ಕೊರೊನಾದಿಂದ ಶೈಕಣಿಕ ಕ್ಷೇತ್ರ ಸಂಪೂರ್ಣ ನಲುಗಿಹೋಗಿದೆ. ಪ್ರಾಥಮಿಕ, ಪ್ರೌಢ, ಉನ್ನತ ಶಿಕ್ಷಣದ ಮೇಲೆ ಸಮಾನ ಪರಿಣಾಮ ಬೀರಿದೆ. ತಾಂತ್ರಿಕ ಶಿಕ್ಷಣ ಕ್ಷೇತ್ರವೂ ಇದಕ್ಕೆ ಹೊರತಾಗಿಲ್ಲ. ಕಳೆದ ಒಂದೂವರೆ ವರ್ಷದಿಂದ ಯಾವ ಶಿಕ್ಷಣ ಸಂಸ್ಥೆಯಲ್ಲೂ ಭೌತಿಕ ತರಗತಿಗಳು ಸರಿಯಾಗಿ ನಡೆದಿಲ್ಲ. ಆನ್‌ಲೈನ್ ಹಾಗೂ ಪೂರ್ವ ಮುದ್ರಿತ ವೀಡಿಯೋ ತರಗತಿಗಳ ಮೂಲಕವೇ ಹೆಚ್ಚು ಬೋಧನೆ ನಡೆದಿದೆ. ಆದರೆ ಇಂದಿಗೂ ವಿದ್ಯಾರ್ಥಿಗಳು ಆನ್‌ಲೈನ್ ಶಿಕ್ಷಣಕ್ಕೆ ಸಂಪೂರ್ಣವಾಗಿ ಒಗ್ಗಿಕೊಂಡಿಲ್ಲ ಮತ್ತು ನೆಟ್‌ವರ್ಕ್ ಸಹಿತವಾಗಿ ತಾಂತ್ರಿಕ ಸಮಸ್ಯೆಗಳು ಬಗೆಹರಿದಿಲ್ಲ. ಇದು ಗ್ರಾಮೀಣ ಭಾಗದ ಪದವಿ, ಸ್ನಾತಕೋತ್ತರ ಪದವಿ ಹಾಗೂ ವೃತ್ತಿಪರ ಕೋರ್ಸ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಾಕಷ್ಟು ಸಮಸ್ಯೆ ಉಂಟುಮಾಡಿದೆ. ಸರಕಾರದಿಂದಲೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಈ ವಿಷಯವಾಗಿ ನ್ಯಾಯ ಒದಗಿಸಲು ಸಾಧ್ಯವಾಗಿಲ್ಲ. ಇಂದಿಗೂ ಅನೇಕ ವಿದ್ಯಾರ್ಥಿಗಳು ಆನ್‌ಲೈನ್ ತರಗತಿಯಲ್ಲಿ ಭಾಗವಹಿಸಲು ತಾಂತ್ರಿಕ ಸಮಸ್ಯೆ ಎದುರಿಸುತ್ತಿದ್ದಾರೆ. ಆನ್‌ಲೈನ್ ತರಗತಿಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿರುವುದು ಒಂದೆಡೆಯಾದರೆ ಭೌತಿಕ ತರಗತಿಯಷ್ಟು ಪರಿಣಾಮಕಾರಿಯಾಗಿ ಬೋಧನೆ ಇಲ್ಲದೇ ಇರುವುದರಿಂದ ವಿದ್ಯಾರ್ಥಿಗಳ ಭವಿಷ್ಯದ ಯೋಚನೆ ಕಾಡಲಾರಂಭಿಸಿದೆ. ಇವೆಲ್ಲದರ ಪರಿಣಾಮವಾಗಿ ಉನ್ನತ ಶಿಕ್ಷಣದಲ್ಲಿ ವ್ಯಾಸಂಗವನ್ನು ಅರ್ಧಕ್ಕೆ ಮೊಟಕುಗೊಳಿಸುತ್ತಿರುವ ವಿದ್ಯಾರ್ಥಿಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ.
