ಉಡುಪಿ: ಕೃಷ್ಣನೂರು ಉಡುಪಿಯಲ್ಲಿ ಇಂದೂ ಕೋವಿಡ್-19 ಸೋಂಕು ಪ್ರಕರಣಗಳು ದೃಢವಾಗಿದೆ. ಇಂದು ಮತ್ತೆ ಮೂರು ಪ್ರಕರಣಗಳು ದೃಢವಾಗಿದ್ದು, ಜಿಲ್ಲೆಯ ಜನರ ಆತಂಕ ಮತ್ತಷ್ಟು ಹೆಚ್ಚಿದೆ.
ಶುಕ್ರವಾರ ಮಧ್ಯಾಹ್ನದ ವರದಿಯಲ್ಲಿ ಯಾವುದೇ ಸೋಂಕು ಪ್ರಕರಣಗಳು ವರದಿಯಾಗಿರಲಿಲ್ಲ. ರಾಜ್ಯ ಆರೋಗ್ಯ ಇಲಾಖೆಯ ಸಂಜೆಯ ವರದಿಯಲ್ಲಿ ಮೂರು ಪ್ರಕರಣಗಳು ದೃಢವಾಗಿದ್ದು, ಈ ಮೂವರೂ ಮಹಾರಾಷ್ಟ್ರದಿಂದ ಬಂದವರಾಗಿದ್ದು, 31 ಮತ್ತು 55 ವರ್ಷದ ಇಬ್ಬರು ಗಂಡಸರು ಮತ್ತು 48 ವರ್ಷದ ಓರ್ವ ಮಹಿಳೆಗೆ ಸೋಂಕು ತಾಗಿರುವುದು ದೃಢವಾಗಿದೆ.
ಸುಮಾರು ಒಂದು ತಿಂಗಳ ಕಾಲ ಯಾವುದೇ ಕೋವಿಡ್19 ಪಾಸಿಟಿವ್ ಪ್ರಕರಣವಿಲ್ಲದೆ ನಿರಾಳವಾಗಿದ್ದ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸೋಂಕು ಸ್ಪೋಟವಾಗುತ್ತಿದೆ. ಅಂತಾರಾಷ್ಟ್ರೀಯ ಮತ್ತು ಅನ್ಯ ರಾಜ್ಯ ಪ್ರಯಾಣಿಕರಿಂದ ಕರಾವಳಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಅದರಲ್ಲೂ ಮಹಾರಾಷ್ಟ್ರದಿಂದ ಬರುತ್ತಿರುವ ಪ್ರಯಾಣಿಕರಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಳ್ಳುತ್ತಿದೆ.
ಗುರುವಾರ ಒಂದೇ ದಿನ 26 ಪ್ರಕರಣಗಳು ಉಡುಪಿಯಲ್ಲಿ ಕಾಣಿಸಿಕೊಂಡಿತ್ತು. ಬಹುತೇಕ ಪ್ರಯಾಣಿಕರು ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ. ಅದರಲ್ಲೂ ಇವರಲ್ಲಿ16 ಸೋಂಕಿತರು ಹತ್ತು ವರ್ಷಕ್ಕಿಂತ ಕೆಳಗಿನ ಮಕ್ಕಳಾಗಿದ್ದರು ಎನ್ನುವುದು ಆಘಾತಕಾರಿ ಸಂಗತಿಯಾಗಿದೆ.
ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 50ಕ್ಕೇರಿದ್ದು, ಮೂವರು ಗುಣಮುಖರಾಗಿದ್ದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಓರ್ವ ಸೋಂಕಿತ ಸಾವನ್ನಪ್ಪಿದ್ದು, 46 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.