಕಗಳನ್ನು ಮುಂದಿನ ಎರಡು ವಾರಗಳಲ್ಲಿ ಪೂರ್ತಿಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿಯವರಿಂದ ಮಾಹಿತಿ ಪಡೆದರು.

ಇದನ್ನೂ ಓದಿ :ಫ್ರೆಂಡ್ ಶಿಪ್ ಡೇ ವಿಡಿಯೋ ಪೋಸ್ಟ್ ಮಾಡಿದ ಯುವಿ: ಧೋನಿ, ಕೊಹ್ಲಿಗಿಲ್ಲ ಜಾಗ!

ಗಡಿ ಮುಖೇನ ಪ್ರವೇಶ ಪಡೆಯುವ ಪ್ರತಿಯೊಬ್ಬರಲ್ಲೂ ಕೊರೊನಾ ನೆಗೆಟಿವ್‌ ವರದಿ ಇರಬೇಕು. ಎರಡು ಡೋಸ್‌ ಕೋವಿಡ್‌ ವ್ಯಾಕ್ಸಿನ್‌ ಪಡೆದಿರಬೇಕು ಹಾಗೂ ಅವರ ಸಂಪರ್ಕವ‌ನ್ನು ಪತ್ತೆ ಹಚ್ಚಬೇಕು. ಪ್ರತಿನಿತ್ಯ ಕೆಲಸ ಕಾರ್ಯಗಳಿಗಾಗಿ ಆಗಮಿಸುವವರಿಗೆ ಪ್ರತಿ 7 ದಿನಕ್ಕೊಮ್ಮೆ ಕಡ್ಡಾಯವಾಗಿ ಕೋವಿಡ್‌ ತಪಾಸಣಾ ಫಲಿತಾಂಶವನ್ನು ಪರಿಶೀಲಿಸಬೇಕು. ಪ್ರಮುಖವಾಗಿ ರೈಲು ನಿಲ್ದಾಣಗಳಲ್ಲಿ ಹೆಚ್ಚಿನ ತಪಾಸಣೆ ಮಾಡಬೇಕು. ಅಲ್ಲಿ ರ್ಯಾಟ್‌ ಪರೀಕ್ಷೆ ನಡೆಸಬೇಕು. ರೈಲಿನ ಮೂಲಕ ಹೆಚ್ಚಿನ ಮಂದಿ ಬರುವ ಕಾರಣ ಅಲ್ಲಿ ಕೋವಿಡ್‌ ಟೆಸ್ಟ್‌ ಮಾಡುವ ಕೌಂಟರುಗಳ ಸಂಖ್ಯೆಯನ್ನು ಹೆಚ್ಚಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಪೊಲೀಸ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗಡಿ ಭಾಗದ ತಪಾಸಣೆಗೆ ಪ್ರವಾಸ ಕೈಗೊಂಡು ಸ್ಥಿತಿ-ಗತಿಗಳನ್ನು ಅವಲೋಕಿಸುವುದಾಗಿಯೂ ಅವರು ಹೇಳಿದರು.

Advertisement

ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿರುವ ವಿಡಿಯೋ ಕಾನ್ಪರೆನ್ಸ್‌ ಹಾಲ್‌ನಲ್ಲಿ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಅವರು ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್‌ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಮುಂಬರುವ ಒಂದು ವಾರ ಕೇರಳ ರಾಜ್ಯದ ಕಾಸರಗೋಡಿಗೆ ಸರ್ಕಾರಿ ಹಾಗೂ ಖಾಸಗಿ ಬಸ್‌ಗಳ ಸಂಚಾರವನ್ನು ನಿಷೇಧಿಸಲಾಗಿದೆ. ಜಿಲ್ಲೆಯಲ್ಲಿ ಗಡಿ ಭಾಗದಲ್ಲಿ 12 ಕಡೆ ಚೆಕ್‌ಪೋಸ್ಟ್‌ ರಚಿಸಲಾಗಿದೆ. 6 ರಸ್ತೆ ಹಾಗೂ 6 ರೈಲ್ವೇ ಸ್ಟೇಷನ್‌ಗಳಲ್ಲಿ, ಅವುಗಳಲ್ಲಿ ತಲಪಾಡಿ ಚೆಕ್‌ಪೋಸ್ಟ್‌ ಅತಿ ಮುಖ್ಯವಾದದ್ದಾಗಿದೆ. ಅಲ್ಲಿ ದಿನದ 24 ಗಂಟೆ ತಪಾಸಣೆ ಮಾಡಲಾಗುತ್ತಿದೆ. ವೈದ್ಯಕೀಯ ತುರ್ತು ಸೇವೆಗೆ ಹೊರತು ಪಡಿಸಿ, ಇತರೆ ಸಂಚಾರವನ್ನು ನಿಷೇಧಿಸಲಾಗುತ್ತಿದೆ ಎಂದರು.

ಇದನ್ನೂ ಓದಿ :ಉಡುಪಿ: 1ಕಿಲೋ, 226  ಗ್ರಾಂ ಗಾಂಜಾ ವಶ; ಇಬ್ಬರು ಆರೋಪಿಗಳ  ಬಂಧನ

ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ| ಕುಮಾರ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಋಷಿಕೇಶ್‌ ಭಗವಾನ್‌ ಸೋನಾವಣೆ, ಪಾಲಿಕೆ ಆಯುಕ್ತ ಅಕ್ಷಯ್‌ ಶ್ರೀಧರ್‌, ಅಪರ ಜಿಲ್ಲಾಧಿಕಾರಿ ಪ್ರಜ್ಞಾ ಅಮ್ಮೆಂಬಳ, ಸಹಾಯಕ ಆಯುಕ್ತ ಮದನ್‌ ಮೋಹನ್‌, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ಕಿಶೋರ್‌ ಕುಮಾರ್‌ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು ವಿಡಿಯೋ ಕಾನ್ಪರೆನ್ಸ್‌ನಲ್ಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next