ಬೀದರ: ಮಹಾರಾಷ್ಟ್ರದಲ್ಲಿ ರೂಪಾಂತರ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಮವಾರದಿಂದ ಜಿಲ್ಲೆಯಲ್ಲಿ ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಂಡಿದ್ದು, ಗಡಿ ಭಾಗದಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಬಸವಕಲ್ಯಾಣ ತಾಲೂಕಿನ ಚಂಡಕಾಪುರ ರಾಷ್ಟ್ರೀಯ ಹೆದ್ದಾರಿ ಮತ್ತು ಕಮಲನಗರ ಪಟ್ಟಣದ ಹೊರ ವಲಯದ ಹೆದ್ದಾರಿಯಲ್ಲಿ ಗಡಿ ಚೆಕ್ ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದ್ದು, ಮಹಾರಾಷ್ಟ್ರದಿಂದ ಜಿಲ್ಲೆಗೆ ಪ್ರವೇಶಿಸುವ ಪ್ರಯಾಣಿಕರ ಮೇಲೆ ನಿಗಾ ವಹಿಸಲಾಗಿದೆ.
ಹೆದ್ದಾರಿ ಮೇಲೆ ಬ್ಯಾರಿಕೇಡ್‌ಗಳನ್ನು ಹಾಕಿ ರಾಜ್ಯಕ್ಕೆ ಆಗಮಿಸುವ ಪ್ರತಿಯೊಂದು ವಾಹನಗಳನ್ನು ತಡೆದು ತಪಾಸಣೆ ಮಾಡಲಾಗುತ್ತಿದೆ. ಆರೋಗ್ಯ ಇಲಾಖೆ, ಕಂದಾಯ ಮತ್ತು ಪೊಲೀಸ್ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡಗಳನ್ನು ತಪಾಸಣಾ ಕಾರ್ಯಕ್ಕೆ ನಿಯೋಜಿಸಲಾಗಿದೆ.
ರಾಜ್ಯ ಸರ್ಕಾರದ ನಿರ್ದೇಶನದಂತೆ ಮಹಾರಾಷ್ಟ್ರದ ಬರುವ ಪ್ರಮಾಣಿಕರ ಕಡ್ಡಾಯವಾಗಿ 72 ಗಂಟೆಗಳ ಕೋವಿಡ್ ಆರ್ ಟಿಪಿಸಿಆರ್ ನೆಗೆಟಿವ್ ವರದಿಯನ್ನು ನೋಡಿ ಪ್ರವೇಶಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ. ಪ್ರಮಾಣಪತ್ರ ತರದವರಿಗೆ ಥರ್ಮಲ್ ಸ್ಕ್ರೀನಿಂಗ್ ಮತ್ತು ಪಲ್ಸ್ ಆಕ್ಸಿಮೀಟರ್‌ನಿಂದ ತಪಾಸಣೆ ಮಾಡಲಾಗುತ್ತಿದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಪ್ರಯಾಣಿಕರನ್ನು ಕರೆದುಕೊಂಡು ಬರುವಾಗ ಆರ್‌ಟಿಪಿಸಿಆರ್ ತಪಾಸಣಾ ವರದಿ ನೋಡಿಯೇ ಬಸ್ ಹತ್ತಿಸಬೇಕು. ನೆಗೆಟಿವ್ ವರದಿ ಇಲ್ಲದೇ ಯಾವುದೇ ಪ್ರಯಾಣಿಕರನ್ನು ಬಸ್‌ಗೆ ಹತ್ತಿಸಿಕೊಳ್ಳುವಂತಿಲ್ಲ ಎಂದು ತಿಳಿಸಲಾಗಿದೆ ಎಂದು ಎನ್‌ಈಕೆಆರ್‌ಟಿಸಿ ಡಿಸಿ ಹೇಳಿದ್ದಾರೆ.
20 ರೈಲುಗಳ ಸಂಚಾರ: ಕಲಬುರಗಿ ಮೂಲಕ ನಿತ್ಯ 20
ರೈಲುಗಳು ಸಂಚರಿಸುತ್ತಿವೆ. ಇದರಲ್ಲಿ ಸೊಲ್ಲಾಪುರದಿಂದ ಒಂದು ಮತ್ತು ಮುಂಬೈ ಒಂದರಿಂದಲೇ ಸುಮಾರು 16 ರೈಲುಗಳು ಆಗಮಿಸುತ್ತವೆ. ಆದರೂ, ಸೋಮವಾರ ಸಂಜೆ 4 ಗಂಟೆಯಾದರೂ ಜಿಲ್ಲಾಡಳಿತದಿಂದ ರೈಲ್ವೆ ನಿಲ್ದಾಣದಲ್ಲಿ ಯಾವುದೇ ಕ್ರಮ ತೆಗೆದುಕೊಂಡಿರಲಿಲ್ಲ. ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳ ಹಿನ್ನಲೆಯಲ್ಲಿ ನಗರದ ರೈಲು ನಿಲ್ದಾಣದಲ್ಲಿ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುತ್ತಿದೆ. ಆದರೆ, ಕೋವಿಡ್ ನೆಗೆಟಿವ್ ಪ್ರಮಾಣ ಪತ್ರ ಪರಿಶೀಲನೆ ನಡೆಯದಿರುವುದು ಕಂಡು ಬಂದಿದೆ.