ಚಿಕ್ಕಮಗಳೂರು: ಕೋವಿಡ್ ಸೋಂಕು ತಡೆಗಟ್ಟಲು ಜಿಲ್ಲಾಡಳಿತ ನೀಡಿರುವ ಸೂಚನೆಗಳು ಗ್ರಾಮೀಣ ಪ್ರದೇಶ ಮತ್ತು ತಾಲೂಕು ಮಟ್ಟದಲ್ಲಿ ಪಾಲನೆಯಾಗುವಂತೆ ನೋಡಿಕೊಳ್ಳಲು ಜಿಲ್ಲಾಧಿಕಾರಿಗೆ ಸೂಚಿಸಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರಿಗಳು ಜಿಲ್ಲೆಯಲ್ಲಿ ಕುಳಿತು ಸಭೆ ಮಾಡುವುದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ, ಈ ನಿಟ್ಟಿನಲ್ಲಿ ಜಿಲ್ಲಾಮಟ್ಟದ ಪ್ರಮುಖ ಅಧಿ ಕಾರಿಗಳನ್ನು ನೇಮಿಸಬೇಕು ಎಂದು ತಿಳಿಸಿದ್ದೇನೆ ಎಂದರು.
ಸಾರ್ವಜನಿಕರು ನಿಷ್ಕ್ರಿಯವಾಗಲು ಸಿದ್ಧವಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಕೋವಿಡ್‌ನ್ನು ಹೇಗೆ ನಿವಾರಣೆ ಮಾಡುವುದು ಎಂದ ಅವರು, ಸಂಬಂಧಪಟ್ಟ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಲೆಕ್ಕಾಧಿಕಾರಿ ಮತ್ತು ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ನಿಯಮಗಳ ಪಾಲನೆಗೆ ಗಮನ ನೀಡಬೇಕು. ಅವರಿಗೂ ಸಾಧ್ಯವಾಗದಿದ್ದರೇ, ಪೊಲೀಸ್ ಸಿಬ್ಬಂದಿಯನ್ನು ಬಳಸಿಕೊಳ್ಳುವಂತೆ ತಿಳಿಸಿರುವುದಾಗಿ ಹೇಳಿದರು.
ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ವಾರ್ಡ್‌ನಲ್ಲಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿರುವ ಹಾಸಿಗೆಯಿಂದ ಮತ್ತೂಂದು ಹಾಸಿಗೆ ಸ್ಕ್ರೀನ್‌ಗಳನ್ನು ಹಾಕಬೇಕು. ಆಕ್ಸಿಜನ್ ಉತ್ಪಾದನಾ ಪ್ಲಾಂಟ್ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, 15 ರಿಂದ 20 ದಿನಗಳಲ್ಲಿ ನಿರ್ಮಾಣವಾಗಲಿದೆ. 3ನೇ ಅಲೆ ನಿಯಂತ್ರಣಕ್ಕೆ ತಜ್ಞ ವೈದ್ಯರಿಂದ ಸಲಹೆ ಪಡೆದುಕೊಂಡಿದ್ದು, ಅದರಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು