ಹಾವೇರಿ: ಕೋವಿಡ್-19 ಚಿಕಿತ್ಸೆ ನೀಡಲು ರಾಜ್ಯ ಸರ್ಕಾರ ಖಾಸಗಿ ಆಸ್ಪತ್ರೆಗಳಿಗೂ ಅವಕಾಶ ಮಾಡಿಕೊಟ್ಟಿದ್ದು, ಈ ಹಿನ್ನೆಲೆಯಲ್ಲಿ ಅಗತ್ಯ ಸೌಲಭ್ಯ ಹೊಂದಿದ ಜಿಲ್ಲೆಯ ಖಾಸಗಿ ಆಸ್ಪತ್ರೆಗಳಿಗೆ ಜಿಲ್ಲಾ ಮಟ್ಟದಲ್ಲಿಯೇ ಅನುಮತಿ ನೀಡಲು ಜಿಲ್ಲಾಡಳಿತ ಕ್ರಮವಹಿಸಿದೆ.
ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಯ 19 ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್-19ಗೆ ಚಿಕಿತ್ಸೆ ನೀಡಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಆದರೆ, ಇವುಗಳಲ್ಲಿ ಯಾವ ಆಸ್ಪತ್ರೆಯಲ್ಲಿ ಕೋವಿಡ್-19 ಚಿಕಿತ್ಸೆಗೆ ಬೇಕಾದ ವೆಂಟಿಲೇಟರ್ ವ್ಯವಸ್ಥೆ, ಪ್ರತ್ಯೇಕ ಐಸೋಲೇಟೆಡ್ ವಾರ್ಡ್ ವ್ಯವಸ್ಥೆ, ಪಿಪಿಇ ಕಿಟ್ ಸೇರಿದಂತೆ ಇನ್ನಿತರ ಅಗತ್ಯ ಹಾಗೂ ಸುರಕ್ಷತಾ ವ್ಯವಸ್ಥೆ ಇದೆಯೋ ಅಂಥ ಆಸ್ಪತ್ರೆಗಳಿಗೆ ಮಾತ್ರ ಚಿಕಿತ್ಸೆಗೆ ಅನುಮತಿ ನೀಡಲು ಸರ್ಕಾರ ಸೂಚಿಸಿದೆ. ಆಸ್ಪತ್ರೆಯ ಸೌಲಭ್ಯ ನೋಡಿ ಅನುಮತಿ ನೀಡುವ ಅಧಿಕಾರವನ್ನು ಜಿಲ್ಲಾಧಿಕಾರಿಯವರಿಗೆ ನೀಡಲಾಗಿದೆ.
ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಹಾವೇರಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಕಡಿಮೆ ಇರುವುದರಿಂದ ಸೋಂಕಿತರಿಗೆ ಚಿಕಿತ್ಸೆಗೆ ಸಕಲ ಸೌಲಭ್ಯ ಹಾಗೂ ಸುರಕ್ಷತಾ ಕ್ರಮ ಹೊಂದಿರುವ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿಯೇ ಪ್ರಥಮ ಆದ್ಯತೆಯಾಗಿ ಚಿಕಿತ್ಸೆ ನೀಡಲಾಗುತ್ತದೆ. ಒಂದು ವೇಳೆ ಮುಂದಿನ ದಿನಗಳಲ್ಲಿ ಜಿಲ್ಲಾ ಸರ್ಕಾರಿ ಕೋವಿಡ್ ಆಸ್ಪತ್ರೆಯಲ್ಲಿ ಬೆಡ್ ಫುಲ್ ಆದರೆ ಇಲ್ಲವೇ ಸೋಂಕಿತರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಇಚ್ಛಿಸಿದರೆ ಕೋವಿಡ್-19 ಚಿಕಿತ್ಸೆ ನೀಡಲು ಅನುಮತಿ ಪಡೆದಿರುವ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಕೋವಿಡ್-19 ಚಿಕಿತ್ಸೆ ನೀಡಲು ಹೊಂದಿರಬೇಕಾದ ಸೌಲಭ್ಯ ಇರುವ ದೊಡ್ಡ ಮಟ್ಟದ ಆಸ್ಪತ್ರೆಗಳು ಜಿಲ್ಲೆಯಲ್ಲಿ ಇಲ್ಲ. ಹೀಗಾಗಿ ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಗಳಿಂದ ಕೋವಿಡ್ -19ಗೆ ಚಿಕಿತ್ಸೆ ಸಿಗುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ.
ಯಾರೂ ಅನುಮತಿ ಪಡೆದಿಲ್ಲ : ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆ ವ್ಯಾಪ್ತಿಯಲ್ಲಿ ಬರುವ ಯಾವ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್-19 ಚಿಕಿತ್ಸೆಗೆ ಬೇಕಾದ ಸೌಲಭ್ಯ ಇದೆಯೋ ಅವುಗಳಿಗೆ ಜಿಲ್ಲಾ ಮಟ್ಟದಲ್ಲಿಯೇ ಜಿಲ್ಲಾಧಿಕಾರಿಯವರಿಂದ ಅನುಮತಿ ನೀಡಲು ಸರ್ಕಾರ ಸೂಚಿಸಿದೆ. ಚಿಕಿತ್ಸೆಗೆ ಬೇಕಾದ ಸೌಲಭ್ಯ ಹೊಂದುವಂಥ ದೊಡ್ಡ ಖಾಸಗಿ ಆಸ್ಪತ್ರೆಗಳು ಜಿಲ್ಲೆಯಲ್ಲಿ ಇಲ್ಲ. ಹೀಗಾಗಿ ಈವರೆಗೆ ಯಾರೂ ಅನುಮತಿ ಪಡೆದಿಲ್ಲ.
-ರಾಜೇಂದ್ರ ದೊಡ್ಡಮನಿ, ಡಿಎಚ್‌ಒ