ಸಾಮಾನ್ಯ ಪದವಿ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್, ಡಿಪ್ಲೊಮಾ ಸಹಿತವಾಗಿ ವಿವಿಧ ಪದವಿ ಹಾಗೂ ಸ್ನಾತಕೋತ್ತರ ಪದವಿಗಳಲ್ಲಿ ಶೇ.20ರಷ್ಟು ವಿದ್ಯಾರ್ಥಿಗಳು ಕೊರೊನಾ ಸಂಕಷ್ಟ ಹಾಗೂ ಅದರಿಂದ ಉದ್ಭವಿಸಿರುವ ಆರ್ಥಿಕ ದುಃಸ್ಥಿತಿಯಿಂದ ವಿದ್ಯಾಭ್ಯಾಸವನ್ನು ಅರ್ಧಕ್ಕೆ ಮೊಟಕುಗೊಳಿಸಿ, ಜೀವನೋಪಾಯಕ್ಕಾಗಿ ತಾತ್ಕಾಲಿಕ ಉದ್ಯೋಗ ಸೇರಿಕೊಳ್ಳುತ್ತಿದ್ದಾರೆ. ಇನ್ನು ಅನೇಕ ವಿದ್ಯಾರ್ಥಿಗಳು ಉದ್ಯೋಗ ಹುಡುಕುತ್ತಿದ್ದಾರೆ. ಸರಕಾರ ಈ ವಿಚಾರವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಕೊರೊನಾ ಅಥವಾ ಇನ್ನಾವುದೇ ಕಾರಣ ದಿಂದ ಕಾಲೇಜು ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸುತ್ತಿರುವ ವಿದ್ಯಾರ್ಥಿಗಳನ್ನು ಪತ್ತೆ ಹಚ್ಚಿ, ಪುನಃ ಅವರನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವ ಕಾರ್ಯ ಮಾಡಬೇಕು.
2021-22ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಸೆಪ್ಟಂಬರ್-ಅಕ್ಟೋಬರ್‌ನಲ್ಲಿ ಆರಂಭವಾಗಲಿದೆ. ಇದಕ್ಕೆ ಪೂರಕವಾಗಿ ಪ್ರವೇಶ ಪ್ರಕ್ರಿಯೆಗಳು ಶೀಘ್ರ ಆರಂಭವಾಗಲಿದೆ. ಈ ವೇಳೆಯಲ್ಲಿ ಕಳೆದ ವರ್ಷ ಪದವಿ, ಸ್ನಾತಕೋತ್ತರ ಪದವಿ, ತಾಂತ್ರಿಕ ಕೋರ್ಸ್‌ಗಳಲ್ಲಿ ದ್ವಿತೀಯ ಅಥವಾ ತೃತೀಯ ವರ್ಷದಲ್ಲಿ ವಿದ್ಯಾರ್ಥಿಗಳು ಈಗ ಮುಂದಿನ ವರ್ಷಕ್ಕೆ ದಾಖಲಾತಿ ಮಾಡಿಕೊಂಡಿದ್ದಾರೋ ಅಥವಾ ಇಲ್ಲವೋ ಎಂಬುದರ ಸಂಪರ್ಕ ಮಾಹಿತಿ ಸಂಗ್ರಹಣೆ ಮಾಡಬೇಕು. ಕೊರೊನಾ ಕಾರಣದಿಂದ ವಿದ್ಯಾಭ್ಯಾಸವನ್ನು ಮೊಟಕುಗೊಳಿಸಿ, ತಾತ್ಕಾಲಿಕ ಉದ್ಯೋಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಮುಂದೆ ಶೈಕ್ಷಣಿಕ ಭವಿಷ್ಯವೇ ಇಲ್ಲದಂತಾಗಬಾರದು.
ಕೌಟುಂಬಿಕ ಪರಿಸ್ಥಿತಿ, ಆರ್ಥಿಕ ಸಂಕಷ್ಟದಿಂದ ಶಿಕ್ಷಣ ಮೊಟಕು ಗೊಳಿಸಿದ ವಿದ್ಯಾರ್ಥಿಗಳು ಪುನಃ ಕಾಲೇಜಿಗೆ ಬರುವಂತಾಗಬೇಕು. ಈ ನಿಟ್ಟಿನಲ್ಲಿ ಸರಕಾರ ವಿಶೇಷ ಆದ್ಯತೆ ನೀಡುವ ಅಗತ್ಯವಿದೆ.