ಮಂಗಳೂರು: ಕೋವಿಡ್ 19 ಪಾಸಿಟಿವ್ ಆಗಿದ್ದ ಬಂಟ್ವಾಳ ತಾಲೂಕಿನ ಸಜೀಪನಡು ಗ್ರಾಮದ 10 ತಿಂಗಳ ಮಗುವು ಸಂಪೂರ್ಣ ಗುಣಮುಖವಾಗಿ, ಇಂದು ಆಸ್ಪತ್ರೆಯಿಂದ ಬಿಡುಗಡೆಗೊಂಡು ಮನೆಗೆ ತೆರಳಿದೆ. ಮಗುವಿನ ತಾಯಿ ಹಾಗೂ ಅಜ್ಜಿಯ ಪರೀಕ್ಷಾ ವರದಿಗಳು ನೆಗೆಟಿವ್ ಆಗಿರುತ್ತದೆ. ಇವರೂ ಕೂಡಾ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಈ ಮೂಲಕ ಇದುವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 12 ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ 6 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಶೇಕಡಾ 50 ಪ್ರಗತಿಯಾಗಿದೆ. ಈ ವಾರ ಪೂರ್ತಿ ಅಂದರೆ ಏಪ್ರಿಲ್ 5 ರಿಂದ 11 ರವರೆಗೆ ದ.ಕ. ಜಿಲ್ಲೆಯಲ್ಲಿ ಯಾವುದೇ ಹೊಸ ಕೋವಿಡ್ ಸೋಂಕಿನ ಹೊಸ ಪ್ರಕರಣಗಳು ದೃಢಪಡದಿರುವುದೂ ಸಹ ಜಿಲ್ಲೆಯ ಮಟ್ಟಿಗೆ ಆಶಾದಾಯಕ ಸಂಗತಿಯೇ ಆಗಿದೆ.
10 ತಿಂಗಳ ಮಗುವಿನಲ್ಲಿ ಕೋವಿಡ್ ಸೋಂಕು ಪತ್ತೆಯಾದ ಪ್ರಕರಣವು, ರಾಜ್ಯದಲ್ಲೇ ವಿಶಿಷ್ಟ ಪ್ರಕರಣವಾಗಿ ಗಮನ ಸೆಳೆದಿತ್ತು ಮತ್ತು ಆತಂಕಕ್ಕೂ ಕಾರಣವಾಗಿತ್ತು. ಎದೆ ಹಾಲು ಕುಡಿಯುವ ಪುಟ್ಟ ಕಂದನಿಗೆ ಚಿಕಿತ್ಸೆ ನೀಡುವುದು ವೈದ್ಯರಿಗೂ ಸವಾಲಾಗಿತ್ತು. ಪುಟ್ಟ ಮಗುವಿನ ಐಸೋಲೇಶನ್ ನೊಂದಿಗೆ, ಚಿಕಿತ್ಸೆ ನೀಡುವುದು ಬಹಳ ಸೂಕ್ಷ್ಮವಾಗಿತ್ತು.
ವೈದ್ಯರು ಈ ಸವಾಲನ್ನು ಬಹಳ ನಾಜೂಕಾಗಿ ನಿರ್ವಹಿಸಿದ್ದು, ವೆನ್ ಲಾಕ್ ಹಾಗೂ ಖಾಸಗಿ ಆಸ್ಪತ್ರೆ ವೈದ್ಯರು ಗುಣಮಟ್ಟದ ಚಿಕಿತ್ಸೆ ನೀಡಿ, ಮಗುವನ್ನು ಗುಣಮುಖಗೊಳಿಸಿದ್ದಾರೆ. ಇದು ಜಿಲ್ಲೆಯ ವೈದ್ಯಕೀಯ ಕ್ಷೇತ್ರಕ್ಕೂ ಖ್ಯಾತಿ ತಂದಿದೆ.
ಅದೇ ರೀತಿ ಈ ಮಗುವಿನ ಗ್ರಾಮದಲ್ಲಿ ಯಾರಿಗೂ ಕೋವಿಡ್ ಸೋಂಕು ಹರಡದಿರುವುದೂ ಸಹ ಸಮಾಧಾನಕರ ವಿಷಯವಾಗಿದೆ. ನವಜಾತ ಶಿಶುವಿನಲ್ಲಿ ಕೋವಿಡ್ ಸೊಂಕು ದೃಢಪಟ್ಟ ನಂತರ ಪೂರ್ತಿ ಸಜೀಪನಡು ಗ್ರಾಮವನ್ನು ಸಂಪೂರ್ಣ ಸೀಲ್ ಮಾಡಲಾಗಿತ್ತು.
ಈ ವಿಚಾರದಲ್ಲಿ ಗ್ರಾಮಸ್ಥರೂ ಸಹ ಜಿಲ್ಲಾಡಳಿತದೊಂದಿಗೆ ಉತ್ತಮ ಸಹಕಾರ ನೀಡಿದ್ದಾರೆ. ಈ ಅವಧಿಯಲ್ಲಿ ಜಿಲ್ಲಾಡಳಿತ ಗ್ರಾಮಸ್ಥರಿಗೆ ಎಲ್ಲಾ ಅಗತ್ಯ ಸಾಮಾಗ್ರಿಗಳು, ಸೌಲಭ್ಯಗಳನ್ನು ಮನೆ ಬಾಗಿಲಿಗೆ ಒದಗಿಸುವ ಕೆಲಸವನ್ನು ಯಶಸ್ವಿಯಾಗಿ ಮಾಡಿತ್ತು.